
ಬೆಳಗಾವಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಸಾವು-ನೋವುಗಳಾಗಿವೆ. ದೈವದರ್ಶನ ಮುಗಿಸಿ ಬರುತ್ತಿದ್ದ ಯಾತ್ರಾರ್ಥಿಗಳು ಗಾಯಗೊಂಡಿದ್ದರೆ, ಮತ್ತೊಂದೆಡೆ ಲಾರಿ ಮತ್ತು ಕಾರಿನ ನಡುವಿನ ಡಿಕ್ಕಿಯಲ್ಲಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾತ್ರಾರ್ಥಿಗಳಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ದರ್ಶನ ಮುಗಿಸಿಕೊಂಡು ಬೆಳಗಾವಿ ನಗರದತ್ತ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಾಲಕನ ಅಚಾತುರ್ಯದಿಂದ ವಾಹನವು ರಸ್ತೆಯಲ್ಲೇ ಉರುಳಿಬಿದ್ದಿದೆ.
ವಾಹನ ಪಲ್ಟಿಯಾದ ರಭಸಕ್ಕೆ ಅದರಲ್ಲಿದ್ದ ಏಳು ಮಂದಿ ಯಾತ್ರಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರೆಲ್ಲರೂ ಬೆಳಗಾವಿಯ ಶಹಾಪುರ ನಿವಾಸಿಗಳೆಂದು ಗುರುತಿಸಲಾಗಿದ್ದು, ಎಲ್ಲರನ್ನೂ ತಕ್ಷಣವೇ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.
ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ಯಮರೂಪಿಯಾಗಿ ಬಂದ ಲಾರಿ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ರಕ್ತದ ಮಡುವಿನಲ್ಲಿ ಯುವಕರು ಸಿಲುಕಿಕೊಂಡಿದ್ದರು.
ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಬಳಿಕ ತೀವ್ರ ಗಾಯಗೊಂಡಿದ್ದ ಉಳಿದಿಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್ (22), ನಂಜುಂಡಿ (23), ರಾಹಲ್ (23) ಹಾಗೂ ಯಶ್ವಂತ್ (22) ಎಂದು ಗುರುತಿಸಲಾಗಿದೆ. ಹತ್ತಿರದ ಗ್ರಾಮದವರೇ ಆದ ಯುವಕರ ಸಾವಿನಿಂದ ನಂಜಯ್ಯನಕೊಟ್ಟಿಗೆ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.
ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು
ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆಯ ಸಿಪಿಐ ಆನಂದ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಜ್ಜುಗುಜ್ಜಾದ ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಲಾರಿ ಚಾಲಕನ ಅತಿ ವೇಗವೋ ಅಥವಾ ಅಚಾತುರ್ಯವೋ ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ