
ಬೆಂಗಳೂರು (ಜು.09): ಪ್ರೀತಿಯನ್ನು ನಿರಾಕರಿಸಿ, ಕುಟುಂಬದ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದ ಯುವತಿಗೆ ಆಕೆಯ ಮಾಜಿ ಪ್ರಿಯತಮನೇ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ರಾಮಗೊಂಡನಹಳ್ಳಿಯಲ್ಲಿ ನಡೆದಿದೆ. ಘಟನೆ ಬಳಿಕ ಆರೋಪಿ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮ*ಹ*ತ್ಯೆಗೆ ಯತ್ನಿಸಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂರು ವರ್ಷಗಳಿಂದ ಪರಿಚಯ
ಗಾಯಗೊಂಡ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ನಂದಿನಿ ದಾಸ್ (18) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಕೋಲಾರ ಮೂಲದ ಬಂಡೆ ನವಾಜ್ (18) ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರಿಗೂ ಕಳೆದ ಮೂರು ವರ್ಷಗಳಿಂದ ಪರಿಚಯವಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಯುವತಿಯ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದು, ಆಕೆಗೆ ಬೇರೆ ವರನೊಂದಿಗೆ ಮದುವೆ ಮಾಡುವ ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ.
ಚಾಕುವಿನಿಂದ ಹಲ್ಲೆ
ಈ ವಿಚಾರ ತಿಳಿದ ಬಳಿಕ ಆರೋಪಿ ಬಂಡೆ ನವಾಜ್, ಯುವತಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಚಾಕು ಹಿಡಿದು ಮನೆಗೆ ಬಂದಿದ್ದಾನೆ. ಈ ವೇಳೆ ಬೇರೆಯವರನ್ನು ಮದುವೆಯಾಗಬಾರದು ಎಂದು ಯುವತಿಯೊಂದಿಗೆ ವಾಗ್ವಾದ ನಡೆಸಿದ್ದಾನೆ. ಇದಕ್ಕೆ ಯುವತಿ, "ಮನೆಯವರ ನಿರ್ಧಾರದಂತೆ ನಡೆದುಕೊಳ್ಳುತ್ತೇನೆ" ಎಂದು ಹೇಳಿದ ಬಳಿಕ ಆಕ್ರೋಶಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಲ್ಲಿ ಯುವತಿಯ ಕುತ್ತಿಗೆ, ಕೈ ಹಾಗೂ ತೊಡೆ ಸೇರಿದಂತೆ ದೇಹದ ಹಲವು ಭಾಗಗಳಿಗೆ ಗಾಯಗಳಾಗಿವೆ.
ಬಳಿಕ ಆರೋಪಿ ಕೂಡ ಅದೇ ಚಾಕುವಿನಿಂದ ತನ್ನನ್ನು ತಾನೇ ಇರಿದುಕೊಂಡು ಆತ್ಮ*ಹ*ತ್ಯೆಗೆ ಯತ್ನಿಸಿದ್ದಾನೆ. ಯುವತಿಯ ಕಿರುಚಾಟ ಕೇಳಿ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ವರ್ತೂರು ಪೊಲೀಸರು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು, ವೈದ್ಯಕೀಯ ನಿಗಾದಲ್ಲಿದ್ದಾರೆ. ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ