2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ನವೆಂಬರ್ 19ರ ವರೆಗೆ ನಡೆಯಲಿದ್ದು, ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಇದೇ ಮೊದಲ ಬಾರಿಗೆ ಭಾರತ ಆತಿಥ್ಯವನ್ನು ವಹಿಸಿದೆ.
2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್, ನ್ಯೂಜಿಲೆಂಡ್, ಬಲಿಷ್ಠ ಆಸ್ಟ್ರೇಲಿಯಾ, ಆತಿಥೇಯ ಭಾರತ ಸೇರಿದಂತೆ ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿದ್ದು, ಟ್ರೋಫಿ ಗೆಲ್ಲಲು ಸಕಲ ರಣತಂತ್ರ ಹೆಣೆಯುತ್ತಿವೆ.
ಹೀಗಿರುವಾಗಲೇ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು, ಒಂದು ಹೆಜ್ಜೆ ಮುಂದೆ ಹೋಗಿ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿದ್ದ ಚಾಂಪಿಯನ್ ಆಟಗಾರ ಬೆನ್ ಸ್ಟೋಕ್ಸ್ ಅವರ ಮನವೊಲಿಸಿ ನಿವೃತ್ತಿ ವಾಪಾಸ್ ಪಡೆಯುವಂತೆ ಮಾಡುವಲ್ಲಿ ಸಫಲವಾಗಿದೆ.
ಮುಂಬರುವ ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್ ಎದುರಿನ 4 ಪಂದ್ಯಗಳ ಏಕದಿನ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್‌ಗೆ ಮಣೆಹಾಕಲಾಗಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಈ ಸರಣಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್‌ಗೆ ಮಹತ್ವದ್ದೆನಿಸಿದೆ.
ಇನ್ನು ಅಚ್ಚರಿಯ ಸಂಗತಿಯೆಂದರೆ ನ್ಯೂಜಿಲೆಂಡ್ ಎದುರಿನ ಏಕದಿನ ಪಂದ್ಯಗಳ ಸರಣಿಗೆ ಇಂಗ್ಲೆಂಡ್ ಪ್ರಕಟಿಸಿದ 15 ಆಟಗಾರರನ್ನೊಳಗೊಂಡ ತಂಡದಲ್ಲಿ ಮಾರಕ ವೇಗಿ ಜೋಫ್ರಾ ಆರ್ಚರ್‌ಗೆ ಸ್ಥಾನ ಸಿಕ್ಕಿಲ್ಲ. ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಆರ್ಚರ್, 2023ರ ಏಕದಿನ ವಿಶ್ವಕಪ್ ಟೂರ್ನಿ ಆಡುವುದು ಅನುಮಾನ ಎನಿಸಿದೆ.
ben stokes
ಬೆನ್ ಸ್ಟೋಕ್ಸ್, ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಚ್ಚು ಗಮನ ಹರಿಸುವ ಉದ್ದೇಶದಿಂದ ಏಕದಿನ ವಿಶ್ವಕಪ್ ಟೂರ್ನಿಗೂ ಒಂದು ವರ್ಷ ಬಾಕಿ ಇರುವಂತೆ 2022ರ ಜುಲೈನಲ್ಲಿ ಏಕದಿನ ಕ್ರಿಕೆಟ್‌ಗೆ ದಿಢೀರ್ ಗುಡ್ ಬೈ ಹೇಳಿದ್ದರು. ಇನ್ನು 2022ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಬೆನ್ ಸ್ಟೋಕ್ಸ್ ಅದ್ಭುತ ಆಟದ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಜಯಿಸಿದ್ದರು.
2019ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೆನ್ ಸ್ಟೋಕ್ಸ್ ಅದ್ಭುತ ಆಲ್ರೌಂಡ್ ಪ್ರದರ್ಶನ ತೋರುವ ಮೂಲಕ ಇಂಗ್ಲೆಂಡ್ ತಂಡವು ಚೊಚ್ಚಲ ಬಾರಿಗೆ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ಸೆಮಿಫೈನಲ್ ಹಾಗೂ ಫೈನಲ್‌ನಲ್ಲಿ ಬೆನ್ ಸ್ಟೋಕ್ಸ್ ಅದ್ಭುತ ಬ್ಯಾಟಿಂಗ್ ಯಾವ ಕ್ರಿಕೆಟ್ ಅಭಿಮಾನಿಯೂ ಮರೆಯಲು ಸಾಧ್ಯವಿಲ್ಲ.
Ben Stokesನ್ಯೂಜಿಲೆಂಡ್ ಎದುರಿನ ಸರಣಿಗೆ ಇಂಗ್ಲೆಂಡ್ ತಂಡ ಹೀಗಿದೆ:
ಜೋಸ್ ಬಟ್ಲರ್(ನಾಯಕ), ಮೋಯಿನ್ ಅಲಿ, ಗುಸ್ ಅಟ್ಕಿನ್‌ಸನ್, ಜಾನಿ ಬೇರ್‌ಸ್ಟೋವ್, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ರೀಸ್ ಟಾಪ್ಲೆ, ಡೇವಿಡ್ ವಿಲ್ಲೇ, ಮಾರ್ಕ್ ವುಡ್, ಕ್ರಿಸ್ ವೋಕ್ಸ್