
ಬೆಂಗಳೂರು :ರಾಜ್ಯ ರಾಜಧಾನಿ ಭಾರತೀನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರೋಪಿ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಬೈರತಿ ಬಸವರಾಜು ಅವರಿಗೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ. ಇದರ ನಡುವೆ ಬೈರತಿ ಹಾಗೂ ಅವರ ಆಪ್ತರಿಗೆ ಇದೀಗ ‘ಕೋಕಾ’ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಏಕೆಂದರೆ, ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮಂಗಳವಾರ ಸಿಐಡಿ ಮೇಲ್ಮನವಿ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.
ತಾಂತ್ರಿಕ ದೋಷದ ಕಾರಣ ನೀಡಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೋಕಾ ಕಾಯ್ದೆ ಹೂಡಿರುವುದನ್ನು ನ್ಯಾಯಾಲಯ ರದ್ದುಪಡಿಸಿದೆ. ಈ ಕಾಯ್ದೆ ಜಾರಿಗೊಂಡರೆ ಆರೋಪಿಗಳಿಗೆ ಒಂದು ವರ್ಷ ಜಾಮೀನು ಪಡೆಯಲು ಸಾಧ್ಯವಾಗುವುದಿಲ್ಲ. ಅಲ್ಲದೆ, ನಿರೀಕ್ಷಣಾ ಜಾಮೀನಿಗೆ ಅವಕಾಶವಿರುವುದಿಲ್ಲ. ಹೀಗಾಗಿ ಕೋಕಾ ರದ್ದತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಐಡಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇದರಿಂದ ಈಗಾಗಲೇ ನಿರೀಕ್ಷಣಾ ಜಾಮೀನು ಸಿಗದೆ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜು ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎನ್ನಲಾಗಿದೆ.
ಇದೇ ವೇಳೆ, 4 ದಿನಗಳಿಂದ ಶಾಸಕರಿಗೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಿಐಡಿ ತೀವ್ರ ತಲಾಶ್ ನಡೆಸಿದರೂ ಸುಳಿವು ಮಾತ್ರ ಸಿಕ್ಕಿಲ್ಲ.ಬೆಳಗಾವಿ ಅಧಿವೇಶನದಲ್ಲಿ ಮೊದಲ ವಾರ ಕಾಣಿಸಿಕೊಂಡಿದ್ದ ಬೈರತಿ ಬಸವರಾಜು ಅವರು ನಂತರ ಕಣ್ಮರೆಯಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ಮಾಜಿ ಸಚಿವರಿಗಾಗಿ ಪುಣೆ, ಗೋವಾ ಹಾಗೂ ತಮಿಳುನಾಡಿನಲ್ಲೂ ಸಿಐಡಿ ತಂಡಗಳು ಹುಡುಕಾಟ ನಡೆಸಿವೆ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವ ಶಾಸಕರು, ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಅಜ್ಞಾತ ಸ್ಥಳದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ