
ಬೆಂಗಳೂರು (ಜು. 31): ಕರಾವಳಿಯಲ್ಲಿ ಸಂಭವಿಸಿದ ಸರಣಿ ಹತ್ಯೆಗಳ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಈ ಬೆನ್ನಲ್ಲೇ ವಿವಾದದ ಕಿಡಿಹೊತ್ತಿಸಿದ ಕಾಳಿ ಮಠದ ಋಷಿಕುಮಾರ್ ಸ್ವಾಮಿಜಿ ವಿರುದ್ದ ಪೊಲೀಸರು ದಿಟ್ಟ ಕ್ರಮಕೈಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಕಾಳಿ ಸ್ವಾಮಿಜಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಕಾರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಸಮಾಜಕ್ಕೆ ವ್ಯತಿರಿಕ್ತ ಪರಿಣಾಮ ಬೀರುವವರನ್ನು ಗಮನಿಸುತ್ತಿದ್ದೇವೆ, ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸೂಕ್ತ ಕಾನೂನು ಕ್ರಮವನ್ನು ಪ್ರಾರಂಭಿಸುತ್ತೇವೆ ಎಂದು ಟ್ವೀಟ್‌ನಲ್ಲಿ ಎಡಿಜಿಪಿ ತಿಳಿಸಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಶಾಂತಿ ಸಭೆ ಬಳಿಕ ಮಾತನಾಡಿದ ಎಡಿಜಿಪಿ ಸೋಷಿಯಲ್ ಮೀಡಿಯಾ ಕುರಿತು ಆಕ್ರೋಶ ಕೇಳಿ ಬಂದ ಹಿನ್ನೆಲೆಯಲ್ಲಿ ಅವುಗಳಿಗೆ ಮೂಗುದಾರ ಹಾಕಲು ಗಂಭೀರ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದರು.
ಸಾಮಾಜಿಕ ಜಾಲತಾಣಗಳಿಗೆ ಮೂಗುದಾರ?: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸಾಮಾಜಿಕ ಮುಂದಾಳುಗಳು ಸಾಮಾಜಿಕ ಜಾಲತಾಣಗಳಿಗೆ ಕಡಿವಾಣ ಹಾಕುವಂತೆ ತೀವ್ರವಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಡಿಜಿಪಿ ತಿಳಿಸಿದರು.
ಪ್ರಕರಣಗಳನ್ನ NIAಗೆ ಒಪ್ಪಿಸಲು ಒತ್ತಾಯಿಸೋದು ಯಾಕೆ.? ಹೇಗಿರುತ್ತೆ ಇವರ ಆಪರೇಷನ್..?
ಜತೆಗೆ, ಸಿಆರ್‌ಪಿಸಿ 107ರ ಅಡಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದರ ಉಲ್ಲಂಘನೆ ಕಂಡುಬಂದರೆ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ದೃಶ್ಯ ಮಾಧ್ಯಮಗಳು ಟಿಆರ್‌ಪಿ ಸಲುವಾಗಿ ಒಂದು ವಿಷಯವನ್ನೇ ಮೇಲಿಂದ ಮೇಲೆ ತೋರಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿ, ಜಿಲ್ಲೆ ಬಗ್ಗೆ ಕೆಟ್ಟಅಭಿಪ್ರಾಯ ಮೂಡಿಸುವಂತೆ ಮಾಡುತ್ತಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ಪ್ರಚೋದನಾಕಾರಿ ಹೇಳಿಕೆ ನೀಡುವವರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಾಧ್ಯವಾದರೆ ಗಲಭೆಯಂಥ ಸಂದರ್ಭದಲ್ಲಿ ಇಂಟರ್‌ನೆಟ್ ಸಂಪರ್ಕ ಸ್ಥಗಿತಗೊಳಿಸಬೇಕು ಎಂಬ ಆಗ್ರಹ ಸಭೆಯಲ್ಲಿ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ