ಬೆಂಗಳೂರು (ಆ.14): ಬರುವ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ನಡೆಯುವ ಖಾಸಗಿ ಅಭ್ಯರ್ಥಿಗಳ ಮತ್ತು ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ದೋಷ-ರಹಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವರು, ಸೆಪ್ಟೆಂಬರ್‌ನಲ್ಲಿ ನಡೆಯುವ ದ್ವಿತೀಯ ಪಿಯು ಪರೀಕ್ಷೆಗೆ ಅಗತ್ಯ ಸಿದ್ಧತೆ ಹಾಗೂ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಬೆನ್ನಲ್ಲೇ ಕಾಲೇಜುಗಳಿಗೆ ವಿದ್ಯಾರ್ಥಿಗಳ ದೌಡು
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರದ್ದುಪಡಿಸಿದ್ದರಿಂದ ಸಂಬಂಧಪಟ್ಟವಿದ್ಯಾರ್ಥಿಗಳಿಗೆ ಅವರ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯು ಫಲಿತಾಂಶ ಆಧರಿಸಿ ಫಲಿತಾಂಶ ನೀಡಲಾಗಿದೆ. ಆದರೆ, 18,414 ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷೆ ರದ್ದು ನಿರ್ಧಾರ ಅನ್ವಯಿಸಿರಲಿಲ್ಲ. ಅವರಿಗೆ ಪರೀಕ್ಷೆ ನಡೆಸಬೇಕಾಗಿದೆ. ಜತೆಗೆ ಈ ಬಾರಿಯ ದ್ವಿತೀಯ ಪಿಯು ಫಲಿತಾಂಶ ತೃಪ್ತಿಕರವಾಗಿಲ್ಲ ಎಂದು 900ಕ್ಕೂ ಹೆಚ್ಚು ವಿದ್ಯಾರ್ಥಿಗಳು ರದ್ದುಪಡಿಸಿಕೊಂಡಿದ್ದಾರೆ. ಅವರೆಲ್ಲರಿಗೂ ಸೆ.19ರಿಂದ ಅ.3ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಸಲು ಈಗಾಗಲೇ ವೇಳಾಪಟ್ಟಿಪ್ರಕಟಿಸಲಾಗಿದೆ. ಒಟ್ಟು 187 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಹಾಗೂ ಸುರಕ್ಷಾ ಕ್ರಮಗಳನ್ನು ಮಾಡಿಕೊಳ್ಳಲು ನಮ್ಮ ಇಲಾಖೆಯ ಅಧಿಕಾರಿಗಳ ಜತೆಗೆ ಎಲ್ಲಾ ಜಿಲ್ಲೆಗಳ ಡಿಸಿಗಳು ಮತ್ತು ಎಸ್‌ಪಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.