
ತೀರ್ಥಹಳ್ಳಿ (ಜು.26): ಕಲುಷಿತ ಆಹಾರ ಸೇವಿಸಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಅವಲಕ್ಕಿ ಹಾಗೂ ಬೇಳೆ, ಚಪಾತಿ ಸೇವಿಸಿದ್ದ ವಿದ್ಯಾರ್ಥಿಗಳಲ್ಲಿ ದಿಢೀರ್ ವಾಂತಿ-ಭೇದಿ ಸಮಸ್ಯೆ ಕಾಣಿಸಿಕೊಂಡು ಆರೋಗ್ಯ ಏರುಪೇರಾಗಿತ್ತು. ತಕ್ಷಣವೇ ಅಸ್ವಸ್ಥ ಮಕ್ಕಳನ್ನು ಕೋಣಂದೂರು ಸರ್ಕಾರಿ ಆಸ್ಪತ್ರೆ ಹಾಗೂ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ತೀವ್ರ ಅಸ್ವಸ್ಥಗೊಂಡಿದ್ದ 11 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ವಸತಿ ಶಾಲೆಯ ನೈರ್ಮಲ್ಯದ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಹಂತ ಹಂತವಾಗಿ ಕೆಲವು ವಿದ್ಯಾರ್ಥಿಗಳು ಗುಣಮುಖರಾಗುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಟರಾಜ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಆತಂಕಪಡುವ ಅಗತ್ಯವಿಲ್ಲ. ಆಹಾರ ಪರೀಕ್ಷೆಯ ವರದಿ ಬಂದ ಬಳಿಕ ಅಸ್ವಸ್ಥತೆಗೆ ನಿಖರ ಕಾರಣ ಏನು ಎಂಬುದು ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.