ಯೋಗೇಶ್ವರ್ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ?

By Web DeskFirst Published Mar 12, 2019, 11:54 AM IST
Highlights

ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಪ್ರಭಾವ ಸಾಕಷ್ಟಿದೆ. ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದ, ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪರಾಭವಗೊಂಡ ಸಿಪಿವೈ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆ ನಡೆಸಿದೆ.

ಯೋಗೇಶ್ವರ್‌ ಅವರನ್ನು ಕಣಕ್ಕಿಳಿಸುವ ಕುರಿತಂತೆ ಸೋಮವಾರ ರಾತ್ರಿ ಬಿಜೆಪಿ ಹಿರಿಯ ನಾಯಕ ಆರ್‌.ಅಶೋಕ್‌ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸುದೀರ್ಘ ಸಮಾಲೋಚನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಯೋಗೇಶ್ವರ್‌ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಅವರ ಸಹೋದರರಾಗಿರುವ ಹಾಲಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಚುನಾವಣೆ ಸುಲಭವಾಗಬಾರದು ಎಂಬ ಉದ್ದೇಶದಿಂದ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು ಎಂಬ ಅಭಿಪ್ರಾಯವನ್ನು ಸಂಘ ಪರಿವಾರದ ಮುಖಂಡರು ವ್ಯಕ್ತಪಡಿಸಿದ್ದರು. ಅಲ್ಲದೆ, ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಹೊಂದಾಣಿಕೆ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು ಎಂಬ ಅಸಮಾಧಾನವನ್ನೂ ಹೊರಹಾಕಿದ್ದರು.

ಈ ಮೊದಲು ರಾಮನಗರ ಜಿಲ್ಲಾಧ್ಯಕ್ಷ ಎಂ.ರುದ್ರೇಶ್‌ ಅವರನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಒಲವು ಹೊಂದಿದ್ದರು. ಆದರೆ, ಇದನ್ನೇ ಮುಂದಿಟ್ಟುಕೊಂಡು ಶಿವಕುಮಾರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗಿಂತಲೂ ಹೆಚ್ಚಿನ ಮತಗಳ ಅಂತರದಿಂದ ತನ್ನ ಸಹೋದರ ಸುರೇಶ್‌ನನ್ನು ಗೆಲ್ಲಿಸಿಕೊಂಡು ಬರುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು ಎಂಬ ಮಾಹಿತಿ ಸಂಘ ಪರಿವಾರದ ಮುಖಂಡರ ಕಿವಿ ತಲುಪಿತ್ತು.

ಮತ್ತೊಮ್ಮೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಸುರೇಶ್‌ ಅವರ ವಿರುದ್ಧ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದಲ್ಲಿ ಸಚಿವ ಶಿವಕುಮಾರ್‌ ಅವರಿಗೆ ರಾಜ್ಯದೆಲ್ಲೆಡೆ ಪ್ರವಾಸ ಕೈಗೊಳ್ಳಲು ಅನುಕೂಲವಾಗುತ್ತದೆ ಎಂಬ ಆತಂಕವೂ ಸಂಘ ಪರಿವಾರ ಹಾಗೂ ಬಿಜೆಪಿಯ ಕೆಲವು ಹಿರಿಯ ನಾಯಕರು ವ್ಯಕ್ತಪಡಿಸಿದ್ದರು. ಇದಕ್ಕೆ ತಿರುಗೇಟು ನೀಡುವ ಸಲುವಾಗಿ ಪ್ರಬಲ ಅಭ್ಯರ್ಥಿಯೊಬ್ಬರನ್ನು ಬಿಜೆಪಿಯಿಂದ ಕಣಕ್ಕಿಳಿಸಬೇಕು ಎಂಬ ಅಭಿಪ್ರಾಯ ಕೇಳಿಬಂದಿತ್ತು.

ಹಾಗೆ ನೋಡಿದರೆ ಯೋಗೇಶ್ವರ್‌ ಅವರು 2009ರಲ್ಲಿ ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಬಲ ಪೈಪೋಟಿ ಒಡ್ಡಿದ್ದರು. ಆದರೆ, ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಅವರು ಒಲವು ಹೊಂದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸೋಲುಂಡಿದ್ದ ಅವರಿಗೆ ಪಕ್ಕದ ರಾಮನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಪಕ್ಷದ ಹಿರಿಯ ನಾಯಕರು ಸೂಚಿಸಿದರೂ ನಿರಾಕರಿಸಿದ್ದರು. ಮತ್ತೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದಲೇ ಸ್ಪರ್ಧಿಸಿದರಾಯಿತು. ಅಲ್ಲಿವರೆಗೆ ಯಾವುದೇ ಚುನಾವಣೆಯ ಗೊಡವೆಯೇ ಬೇಡ ಎಂಬ ನಿಲವಿಗೆ ಬಂದಿದ್ದರು ಎನ್ನಲಾಗಿದೆ.

ಆದರೆ, ಇದೀಗ ಪಕ್ಷದ ಹಿರಿಯ ನಾಯಕರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಸೂಚನೆ ನೀಡಿದಲ್ಲಿ ಯೋಗೇಶ್ವರ್‌ ಅವರು ಕಣಕ್ಕಿಳಿಯಲು ಸಿದ್ಧರಾಗುವ ಸಾಧ್ಯತೆಯಿದೆ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಸ್ಪಷ್ಟಚಿತ್ರಣ ಹೊರಬೀಳುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

click me!