
ಶಿವಮೊಗ್ಗ (ನ.18): ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮವನ್ನು ಒಳಗೊಂಡ ದ್ವಿಭಾಷಾ ಮಾಧ್ಯಮವನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣಕ್ಕಾಗಿ ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳು, ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳು, ಕಾರ್ಪೊರೇಟ್ ಸಂಸ್ಥೆಗಳು ಹಾಗೂ ತನ್ನದೇ ಬಜೆಟ್ ಮೂಲಕ ಬೃಹತ್ ಅನುದಾನವನ್ನು ಕ್ರೋಢೀಕರಿಸುತ್ತಿದ್ದು, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ 2500 ಕೋಟಿ ರು.ನೀಡಲಿದೆ. ಸರ್ಕಾರ ಪ್ರತಿ ಶಾಲೆಗೆ ಸರಾಸರಿ 2 ರಿಂದ 4 ಕೋಟಿ ರು.ವೆಚ್ಚ ಮಾಡಲಿದೆ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ. ಕೆಪಿಎಸ್ ಶಾಲೆಗಳಲ್ಲಿ ಸುಸಜ್ಜಿತ ಕಟ್ಟಡಗಳು, ಸ್ಮಾರ್ಟ್ ಕ್ಲಾಸ್‌ಗಳು, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯಗಳು, ಗ್ರಂಥಾಲಯ, ಶುದ್ಧ ಕುಡಿವ ನೀರು ಹಾಗೂ ಉತ್ತಮ ಶೌಚಾಲಯದ ವ್ಯವಸ್ಥೆ ಇರಲಿದೆ. ಅಲ್ಲದೆ, ಮುಂಬರುವ ಜೂನ್ ಮಾಹೆಯಿಂದ ರಾಜ್ಯದ ಎಲ್ಲಾ 1,600 ಕೆಪಿಎಸ್ ಶಾಲೆಗಳ ಮಕ್ಕಳ ಸಾರಿಗೆ ವ್ಯವಸ್ಥೆಗಾಗಿ ಬಸ್ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಹೇಳಿದರು.