
ಬರೋಬ್ಬರಿ 5 ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ದುಡಿದು ಸಿನೆಮಾ ಪ್ರಿಯರಿಗೆ ರಸದೌತಣ ಬಡಿಸಿರುವ ಹಿರಿಯ ನಟ ಅನಂತ ನಾಗ್ ಅವರಿಗೆ ಮಂಗಳವಾರ ಗುಜರಾತ್‌ನ ಕೆವಾಡಿಯಾದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿನೆಮಾ ಕ್ಷೇತ್ರದ ಅತ್ಯುನ್ನತ ಗೌರವ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ನೀಡಿ ಪುರಸ್ಕರಿಸಿದರು.
ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಸಿನಿಮಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.
1948ರ ಸೆ.4ರಂದು ಅನಂತ್ ನಾಗ್ ಅವರು ಉತ್ತರ ಕನ್ನಡದ ಶಿರಳ್ಳಿ ಎಂಬಲ್ಲಿ ಜನಿಸಿದರು. 1973ರ ‘ಸಂಕಲ್ಪ’ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಪದಾರ್ಪಣೆ ಮಾಡಿದ ಅನಂತ್ ನಾಗ್, ನಂತರದಲ್ಲಿ ಶ್ಯಾಮ್ ಬೆನಗಲ್ ಅವರ ಅಂಕುರ್, ಬಯಲುದಾರಿ, ನಾ ನಿನ್ನ ಬಿಡಲಾರೆ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದರು. ತಮ್ಮ ಆರಂಭಿಕ ಚಿತ್ರ ಜೀವನದಲ್ಲಿ ದೊಡ್ಡ ಯಶಸ್ಸು ಗಳಿಸಿದರು. ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅನಂತ್ ನಾಗ್, ಯಾವುದೇ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ಅಭಿನಯಿಸಬಲ್ಲ ಕಲಾವಿದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದೇ ವೇಳೆ ಸುಮಂತ್ ಭಟ್ ಮಿಥ್ಯ ಚಿತ್ರಕ್ಕೆ ರಜತ ಕಮಲ ಪ್ರಶಸ್ತಿ ಸ್ವೀಕರಿಸಿದರು. ಇಂಬು ತುಳು ಸಿನಿಮಾ ತಂಡಕ್ಕೂ ಪ್ರಶಸ್ತಿ ಪ್ರದಾನ ಮಾಡಲಾಯಿತು. ತಮಿಳು ನಟ ಧನುಷ್ ಕ್ಯಾಪ್ಟನ್ ಮಿಲ್ಲರ್ ಸಿನೆಮಾ ಹಾಗೂ ರಾಯನ್ ಸಿನೆಮಾ ನಿರ್ದೇಶನಕ್ಕೆ ರಜತ ಕಮಲ ಸ್ವೀಕರಿಸಿದರು.
ಆರ್ಟಿಕಲ್ 370 ಸಿನೆಮಾಗೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ, ಯಾಮಿ ಗೌತಮ್ ಅವರಿಗೆ ಅತ್ಯುತ್ತಮ ನಟಿ ಹಾಗೂ ಬ್ರಹ್ಮಯುಗಂ ಚಿತ್ರದ ನಟನೆಗಾಗಿ ಮಮ್ಮುಟ್ಟಿ ಮತ್ತು ಚಂದು ಚಾಂಪಿಯನ್ ಚಿತ್ರದ ನಟನೆಗಾಗಿ ಕಾರ್ತಿಕ್ ಆರ್ಯನ್ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅಮರನ್ ಚಿತ್ರದ ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಅವರು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲು ತಮ್ಮ ರಾಜ್ಯದಲ್ಲಿರುವ ಅತ್ಯುತ್ತಮ ಪ್ರವಾಸಿ ತಾಣಗಳನ್ನು ಗುರುತಿಸಿ ಪ್ರಸ್ತಾವನೆ ಸಲ್ಲಿಸುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಎಲ್ಲಾ ರಾಜ್ಯಗಳಿಗೆ ಆಹ್ವಾನ ನೀಡಿದ್ದಾರೆ. ನೀವು ಗುರುತಿಸಿರುವ ತಾಣಗಳು ಅತ್ಯುತ್ತಮ ಸೌಲಭ್ಯ ಹಾಗೂ ಸರ್ವತೋಮುಖ ಅಭಿವೃದ್ಧಿಯ ಯೋಜನೆಯಾಗಿರಬೇಕು. ಯಾವ ರಾಜ್ಯದ ಪ್ರಸ್ತಾವನೆ ಆಯ್ಕೆಯಾಗುತ್ತದೆಯೋ, ಆ ರಾಜ್ಯದ ನಿರ್ದಿಷ್ಟ ಪ್ರವಾಸಿ ತಾಣದಲ್ಲಿ ಮುಂದಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.