ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ತಮ್ಮ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ.
ಹೈದರಾಬಾದ್ ಎದುರಿನ ಪಂದ್ಯದಲ್ಲಿ ಧವನ್ ಕೇವಲ 37 ಎಸೆತಗಳಲ್ಲಿ 6 ಬೌಂಡರಿ ಹಾಗೂ ಒಂದು 1 ಸಿಕ್ಸರ್ ನೆರವಿನಿಂದ 42 ರನ್ ಬಾರಿಸಿ ರಶೀದ್ ಖಾನ್ ಬೌಲಿಂಗ್ ಮಾಡಿ ವಿಕೆಟ್ ಒಪ್ಪಿಸಿದರು. ಇದೇ ಪಂದ್ಯದಲ್ಲಿ ಧವನ್ ಅಪರೂಪದ ದಾಖಲೆ ಬರೆದಿದ್ದಾರೆ.
ಈ ಆವೃತ್ತಿಯಲ್ಲಿ 400 ರನ್ ಪೂರೈಸಿದ ಮೊದಲ ಬ್ಯಾಟ್ಸ್‌ಮನ್ ಎನ್ನುವ ಹಿರಿಮೆಗೆ ಶಿಖರ್ ಧವನ್ ಪಾತ್ರರಾಗಿರುವ ಅವರು, ಗರಿಷ್ಠ ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೆ ಮರಳಿದ್ದಾರೆ.
ಇದಷ್ಟೇ ಅಲ್ಲದೇ ಶಿಖರ್ ಧವನ್ ಸತತ 6ನೇ ಬಾರಿಗೆ ಐಪಿಎಲ್‌ನಲ್ಲಿ 400+ ರನ್ ಬಾರಿಸಿದ ಮೂರನೇ ಬ್ಯಾಟ್ಸ್‌ಮನ್ ಎನ್ನುವ ಕೀರ್ತಿಗೆ ಧವನ್ ಪಾತ್ರರಾಗಿದ್ದಾರೆ. ಈ ಮೊದಲು ಸುರೇಶ್ ರೈನಾ ಹಾಗೂ ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ್ದಾರೆ.
ಇನ್ನು ಐಪಿಎಲ್‌ನಲ್ಲಿ ಶಿಖರ್ ಧವನ್ ಒಟ್ಟಾರೆ 8ನೇ ಬಾರಿಗೆ 400+ ರನ್ ಬಾರಿಸುವ ಮೂಲಕ ವಾರ್ನರ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ(7 ಬಾರಿ 400+ ರನ್) ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಸುರೇಶ್ ರೈನಾ 9 ಬಾರಿ 400+ ರನ್ ಬಾರಿಸಿದ್ದು, ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ಧವನ್ ಎರಡನೇ ಸ್ಥಾನದಲ್ಲಿದ್ದಾರೆ
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ಧವನ್, ಆಕರ್ಷಕ ಬ್ಯಾಟಿಂಗ್ ನಡೆಸಿದರು. ಧವನ್ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ತೋರಿದರೂ, ಅಕ್ಟೋಬರ್-ನವೆಂಬರ್‌ನಲ್ಲಿ ಯುಎಇನಲ್ಲೇ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಅವರನ್ನು ಆಯ್ಕೆ ಮಾಡದೆ ಇರುವುದಕ್ಕೆ ಸಾಮಾಜಿಕ ತಾಣಗಳಲ್ಲಿ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.