ಬಹುನಿರೀಕ್ಷಿತ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಇದೇ ಮಾರ್ಚ್ 26ರಿಂದ ಆರಂಭವಾಗಲಿದ್ದು, ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಹೈವೋಲ್ಟೇಜ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ ತಂಡಗಳು ಸೆಣಸಾಟ ನಡೆಸಲಿವೆ.
ಬಿಸಿಸಿಐ ಕೇಂದ್ರ ಗುತ್ತಿಗೆ ಹೊಂದಿರುವ ಆಟಗಾರರು ಐಪಿಎಲ್‌ನಲ್ಲಿ ಆಡುವ ಮೊದಲು ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗುವುದು ಕಡ್ಡಾಯಗೊಳಿಸಿದೆ. ಇದರ ಬೆನ್ನಲ್ಲೇ ಹಲವು ಕ್ರಿಕೆಟಿಗರು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಯೋ ಯೋ ಟೆಸ್ಟ್‌ನಲ್ಲಿ ಪಾಲ್ಗೊಂಡಿದ್ದರು.
ಈ ಪೈಕಿ ಮುಂಬೈ ಮೂಲದ ಭಾರತ ತಂಡದ ಆರಂಭಿಕ ಬ್ಯಾಟರ್ ಪೃಥ್ವಿ ಶಾ, ಯೋ ಯೋ ಟೆಸ್ಟ್‌ನಲ್ಲಿ ಅನುತ್ತೀರ್ಣರಾಗಿದ್ದಾರೆ. ಇದು ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಕೊಂಚ ಆತಂಕವನ್ನುಂಟು ಮಾಡಿತ್ತು. ಪೃಥ್ವಿ ಶಾ ಅಭಿಮಾನಿಗಳ ಪಾಲಿಗೆ ಬಿಸಿಸಿಐ ಗುಡ್ ನ್ಯೂಸ್ ನೀಡಿದೆ.
ಯೋ ಯೋ ಟೆಸ್ಟ್ ಫೇಲ್ ಆಗಿದ್ದರೂ ಸಹಾ, ಪೃಥ್ವಿ ಶಾ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೌದು, ಇದು ಸತ್ಯ. ಪೃಥ್ವಿ ಶಾ, ಇತ್ತೀಚೆಗಷ್ಟೇ ಬಿಸಿಸಿಐ ಬಿಡುಗಡೆ ಮಾಡಿದ ಕೇಂದ್ರಿಯ ಗುತ್ತಿಯಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರು. ಕೇಂದ್ರೀಯ ಗುತ್ತಿಗೆಗೆ ಒಳಪಡದ ಪೃಥ್ವಿ ಶಾ, ಫಿಟ್ನೆಸ್ ಟೆಸ್ಟ್ ಫೇಲ್ ಆಗಿದ್ದರೂ ಸಹಾ ಐಪಿಎಲ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.
ಪಿಟಿಐ ವರದಿಯ ಪ್ರಕಾರ, ಆಟಗಾರನೊಬ್ಬ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಲು 16.5 ಅಂಕಗಳನ್ನು ಗಳಿಸಬೇಕು. ಆದರೆ ಮುಂಬೈ ಮೂಲದ ಪೃಥ್ವಿ ಶಾ ಕೇವಲ 15 ಅಂಕಗಳನ್ನಷ್ಟೇ ಗಳಿಸಿದ್ದಾರೆಂದು ವರದಿಯಾಗಿದೆ.
ಪೃಥ್ವಿ ಶಾ, ಕಳೆದ ವರ್ಷ ಶ್ರೀಲಂಕಾ ಪ್ರವಾಸದ ವೇಳೆ ಟೀಂ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಇದಾದ ಬಳಿಕ ಫಿಟ್ನೆಸ್ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಶಾ, ಬಿಸಿಸಿಐ ಕೇಂದ್ರೀಯ ಗುತ್ತಿಗೆಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಮುಂಬರುವ 15ನೇ ಅವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮಾರ್ಚ್ 27ರಂದು ಮುಂಬೈ ಇಂಡಿಯನ್ಸ್ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದ್ದು, ಬಲಗೈ ಬ್ಯಾಟರ್ ಪೃಥ್ವಿ ಶಾ, ಡೇವಿಡ್ ವಾರ್ನರ್ ಜತೆ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.