ಲೋಕಸಭಾ ಚುನಾವಣೆ : ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

By Web DeskFirst Published Mar 25, 2019, 7:38 AM IST
Highlights

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ವೇಳೆ ಮೊದಲ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆಗೆ ಮಾರ್ಚ್ 26 ಕೊನೆಯ ದಿನವಾಗಿದ್ದು, ಹಲವು ನಾಯಕರು ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 

ಬೆಂಗಳೂರು :  ಲೋಕಸಭಾ ಕ್ಷೇತ್ರಗಳ ಟಿಕೆಟ್‌ಗಳು ಅಂತಿಮವಾಗುತ್ತಿದ್ದಂತೆ ರಾಜ್ಯಾದ್ಯಂತ ಪ್ರಥಮ ಹಂತದ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯೂ ಚುರುಕು ಪಡೆದುಕೊಂಡಿದೆ.  ತುಮಕೂರಿನಿಂದ ಕಣಕ್ಕಿಳಿಯಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯ ಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ವೀರಪ್ಪ ಮೊಯ್ಲಿ, ಮುಖ್ಯ ಮಂತ್ರಿ ಪುತ್ರ ನಿಖಿಲ್ ಕುಮಾರ ಸ್ವಾಮಿ ಸೇರಿದಂತೆ ಅನೇಕ ಪ್ರಮುಖ ಸ್ಪರ್ಧಾಳುಗಳು ನಾಮಪತ್ರ ಸಲ್ಲಿಸ ಲಿದ್ದಾರೆ. 

ಹೆಚ್ಚಿನ ಅಭ್ಯರ್ಥಿಗಳು ಯಥಾ ಪ್ರಕಾರ ಟೆಂಪಲ್ ರನ್, ದೇವರ ಪೂಜೆ, ಮೆರವಣಿಗೆ, ಬಹಿ ರಂಗಸಭೆಗಳ ನಂತರ ನಾಮಪತ್ರ ಸಲ್ಲಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಬೆಳಗ್ಗೆ ಹೊಳೆನರಸೀಪುರದಲ್ಲಿ ಮನೆ ದೇವರಾದ ರಂಗನಾಥಸ್ವಾಮಿಗೆ ಪೂಜೆ ಸಲ್ಲಿಸಿ ಮಂಡ್ಯಕ್ಕೆ ತೆರಳಲಿ ದ್ದಾರೆ. ಅಲ್ಲಿಂದ ಮಧ್ಯಾಹ್ನ 12 ಗಂಟೆಗೆ ತುಮಕೂರಿಗೆ ಆಗಮಿಸಿ ಆರ್‌ಟಿಓ ಕಚೇರಿ ಪಕ್ಕದ ಆಂಜನೇ ಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ತೆರೆದ ವಾಹ ನದಲ್ಲಿ ರೋಡ್ ಶೋ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರೆಳಿ 2ಗಂಟೆ 5 ನಿಮಿಷದಿಂದ 2.30 ನಿಮಿಷದೊಳಗೆ ನಾಮಪತ್ರ ಸಲ್ಲಿಸಲಿದ್ದಾರೆ. 

ಹಾಗೆಯೇ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರು ಬೆಳಿಗ್ಗೆ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ.ಬಳಿಕ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಅವರ ನಾಮಪತ್ರಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರದಂದು ಸಿದ್ಧ ಗಂಗಾಶ್ರೀಗಳ ಸಮಾಧಿ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಪುತ್ರ ನಿಖಿಲ್ ಕುಮಾರಸ್ವಾಮಿ ಬೆಳಗ್ಗೆ ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. 11 ಗಂಟೆ ವೇಳೆಗೆ ನಡೆಯಲಿರುವ ಮೆರವಣಿಗೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಚಾಲನೆ ನೀಡಿ ಬಳಿಕ ತುಮಕೂರಿಗೆ ತೆರಳಿದ್ದಾರೆ.

ಮಧ್ಯಾಹ್ನ 2ರಿಂದ 2.30ರೊಳಗೆ ನಿಖಿಲ್ ನಾಮಪತ್ರ ಸಲ್ಲಿಸಲಿದ್ದು ಮುಖ್ಯಮಂತ್ರಿ ಸಿಎಂ ಕುಮಾರಸ್ವಾಮಿ, ಸಚಿವ ಎಚ್ .ಡಿ.ರೇವಣ್ಣ, ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್- ಜೆಡಿಎಸ್‌ನ ಸಚಿವರು, ಮುಖಂಡರು ಈ ವೇಳೆ ಉಪಸ್ಥಿತರಿರಲಿದ್ದಾರೆ. ಬಳಿಕ ಬೃಹತ್ ಬಹಿರಂಗ ಸಭೆ ನಡೆಯಲಿದೆ. ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿರುವ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಬೆಳಗ್ಗೆ 11 ಗಂಟೆಗೆ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಿಜ್ವಾನ್ ಅ ರ್ಷದ್ ಕಂಠೀರವ ಕ್ರೀಡಾಂಗಣ ಮುಂಭಾಗದ ಗಣಪತಿ ದೇವಾಲಯದಿಂದ ಬಿಬಿಎಂಪಿ ಕಚೇರಿಗೆ ಬಂದು  11.45ಕ್ಕೆ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರತಾಪ್‌ಸಿಂಹ ಅವರು ಬೆಳಗ್ಗೆ ಕೋಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ಪೂಜೆ ಸಲ್ಲಿಸಿ ಬಳಿಕ ನಾಮಪತ್ರ ಸಲ್ಲಿಸಲಿದ್ದಾರೆ. 

ಪಕ್ಷದ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ, ಉಪಾಧ್ಯಕ್ಷ ಬಿ.ಶ್ರೀರಾಮುಲು ಉಪಸ್ಥಿತರಿರಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಸಹ ನಾಮಪತ್ರ ಸಲ್ಲಿಸಲಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿರಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಹಾಲಿ ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪಮೊಯ್ಲಿ ಬೆಳಗ್ಗೆ 8.30ಕ್ಕೆ ನಂದಿ ಗ್ರಾಮದಲ್ಲಿರುವ ಭೋಗನಂದೀಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 

ಬಳಿಕ ಬೃಹತ್ ಮೆರವಣಿಗೆ, ಬಹಿರಂಗ ಸಭೆ ಮುಗಿಸಿ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಸಹ ಮಧ್ಯಾಹ್ನ  12.30ಕ್ಕೆ ಮೆರವಣಿಗೆ, ಬಹಿರಂಗ ಸಭೆ ನಡೆಸಿ ನಂತರ 1.30ರ ವೇಳೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಸಿಪಿಎಂ ಅಧಿಕೃತ ಅಭ್ಯರ್ಥಿಯಾಗಿರುವ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಬಿಎಸ್‌ಪಿ ಅಭ್ಯರ್ಥಿ ಸಿ.ಎಸ್. ದ್ವಾರಕಾನಾಥ್ ಅವರು ಸಹ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ. 

ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಅವರು ಬೆಳಗ್ಗೆ 11 ಗಂಟೆಗೆ ಮೆರವಣಿಗೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ಸಾರ್ವಜನಿಕ ಸಭೆ ಏರ್ಪಾಡು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಆರ್.ಧ್ರುವನಾರಾಯಣ ರೋಡ್ ಶೋ ನಡೆಸಿ ಪೂರ್ವಾಹ್ನ 11ರಿಂದ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಲಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ ಬೆಳಗ್ಗೆ 11 ಗಂಟೆಗೆ, ಕಾಂಗ್ರೆಸ್‌ನಿಂದ ಮಿಥುನ್ ರೈ ಮಧ್ಯಾಹ್ನ 12.30ಕ್ಕೆ ಹಾಗೂ ಎಸ್‌ಡಿಪಿಐನಿಂದ ಇಲ್ಯಾಸ್ ಮೊಹಮ್ಮದ್ ತುಂಬೆ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸುವರು. ಉಡುಪಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮಧ್ಯಾಹ್ನ ೧೨ ಗಂಟೆಗೆ ಉಡುಪಿಯಿಂದ ಮಣಿಪಾಲದ ವರೆಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

click me!