ICC T20 World Cup: ಜಸ್ಪ್ರೀತ್ ಬುಮ್ರಾ ಕುರಿತಂತೆ ಅಚ್ಚರಿಯ ಹೇಳಿಕೆ ನೀಡಿದ ಸೌರವ್ ಗಂಗೂಲಿ..!

First Published Oct 1, 2022, 12:28 PM IST

ನವದೆಹಲಿ(ಅ.1): ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗಾಯದ ಸಮಸ್ಯೆ ಭಾರತ ಕ್ರಿಕೆಟ್ ತಂಡವನ್ನು ಕಾಡಲಾರಂಭಿಸಿದೆ. ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ಭಾರತ ತಂಡವು ಬುಮ್ರಾ ಸೇವೆಯಿಂದ ವಂಚಿತರಾಗುವ ಬಗ್ಗೆ ಸುದ್ದಿಗಳು ಹರಿದಾಡಲಾರಂಭಿಸಿವೆ. ಇದೆಲ್ಲದರ ನಡುವೆ ಬುಮ್ರಾ ಲಭ್ಯತೆ ಕುರಿತಂತೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
 

ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಚುಟುಕು ಕ್ರಿಕೆಟ್ ವಿಶ್ವಕಪ್ ಎತ್ತಿಹಿಡಿಯುವ ಉತ್ಸಾಹದಲ್ಲಿದೆ.

ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಎದುರಾಗಿದ್ದು, ಈಗಾಗಲೇ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಲಭ್ಯತೆ ಬಗ್ಗೆಯೂ ಅನುಮಾನಗಳು ಎದ್ದಿವೆ.

ಬೆನ್ನು ನೋವಿನಿಂದ ಬಳಲುತ್ತಿರುವ ಜಸ್ಪ್ರೀತ್ ಬುಮ್ರಾ, ಈಗಾಗಲೇ ತವರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಇನ್ನು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಬುಮ್ರಾ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ.
 

ಬಿಸಿಸಿಐ ಅಧಿಕಾರಿಯೊಬ್ಬರ ಪ್ರಕಾರ ವೇಗಿ ಜಸ್ಪ್ರೀತ್ ಬುಮ್ರಾ ಕನಿಷ್ಠ 6 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ‘ಬುಮ್ರಾ ವಿಶ್ವಕಪ್‌ ಆಡುವುದಿಲ್ಲ. ಅವರು ಬೆನ್ನು ನೋವಿನಿಂದ ತೀವ್ರವಾಗಿ ಬಳಲುತ್ತಿದ್ದಾರೆ. ಅತಿಯಾದ ಕೆಲಸದ ಒತ್ತಡದಿಂದ ಮೂಳೆ ಮುರಿದಿರಬಹುದು. 6 ತಿಂಗಳ ಕಾಲ ಅವರು ಆಯ್ಕೆಗೆ ಲಭ್ಯರಿರುವುದಿಲ್ಲ’ ಎಂದು ಹೇಳಿದ್ದಾರೆ.

ವೇಗಿ ಜಸ್ಪ್ರೀತ್‌ ಬುಮ್ರಾಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇಲ್ಲ. ಆದರೆ ಹೆಚ್ಚು ಸಮಯ ಅವರು ವಿಶ್ರಾಂತಿ ಪಡೆಯಬೇಕಿದೆ. ಗುಣಮುಖರಾಗಲು ವಿಶ್ರಾಂತಿಯೇ ಉತ್ತಮ ಮದ್ದು ಎಂದು ವೈದ್ಯರೊಬ್ಬರು ತಿಳಿಸಿರುವುದಾಗಿ ಬಿಸಿಸಿಐ ಅಧಿಕಾರಿ ಹೇಳಿದ್ದಾರೆ.

ಇದೀಗ ಜಸ್ಪ್ರೀತ್ ಬುಮ್ರಾ ಅವರ ಗಾಯದ ಸಮಸ್ಯೆ ಕುರಿತಂತೆ ಪ್ರತಿಕ್ರಿಯಿಸಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. 

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆರಂಭವಾದರೂ, ಟೀಂ ಇಂಡಿಯಾ ತನ್ನ ಪಾಲಿನ ಮೊದಲ ಪಂದ್ಯವನ್ನುಅಕ್ಟೋಬರ್ 23ರಂದು ಪಾಕಿಸ್ತಾನ ವಿರುದ್ದ ಕಣಕ್ಕಿಳಿಯಲಿದೆ. ಹೀಗಾಗಿ ಇನ್ನೂ ಸಾಕಷ್ಟು ಕಾಲಾವಕಾಶ ಇರುವುದರಿಂದ ಈಗಲೇ ಬುಮ್ರಾ ಅಲಭ್ಯತೆ ಬಗ್ಗೆ ತೀರ್ಮಾನಿಸಲು ಸಾಧ್ಯವಿಲ್ಲ ಎಂದು ದಾದಾ ಹೇಳಿದ್ದಾರೆ.

ಸದ್ಯ ಜಸ್ಪ್ರೀತ್ ಬುಮ್ರಾ, ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಬಂದಿಳಿದಿದ್ದು, ಸೂಕ್ತ ತಪಾಸಣೆ ಬಳಿಕ ಮುಂದಿನ ಎರಡು ಮೂರು ದಿನಗಳ ಬಳಿಕ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ

click me!