
ಬೆಂಗಳೂರು: ರಾಜ್ಯದ ಶಾಲಾ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ ಬಳಕೆಗೆ ನಿಷೇಧ ವಿಧಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದು, ಶಿಕ್ಷಣ ವಲಯದಲ್ಲಿ ಈ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ವಿದ್ಯಾರ್ಥಿಗಳ ಮೇಲೆ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮ, ಡ್ರಗ್ಸ್ ಬಳಕೆ ಹೆಚ್ಚುತ್ತಿರುವ ಆತಂಕಕಾರಿ ಬೆಳವಣಿಗೆಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.
ಸಭೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳಿಂದ (ವಿಸಿಗಳು) ಮೊಬೈಲ್ ಬ್ಯಾನ್ ಕುರಿತು ಸಲಹೆ ಮತ್ತು ಅಭಿಪ್ರಾಯಗಳನ್ನು ಕೇಳಿದರು. ಸಿಎಂ ಅವರ ಈ ಪ್ರಸ್ತಾಪಕ್ಕೆ ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಕುಲಪತಿಗಳು ಒಪ್ಪಿಗೆ ಸೂಚಿಸಿದ್ದು, ಸರ್ಕಾರದ ಚಿಂತನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಯುವಕರು ಡ್ರಗ್ಸ್ ಎಂಬ ಪಿಡುಗಿಗೆ ಬಲಿಯಾಗುತ್ತಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಯಂತ್ರಿಸುವ ಅಗತ್ಯ ಇದೆ. ಈ ಬಗ್ಗೆ ನಿಮ್ಮ ಸಲಹೆಗಳನ್ನು ನೀಡಿ ಎಂದು ಕುಲಪತಿಗಳಿಗೆ ಮನವಿ ಮಾಡಿದರು. ಇದೇ ವೇಳೆ, “ಈ ಮೊಬೈಲ್ ಬ್ಯಾನ್ ವಯಸ್ಕರಿಗೆಲ್ಲ ಅಲ್ಲ. 16 ವರ್ಷ ಒಳಗಿನ ವಿದ್ಯಾರ್ಥಿಗಳಿಗೆ ಮಾತ್ರ ಮೊಬೈಲ್ ಫೋನ್ ಬಳಕೆಗೆ ನಿರ್ಬಂಧ ಹೇರುವ ಚಿಂತನೆ ಇದೆ” ಎಂದು ಸಿಎಂ ಸ್ಪಷ್ಟಪಡಿಸಿದರು.
ಮೊಬೈಲ್ ನಿಷೇಧದ ಬಗ್ಗೆ ಮಾತನಾಡಿದ ಸಿಎಂ, “ಆಸ್ಟ್ರೇಲಿಯಾ ಸೇರಿ ಅನೇಕ ದೇಶಗಳಲ್ಲಿ ಶಾಲಾ ಮಕ್ಕಳಿಗೆ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಇದರಿಂದ ಮಕ್ಕಳ ಗಮನ ಅಧ್ಯಯನದ ಕಡೆ ಹೆಚ್ಚು ಕೇಂದ್ರೀಕೃತವಾಗಿದೆ” ಎಂದು ಉದಾಹರಣೆ ನೀಡಿದರು.
ಸಾಮಾಜಿಕ ಜಾಲತಾಣಗಳಿಂದ ವಿದ್ಯಾರ್ಥಿಗಳು ದಾರಿ ತಪ್ಪುತ್ತಿರುವುದನ್ನೂ ಸಿಎಂ ಉಲ್ಲೇಖಿಸಿದರು. “ಸೋಶಿಯಲ್ ಮೀಡಿಯಾಗಳು ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿವೆ. ಇದಕ್ಕೆ ಕಡಿವಾಣ ಹಾಕಲೇಬೇಕು” ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದರು.
ಡ್ರಗ್ಸ್ ಸಮಸ್ಯೆಯ ಬಗ್ಗೆ ಮಾತನಾಡಿದ ಸಿಎಂ, “ಡ್ರಗ್ಸ್ ಇಂದು ಒಂದು ಪಿಡುಗಾಗಿ ಪರಿಣಮಿಸಿದೆ. ವಿಶ್ವವಿದ್ಯಾಲಯ ಕ್ಯಾಂಪಸ್‌ಗಳು ಸಂಪೂರ್ಣ ಡ್ರಗ್ಸ್ ಮುಕ್ತವಾಗಬೇಕು. ಡ್ರಗ್ಸ್ ಮಾಫಿಯಾಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು” ಎಂದು ವಿಸಿಗಳಿಗೆ ಕಠಿಣ ಸೂಚನೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಹಲವಾರು ಕುಲಪತಿಗಳು, 16 ವರ್ಷ ಒಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್. ಕಾಲೇಜು ಮತ್ತು ವಿಶ್ವವಿದ್ಯಾಲಯ ಕ್ಯಾಂಪಸ್ ಒಳಗೆ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸುವಂತೆ ಸಲಹೆ ನೀಡಿರುವುದು ತಿಳಿದುಬಂದಿದೆ. ವಿದ್ಯಾರ್ಥಿಗಳ ಶಿಸ್ತು, ಗಮನ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಅಗತ್ಯವೆಂದು ವಿಸಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ, ವಿದ್ಯಾರ್ಥಿಗಳ ಭವಿಷ್ಯ, ಶಿಕ್ಷಣದ ಗುಣಮಟ್ಟ ಮತ್ತು ಡ್ರಗ್ಸ್ ಮುಕ್ತ ಶೈಕ್ಷಣಿಕ ವಾತಾವರಣ ನಿರ್ಮಾಣದ ಉದ್ದೇಶದಿಂದ ಸರ್ಕಾರ ಮೊಬೈಲ್ ಬ್ಯಾನ್ ಕುರಿತು ಅಂತಿಮ ನಿರ್ಧಾರಕ್ಕೆ ಬರಲು ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ನೀತಿ ಅಥವಾ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಶಾಲಾ–ಕಾಲೇಜು ಶಿಕ್ಷಣದ ದಿಕ್ಕನ್ನೇ ಬದಲಾಯಿಸುವಷ್ಟು ಮಹತ್ವದ ಈ ನಿರ್ಧಾರ ಯಾವ ರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.