ಭಾರತೀಯ ಕ್ರಿಕೆಟ್ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಟೀಂ ಇಂಡಿಯಾ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಲು ರಾಹುಲ್ ದ್ರಾವಿಡ್ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ ನೈಟ್ ರೈಡರ್ಸ್ ನಡುವಿನ ಫೈನಲ್ ಪಂದ್ಯದ ವೇಳೆ ಈ ಮಹತ್ವದ ಬೆಳವಣಿಗೆಯಾಗಿದೆ. ದುಬೈನಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಹುಲ್ ದ್ರಾವಿಡ್ ಜತೆ ಸಮಾಲೋಚನೆ ನಡೆಸಿದ್ದಾರೆ.
ಮುಂಬರುವ ಐಸಿಸಿ ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ಟೀಂ ಇಂಡಿಯಾ ಕೋಚ್ ಆಗಲು ರಾಹುಲ್ ದ್ರಾವಿಡ್ ಒಪ್ಪಿಕೊಂಡಿದ್ದಾರೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ರಾಹುಲ್ ದ್ರಾವಿಡ್ ಭಾರತ ಕ್ರಿಕೆಟ್ ತಂಡದ ಮುಂದಿನ ಕೋಚ್ ಆಗುವುದು ಖಚಿತವಾಗಿದೆ. ಶೀಘ್ರದಲ್ಲಿಯೇ ನ್ಯಾಷನಲ್ ಕ್ರಿಕೆಟ್ ಅಕಾಡಮಿ(ಎನ್‌ಸಿಎ) ಮುಖ್ಯಸ್ಥ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆಂದು ವರದಿಯಾಗಿದೆ.
ಇನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪರಾಸ್ ಮಹಾಂಬ್ರೆ ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಆದರೆ ಫೀಲ್ಡಿಂಗ್ ಕೋಚ್ ಆಗಿ ಶ್ರೀಧರ್ ಅವರೇ ಮುಂದುವರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ರಾಹುಲ್ ದ್ರಾವಿಡ್ ಅವರು 2023ರವರೆಗೆ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಲು ಒಪ್ಪಂದ ಮಾಡಿಕೊಂಡಿದ್ದು, ವಾರ್ಷಿಕ 10 ಕೋಟಿ ಸಂಭಾವನೆಯನ್ನು ಬಿಸಿಸಿಐನಿಂದ ಪಡೆಯಲಿದ್ದಾರೆ ಎಂದು ವರದಿಯಾಗಿದೆ.
ಸದ್ಯ ಭಾರತ ತಂಡದ ಹೆಡ್ ಕೋಚ್ ಆಗಿ ರವಿಶಾಸ್ತ್ರಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂಬರುವ ಟಿ20 ವಿಶ್ವಕಪ್ ಬಳಿಕ ರವಿಶಾಸ್ತ್ರಿ ಕೋಚ್ ಅಧಿಕಾರವಧಿ ಮುಕ್ತಾಯವಾಗಲಿದ್ದು, ರವಿಶಾಸ್ತ್ರಿ ಸ್ಥಾನವನ್ನು ರಾಹುಲ್ ದ್ರಾವಿಡ್ ತುಂಬಲಿದ್ದಾರೆ.
2012ರಲ್ಲಿ ರಾಹುಲ್ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು, ಇದಾದ ಬಳಿಕ 2016ರಿಂದ 2019ರವರೆಗೆ ಭಾರತ 'ಎ' ಹಾಗೂ ಅಂಡರ್ 19 ತಂಡಕ್ಕೆ ಕೋಚ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
2016ರ ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ತಂಡ ರನ್ನರ್ ಅಪ್ ಸ್ಥಾನ ಪಡೆದರೆ, 2018ರಲ್ಲಿ ದ್ರಾವಿಡ್ ಮಾರ್ಗದರ್ಶನದಲ್ಲಿ ಪೃಥ್ವಿ ಶಾ ನೇತೃತ್ವದ ಭಾರತ ಕಿರಿಯರ ತಂಡ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
2019ರ ಬಳಿಕ ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡಮಿ (ಎನ್‌ಸಿಎ) ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಭಾರತ ತಂಡ ಲಂಕಾ ಪ್ರವಾಸ ಕೈಗೊಂಡಿದ್ದಾಗ ರಾಹುಲ್ ಮೊದಲ ಬಾರಿಗೆ ಟೀಂ ಇಂಡಿಯಾ ಕೋಚ್ ಆಗಿ ಕಾರ್ಯ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು.
ರಾಹುಲ್ ದ್ರಾವಿಡ್ ಭಾರತ ಪರ 164 ಟೆಸ್ಟ್, 344 ಏಕದಿನ ಹಾಗೂ ಒಂದು ಟಿ20 ಪಂದ್ಯಗಳನ್ನಾಡಿದ್ದು, ಕ್ರಮವಾಗಿ 13,288, 10,889 ಹಾಗೂ 31 ರನ್ ಬಾರಿಸಿದ್ದಾರೆ.