Latest Videos

ಎಸ್ಸೆಸ್ಸೆಲ್ಸಿ ರಿಸಲ್ಟ್‌ ಕುಸಿತ: ಛಾಯಾಪ್ರತಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆಯಲ್ಲೂ ಇಳಿಕೆ

By Kannadaprabha NewsFirst Published May 24, 2024, 7:01 PM IST
Highlights

2023-24ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಕುಸಿತವಾಗಿರುವ ಹಿನ್ನೆಲೆಯಲ್ಲಿ ಉತ್ತರ ಪತ್ರಿಕೆಗಳ ಛಾಯಾಪ್ರತಿಗಳಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. 

ಬೆಂಗಳೂರು (ಮೇ.24): 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಕುಸಿತವಾಗಿರುವ ಹಿನ್ನೆಲೆಯಲ್ಲಿ ಉತ್ತರ ಪತ್ರಿಕೆಗಳ ಛಾಯಾಪ್ರತಿಗಳಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಶಿಕ್ಷಣ ಇಲಾಖೆ ಮಾಹಿತಿ ಪ್ರಕಾರ ಕಳೆದ ವರ್ಷ 78 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಛಾಯಾ ಪ್ರತಿಗಳಿಗಾಗಿ ಅರ್ಜಿ ಸಲ್ಲಿಸಿ ಪಡೆದುಕೊಂಡಿದ್ದರು. ಆದರೆ, ಈ ಬಾರಿ ಫಲಿತಾಂಶ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕೇವಲ 62 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಛಾಯಾ ಪ್ರತಿಗಳಿಗಾಗಿ ಇದುವರೆಗೆ ಅರ್ಜಿ ಸಲ್ಲಿಸಿದ್ದಾರೆ. 

ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಕಡಿಮೆ ಎಂದು ಕರ್ನಾಟಕ ಶಾಲಾ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ (ಪರೀಕ್ಷೆಗಳು) ಗೋಪಾಲಕೃಷ್ಣ ಅವರು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವು ಶೇ.73.40ರಷ್ಟು ದಾಖಲಾಗಿದೆ. ಇದು ಕಳೆದ ಬಾರಿಗಿಂತ ಶೇ.10.49ರಷ್ಟು ಫಲಿತಾಂಶ ಕಡಿಮೆಯಾಗುವುದರೊಂದಿಗೆ ಐದು ವರ್ಷಗಳಲ್ಲೇ ಕನಿಷ್ಠ ಫಲಿತಾಂಶ ಇದಾಗಿದೆ. ಈವರೆಗೆ ಶೇ.10ರಷ್ಟಿದ್ದ ಕೃಪಾಂಕದ ಪ್ರಮಾಣವನ್ನು ಶೇ.20ಕ್ಕೆ ಹೆಚ್ಚಿಸಿದ್ದರಿಂದಾಗಿ ಫಲಿತಾಂಶ ಶೇ.73.40ರಷ್ಟು ಬಂದಿದೆ. 

ಇಲ್ಲದಿದ್ದರೆ ಫಲಿತಾಂಶದಲ್ಲಿ ಇನ್ನೂ ಕುಸಿತವಾಗಿ ಶೇ.53.40ರಷ್ಟು ಫಲಿತಾಂಶ ಮಾತ್ರವೇ ಬರುತ್ತಿತ್ತು. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ 8.59 ಲಕ್ಷ ವಿದ್ಯಾರ್ಥಿಗಳಲ್ಲಿ 1.69 ಲಕ್ಷ ವಿದ್ಯಾರ್ಥಿಗಳು ಕೃಪಾಂಕದ ಆಧಾರದಲ್ಲಿ ತೇರ್ಗಡೆಯಾಗಿದ್ದಾರೆ. ಹೀಗೆ ತೇರ್ಗಡೆಯಾದ ವಿದ್ಯಾರ್ಥಿಗಳ ಕಳಪೆ ಫಲಿತಾಂಶಕ್ಕೆ ಕಾರಣಗಳನ್ನು ಕಂಡುಕೊಳ್ಳಲು ಸ್ಕ್ಯಾನ್‌ ಪ್ರತಿಗಳಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈಗಾಗಲೇ ಬಹುತೇಕ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಎಸ್ಸೆಸ್ಸೆಲ್ಸಿ ರಿಸಲ್ಟ್‌ನಿಂದ ಆಡಳಿತ ಲೋಪ ಬಯಲು: ಮಾಜಿ ಸಚಿವ ಸುರೇಶ್‌ ಕುಮಾರ್‌

ಕಟ್ಟೆಚ್ಚರದಿಂದ ಫಲಿತಾಂಶ ಕುಸಿತ: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು. ಈ ಮೂಲಕ ಪರೀಕ್ಷಾ ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಖುದ್ದಾಗಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಕಟ್ಟುನಿಟ್ಟಾಗಿ ಪರೀಕ್ಷಾ ಚಟುವಟಿಕೆಗಳನ್ನು ಗಮನಿಸುತ್ತಿದ್ದರು. ಮುಖ್ಯವಾಗಿ ಪರೀಕ್ಷಾ ಕೊಠಡಿ ಮಾತ್ರವಲ್ಲ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಆ ಕೊಠಡಿಗಳ ಚಿತ್ರಣ ಪರಿಶೀಲನೆಗೆ ವೆಬ್‌ಕಾಸ್ಟಿಂಗ್‌ ವ್ಯವಸ್ಥ ಮಾಡಲಾಗಿತ್ತು. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಪ್ರತಿ ಪರೀಕ್ಷಾ ಕೇಂದ್ರಗಳ ವೆಬ್‌ಕಾಸ್ಟಿಂಗ್‌ ಪರಿಶೀಲಿಸಿದ್ದರು. ಹೀಗಾಗಿ ಪರೀಕ್ಷಾ ಅಕ್ರಮಗಳಿಗೂ ಸಂಪೂರ್ಣ ಕಡಿವಾಣ ಬಿದ್ದ ಪರಿಣಾಮ ಫಲಿತಾಂಶದಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತವಾಗಿತ್ತು.

click me!