
ಚಾಮರಾಜನಗರ (ಜ.17): ಸಮಾಜಕ್ಕೆ ಮಾದರಿಯಾಗಬೇಕಾದ, ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಕಲಿಸಬೇಕಾದ ಶಿಕ್ಷಕರೇ ಲೈಂಗಿಕ ಕಿರುಕುಳದಂತಹ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಆಘಾತಕಾರಿ ಸಂಗತಿ. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಕಿರುಕುಳ ನೀಡುತ್ತಿರುವ ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ, ಇದೀಗ ವಿದ್ಯಾರ್ಥಿಯ ಪೋಷಕರಿಗೇ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಹೇಯ ಘಟನೆ ಬೆಳಕಿಗೆ ಬಂದಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದ ಘಟನೆಯಲ್ಲಿ ಆರೋಪಿ ಶಿಕ್ಷಕ ವೆಂಕಟನಾರಾಯಣ ಎಂಬಾತ ತನ್ನ ಶಾಲೆಯ ವಿದ್ಯಾರ್ಥಿಯ ತಾಯಿಗೆ ಲೈಂಗಿಕ ಕಿರುಕುಳ ನೀಡಿದ್ದ. ಸಂತ್ರಸ್ತ ಮಹಿಳೆಯು ತನ್ನ ಮಗನಿಗೆ ನೀಡಲಾಗುವ ಆಹಾರ ಪದಾರ್ಥಗಳನ್ನು ಪಡೆಯಲು ಶಾಲೆಗೆ ಬಂದಿದ್ದ ಸಂದರ್ಭದಲ್ಲಿ ಶಿಕ್ಷಕ ವೆಂಕಟನಾರಾಯಣ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಕಾಮುಕ ಶಿಕ್ಷಕನಿಗೆ ಶಿಕ್ಷೆ ವಿಧಿಸಲಾಗಿದೆ.
ಈ ಸಂಬಂಧ ಸಂತ್ರಸ್ತ ಮಹಿಳೆಯು ನೀಡಿದ ದೂರಿನ ಮೇರೆಗೆ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶಿಕ್ಷಕ ವೆಂಕಟನಾರಾಯಣ ಮಾಡಿರುವ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿತು. ಆರೋಪಿ ಶಿಕ್ಷಕ ವೆಂಕಟನಾರಾಯಣನಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪವಿತ್ರವಾದ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ, ಪೋಷಕರ ಜೊತೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ನ್ಯಾಯಾಲಯವು ತಕ್ಕ ಶಾಸ್ತಿ ಮಾಡಿದೆ. ಈ ತೀರ್ಪು ಕಾಮುಕ ಪ್ರವೃತ್ತಿಯ ವ್ಯಕ್ತಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ