
ಎಲೆಕ್ಟ್ರಾನಿಕ್ ಸಿಟಿ (ಜ. 7): ಐಟಿ ಹಬ್ ಎಲೆಕ್ಟ್ರಾನಿಕ್ ಸಿಟಿಯ ಶಾಂತಿಪುರದಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡ ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಲಾಂಡ್ರಿ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಭಾರೀ ಹಾನಿ ಸಂಭವಿಸಿದೆ.
ಎಲೆಕ್ಟ್ರಾನಿಕ್ ಸಿಟಿ ಫೇಸ್ 2 ರ ವ್ಯಾಪ್ತಿಯಲ್ಲಿರುವ ಶಾಂತಿಪುರ ರಸ್ತೆಯ ಲಾಂಡ್ರಿ ಮತ್ತು ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಸಂಜೆ 7:30ರ ಸುಮಾರಿಗೆ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಅಂಗಡಿಯಾದ್ಯಂತ ವ್ಯಾಪಿಸಿದೆ.
ಬೆಂಕಿ ಹರಡಿದ ರಭಸಕ್ಕೆ ಲಾಂಡ್ರಿ ಅಂಗಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಅಂಗಡಿಯ ಗೋಡೆಗಳು ಛಿದ್ರಗೊಂಡಿವೆ. ಗೋಡೆಯ ಟೈಲ್ಸ್‌ಗಳು ಪುಡಿಯಾಗಿ ರಸ್ತೆಗೆ ಸಿಡಿದಿದ್ದು, ರಸ್ತೆಯಲ್ಲಿ ಚಲಿಸುತ್ತಿದ್ದ ಹಾಗೂ ನಿಲ್ಲಿಸಿದ್ದ ವಾಹನಗಳಿಗೂ ಹಾನಿಯಾಗಿದೆ. ಸ್ಫೋಟದ ಶಬ್ದಕ್ಕೆ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದರು.
ಮೂವರಿಗೆ ಗಾಯ, ತಪ್ಪಿದ ದೊಡ್ಡ ಅನಾಹುತ
ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಸ್ಫೋಟದ ರಭಸಕ್ಕೆ ಸಿಡಿದ ವಸ್ತುಗಳಿಂದಾಗಿ ರಸ್ತೆಯಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ
ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಧಾವಿಸಿವೆ. ಸಿಬ್ಬಂದಿ ಸತತ ಪರಿಶ್ರಮ ವಹಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಬೆಂಕಿ ಸಂಪೂರ್ಣವಾಗಿ ನಂದಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ.
ಸ್ಥಳದಲ್ಲಿ ಪೊಲೀಸರಿಂದ ರಕ್ಷಣಾ ಕಾರ್ಯ
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಜನಜಂಗುಳಿ ಸೇರದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ