ಕಲ್ಯಾಣ ಕರ್ನಾಟಕ ಭಾಗಕ್ಕೆ 137 ಕೆಪಿಎಸ್‌ ಶಾಲೆ: ಸಚಿವ ಮಧು ಬಂಗಾರಪ್ಪ

By Kannadaprabha News  |  First Published Mar 9, 2024, 12:35 PM IST

ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲ್ಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. 


ಕಲಬುರಗಿ (ಮಾ.09): ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲ್ಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಇಲ್ಲಿನ ಕೆ.ಕೆ.ಆರ್.ಟಿ.ಬಿ. ಸಭಾಂಗಣದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ 297 ಕೆಪಿಎಸ್ ಶಾಲೆ ಇದ್ದು, ಇದರ ಜೊತೆಗೆ ಈ ವರ್ಷ 500 ಶಾಲೆ ಆರಂಭಿಸಲಾಗುವುದು ಎಂದರು.

ದ್ವಿಭಾಷಾ ಬೋಧನೆ, ವಿಷಯ ಶಿಕ್ಷಕರ ಜೊತೆಗೆ ದೈಹಿಕ, ಸಂಗೀತ ಶಿಕ್ಷಕರು, ಉತ್ತಮ ಮೂಲಸೌಕರ್ಯ, ಶಾಲಾ ಮೈದಾನ ಪರಿಕಲ್ಪನೆ ಒಳಗೊಂಡಿರುವ ಕೆ.ಪಿ.ಎಸ್. ಶಾಲೆಗೆ ಬೇಡಿಕೆ ಹೆಚ್ಚಿರುವ ಕಾರಣ ಮುಂದಿನ 3 ವರ್ಷದಲ್ಲಿ ಎರಡು ಗ್ರಾಮ ಪಂಚಾಯತಿಗಳಿಗೆ ತಲಾ ಒಂದರಂತೆ 3,000 ಕೆಪಿಎಸ್ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ದ್ವಿಭಾಷಾ ಬೋಧನೆಯಲ್ಲಿ ಮಕ್ಕಳು, ಪಾಲಕರಿಗೆ ಅವರ ಆಯ್ಕೆಯ ಭಾಷೆಯಲ್ಲಿಯೆ ಶಿಕ್ಷಣ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.

Latest Videos

undefined

ಲೋಕಸಭೆ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲ್ಲ: ಎಂಟಿಬಿ ನಾಗರಾಜ್ ಸ್ಪಷ್ಟನೆ

ರಾಜ್ಯದ್ಯಾಂತ ಇರುವ ಆದರ್ಶ ವಿದ್ಯಾಲಯದಲ್ಲಿ 11 ಮತ್ತು 12ನೇ ತರಗತಿ ಬೋಧನೆಗೆ ಈಗಾಗಲೆ ಆದೇಶ ಹೊರಡಿಸಿದೆ. ಗೃಹ ಜ್ಯೋತಿ ಯೋಜನೆಯಡಿ ಕಳೆದ ನವೆಂಬರ್ 1 ರಿಂದ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಣೆ ಪರಿಣಾಮ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದು, ಗಣಕಯಂತ್ರಗಳು ಮಕ್ಕಳ ಉಪಯೋಗಕ್ಕೆ ಬಂದಿವೆ. ಇದಲ್ಲದೆ ಶಾಲೆಗಳಲ್ಲಿ ನಿರ್ವಹಣಾ ವೆಚ್ಚ 20 ರಿಂದ 40 ಸಾವಿರ ರೂ. ಗಳಿಗೆ ಅನುದಾನ ಹೆಚ್ಚಿಸಿದೆ ಎಂದರು.

20 ಸಾವಿರ ಶಿಕ್ಷಕರಿಗೆ ತರಬೇತಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ ಸುಧಾರಣೆ, ಮಕ್ಕಳು ಸರ್ವಾಂಗೀಣ ವಿಕಸನ ಹೊಂದಬೇಕೆಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಅಜೀಂ ಪ್ರೇಮಜಿ ಫೌಂಡೇಷನ್ ಮತ್ತು ಟೋಯೋಟಾ ಸಂಸ್ಥೆಗಳು ತಮ್ಮ ಸಿಎಸ್ಆರ್‌ ನಿಧಿಯಡಿ ಬರುವ ಮೇ ಮಾಹೆಯಿಂದ ಮುಂದಿನ ಮಾರ್ಚ್ ವರೆಗೆ ರಾಜ್ಯದ 20 ಸಾವಿರ ಶಿಕ್ಷಕರಿಗೆ ವೃತ್ತಿ, ಬೋಧನ ಕೌಶಲ್ಯ ಹೆಚ್ಚಿಸುವ ತರಬೇತಿ ನೀಡಲಿದೆ ಎಂದರು.

10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ: ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ನಂತರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸಿ 14 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಂಡಿದ್ದು, ಇದರಲ್ಲಿ 12 ಸಾವಿರ ಜನರು ಈಗಾಗಲೆ ಶಾಲೆಗೆ ಹಾಜರಾಗಿದ್ದಾರೆ. 800-900 ಜನ ವಿವಿಧ ಕಾರಣದಿಂದ ಕೋರ್ಟ್ ಮೊರೆ ಹೋಗಿದ್ದು, ಆ ಸಮಸ್ಯೆ ಸಹ ಶೀಘ್ರ ಬಗೆಹರಿಯಲಿದೆ. 12 ಸಾವಿರ ಪೈಕಿ 3,900 ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನಿಯೋಜಿಸಲಾಗಿದೆ. 43 ಸಾವಿರ ಅತಿಥಿ ಶಿಕ್ಷಕರನ್ನು ಸಹ ಪಡೆದುಕೊಂಡಿದ್ದೇವೆ. ಕ.ಕ. ಭಾಗದಲ್ಲಿ ಕೆ.ಕೆಆರ್.ಡಿ.ಬಿ. ಮಂಡಳಿ 2,618 ಅತಿಥಿ ಶಿಕ್ಷಕರ ನೇಮಕ ಮಾಡಿಕೊಂಡಿದ್ದು ಸ್ವಾಗತಾರ್ಹ. ಆಗಾಗ ನಿವೃತ್ತ ಕಾರಣ ಶಿಕ್ಷಕರ ಕೊರತೆ ಹೆಚ್ಚಿರುವುದರಿಂದ, ಈ ವರ್ಷ ಇನ್ನು 10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ ನಡೆದಿದೆ.

ಮೂರು ಬಾರಿ ಪರೀಕ್ಷೆಗೆ ಸಚಿವರ ಸಮರ್ಥನೆ: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಒಂದೇ ತಿಂಗಳಿನಲ್ಲಿ ಮೂರು ಬಾರಿ ಪರೀಕ್ಷೆ ಬರೆಯುವುದರಿಂದ ಪರೀಕ್ಷೆಯ ಗಂಭೀರ್ಯತೆ ಇರುವುದಿಲ್ಲ ಎಂಬ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೊದಲನೇ ಪರೀಕ್ಷೆ ಎಲ್ಲರಿಗೂ ಕಡ್ಡಾಯವಾಗಿರಲಿದೆ. ಎರಡನೇ ಮತ್ತು ಮೂರನೇ ಪರೀಕ್ಷೆ ಉತ್ತಮ ಅಂಕ ಹೊಂದಲು ಮತ್ತು ಉತ್ತೀರ್ಣರಾಗಿ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅನುಕೂಲವಾಗಲೆಂದು ಈ ಪದ್ಧತಿ ಜಾರಿಗೆ ತರಲಾಗಿದೆ. ಕಳೆದ ವರ್ಷ ಮೂರನೇ ಪರೀಕ್ಷೆಯಲ್ಲಿ ಹಾಜರಾದ 1.20 ಲಕ್ಷ ಮಕ್ಕಳಲ್ಲಿ 40 ಸಾವಿರ ಮಕ್ಕಳು ತೇರ್ಗಡೆಯಾಗಿ ಮುಂದಿನ ತರಗತಿಗೆ ಪ್ರವೇಶ ಪಡೆದಿದ್ದಾರೆ. ಇದರಿಂದ ಆ ಮಕ್ಕಳ ಒಂದು ವರ್ಷ ಉಳಿದಂತಾಗಿದೆ. ಇಲ್ಲದಿದ್ದರೆ ಆ ಮಕ್ಕಳ ಶಾಲೆಯಿಂದ ವಿಮುಖರಾರುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಮೂರು ಪರೀಕ್ಷೆ ಪದ್ದತಿಗೆ ಮಕ್ಕಳಿಂದಲೂ ಸಹ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಚಿವರು ಸಮರ್ಥನೆ ಮಾಡಿಕೊಂಡರು.

1,975 ಮಾದರಿ ಶಾಲೆ ನಿರ್ಮಾಣ: ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಮಾತನಾಡಿ, 2023-24 ಮತ್ತು 2024-25ನೇ ವರ್ಷ ಶೈಕ್ಷಣಿಕ ವರ್ಷವೆಂದು ಘೋಷಿಸಿ ಅಕ್ಷರ ಆವಿಷ್ಕಾರ ಯೋಜನೆಯಡಿ ಶಾಲೆಗಳ ಬಲವರ್ಧನೆಗೆ ಮಂಡಳಿ ಮುಂದಾಗಿದೆ. ಕಲ್ಯಾಣ ಪ್ರದೇಶದಲ್ಲಿ 9,247 ಶಾಲೆಗಳಿದ್ದು, ಇದರಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 50 ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಯನ್ನಾಗಿ ಮಾಡಲು 2023-24ನೇ ಸಾಲಿಗೆ 1,975 ಶಾಲೆಗಳನ್ನು ಈಗಾಗಲೆ ಗುರುತಿಸಲಾಗಿದೆ. ಮುಂದಿನ 5 ವರ್ಷದಲ್ಲಿ ಹಂತ ಹಂತವಾಗಿ ಪ್ರತಿ ವರ್ಷ 2,000 ರಂತೆ ಉಳಿದ ಶಾಲೆಗಳ ಬಲವರ್ಧನೆಗೆ ಯೋಜನೆ ಹಾಕಿಕೊಂಡಿದ್ದೇವೆ ಎಂದರು.

ಸಂಸ್ಕೃತಿ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವಿ.ಸೋಮಣ್ಣ

ಇದೇ ಸಂದರ್ಭದಲ್ಲಿ ಅಕ್ಷರ ಆವಿಷ್ಕಾರ ಯೋಜನೆಯ ಪ್ರಗತಿ ವರದಿಯನ್ನು ಸಚಿವ ಎಸ್. ಮಧು ಬಂಗಾರಪ್ಪ, ಡಾ.ಅಜಯ್ ಸಿಂಗ್, ಶಾಸಕ ಎಂ.ವೈ.ಪಾಟೀಲ ಅವರು ಬಿಡುಗಡೆಗೊಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಕೆಆರ್‌ಡಿಬಿ ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಶಂಕರ್, ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಕೆ.ಕೆ.ಆರ್.ಡಿ.ಬಿ. ಮಂಡಳಿ ಅಧೀನ ಕಾರ್ಯದರ್ಶಿ ದಯಾನಂದ ಪಾಟೀಲ ಇದ್ದರು.

click me!