ಶಿಕ್ಷಕರ ಪರವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಕೇಂದ್ರ ಸರ್ಕಾರದ ಎದುರು ಮಹತ್ವದ ಬೇಡಿಕೆ ಇಟ್ಟಿದ್ದಾರೆ.
ಬೆಂಗಳೂರು, (ಜ.29): ರಾಜ್ಯದ ಶಿಕ್ಷಕರನ್ನು ಕೂಡ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಲಸಿಕೆ ನೀಡಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ ವರ್ಧನ್ ಅವರಿಗೆ ಪತ್ರ ಬರೆದಿದ್ದು, ಕೋವಿಡ್ ವಾರಿಯರ್ಸ್ ಗೆ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡುತ್ತಿರುವುದು ಅತ್ಯಂತ ಸಮಂಜಸವಾದ ವಿಚಾರವಾಗಿದೆ. ಅದೇ ರೀತಿ ಶಿಕ್ಷಕರನ್ನೂ ಸಹ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೂ ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ.
undefined
ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗುಹಾ ಅವರಿಗೆ ಪ್ರಸ್ತಾವನೆ ಸಲ್ಲಿಸಿ ಶಿಕ್ಷಣ ಇಲಾಖೆಯ ನೌಕರರನ್ನೂ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಲು ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ.
ಶಾಲಾ ಶಿಕ್ಷಕರು ಕೊರೋನಾ ವಾರಿಯರರ್ಸ್ ಆಗಿ ಕಂಟನ್ಮೆಂಟ್ ವಲಯದಲ್ಲಿ ಕೆಲಸ ಮಾಡಿದ್ದಾರೆ. ಆರೋಗ್ಯ ಕಾರ್ಯಕರ್ತರ ಜೊತೆ ಜೊತೆಯಾಗಿ ದುಡಿದಿದ್ದಾರೆ. ಈಗಾಗಲೇ ಶಾಲೆಗಳು ಆರಂಭವಾಗಿದೆ. ಮಕ್ಕಳ ಹಾಗೂ ಶಿಕ್ಷಕರ ಹಿತದೃಷ್ಟಿಯಿಂದ ಶಿಕ್ಷಕರಿಗೆ ಲಸಿಕೆ ನೀಡುವ ಅಗತ್ಯವಿದೆ ಎಂದಿದ್ದಾರೆ.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಮ್ಮ ಶಾಲಾ ಶಿಕ್ಷಕರು ಆರೋಗ್ಯ ಕಾರ್ಯಕರ್ತರಿಗೆ ದುಡಿದಿದ್ದಾರೆ. ಈಗ ಶಾಲೆಗಳು ಆರಂಭವಾಗಿದ್ದು, ಅವರೆಲ್ಲ ತರಗತಿಗಳಲ್ಲಿ ಮಕ್ಕಳ ಸಮೂಹದ ಸಂಪರ್ಕಕ್ಕೆ ಬರುತ್ತಿರುವುದರಿಂದ ಮಕ್ಕಳ ಮತ್ತು ಅವರ ಹಿತದೃಷ್ಟಿಯಿಂದ ಶಿಕ್ಷಕರಿಗೆ ಲಸಿಕೆ ನೀಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಲಸಿಕೆ ನೀಡಲು ಆದ್ಯತೆ ನೀಡಬೇಕೆಂದು ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.