
ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್.ಎಸ್. ತೇಜಸ್ವಿ ಸೂರ್ಯ ವಿರುದ್ಧ ಮಾಧ್ಯಮಗಳು ಅವಹೇಳನಕಾರಿ ಸುದ್ದಿಯನ್ನು ಪ್ರಕಟ ಅಥವಾ ಪ್ರಸಾರ ಮಾಡಿದರೆ ಆ ಕುರಿತು ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಹೈಕೋರ್ಟ್ ಆದೇಶಿಸಿದೆ.
ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಸಂಬಂಧ ತೇಜಸ್ವಿ ಸೂರ್ಯ ವಿರುದ್ಧ ಮಾಧ್ಯಮಗಳು ಅವಹೇಳನಕಾರಿ ಸುದ್ದಿ ಪ್ರಕಟಿಸಬಾರದು ಎಂದು ಸಿವಿಲ್ ಕೋರ್ಟ್ ಹೊರಡಿಸಿದ ಆದೇಶ ತೆರವುಗೊಳಿಸಬೇಕು ಎಂದು ಕೋರಿ ದೆಹಲಿಯ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಗುರುವಾರ ಆ ಅರ್ಜಿ ಕುರಿತು ಎರಡು ಗಂಟೆ ಕಾಲ ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಈ ಆದೇಶ ಹೊರಡಿಸಿದೆ.
ಆದರೆ, ಸಿವಿಲ್ ಕೋರ್ಟ್ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿಲ್ಲ. ಹೀಗಾಗಿ ತೇಜಸ್ವಿ ಸೂರ್ಯ ಅವರಿಗೆ ಯಾವುದೇ ರೀತಿಯಲ್ಲಿ ಹಿನ್ನಡೆ ಆಗಿಲ್ಲ ಎಂದು ತೇಜಸ್ವಿ ಸೂರ್ಯ ಅವರ ಪರ ವಕೀಲರು ಹೇಳಿದ್ದಾರೆ.