IPL 2023: ಈ ಐಪಿಎಲ್ ಟೂರ್ನಿಯಿಂದ ಹೊರಬಿದ್ದ ಸ್ಟಾರ್ ಕ್ರಿಕೆಟಿಗರಿವರು..! ಆರ್‌ಸಿಬಿ, ಮುಂಬೈಗೆ ದೊಡ್ಡ ಹೊಡೆತ

First Published | Mar 28, 2023, 5:10 PM IST

ಬೆಂಗಳೂರು(ಮಾ.28): ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಹಲವು ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ನೆಟ್ಟಿಗರು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಇಂಜುರಿ ಪ್ರೀಮಿಯರ್ ಲೀಗ್ ಎಂದು ಹೆಸರು ಬದಲಿಸಿ ಎಂದು ಟ್ರೋಲ್ ಮಾಡಿದ್ದಾರೆ.

ಈ ಬಾರಿಯ ಐಪಿಎಲ್ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದ ಆಟಗಾರರು ಯಾರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

1. ಜಸ್ಪ್ರೀತ್ ಬುಮ್ರಾ:

ಮುಂಬೈ ಇಂಡಿಯನ್ಸ್‌ ತಂಡದ ಮಾರಕ ವೇಗಿ 2022ರ ಸೆಪ್ಟೆಂಬರ್‌ ಬಳಿಕ ಇದುವರೆಗೂ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಪಂದ್ಯವನ್ನಾಡಿಲ್ಲ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ, ಇದೀಗ ಐಪಿಎಲ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ.
 

ಮುಂಬೈ ಇಂಡಿಯನ್ಸ್ ತಂಡದ ಪ್ರೀಮಿಯರ್ ವೇಗಿ ಎನಿಸಿಕೊಂಡಿರುವ ಬುಮ್ರಾ, ಅಲಭ್ಯತೆ ತಂಡವನ್ನು ಕಾಡುವ ಸಾಧ್ಯತೆಯಿದೆ. ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಬುಮ್ರಾ ಮುಂದಿನ 6 ತಿಂಗಳು ಕ್ರಿಕೆಟ್‌ನಿಂದ ದೂರವೇ ಉಳಿಯುವ ಸಾಧ್ಯತೆಯಿದೆ.

Tap to resize

2. ರಿಷಭ್ ಪಂತ್:

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕಳೆದ ವರ್ಷದ ಕೊನೆಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಇದೀಗ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
 

ಇದೀಗ 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ರಿಷಭ್ ಪಂತ್, ಅಧಿಕೃತವಾಗಿ ಹೊರಬಿದ್ದಿದ್ದು, ಪಂತ್ ಅನುಪಸ್ಥಿತಿಯಲ್ಲಿ ಡೇವಿಡ್ ವಾರ್ನರ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

3. ಜಾನಿ ಬೇರ್‌ಸ್ಟೋವ್‌:

ಇಂಗ್ಲೆಂಡ್ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೇರ್‌ಸ್ಟೋವ್, ಫ್ರೀಕ್ ಇಂಜುರಿಗೆ ಒಳಗಾಗಿದ್ದು, 16ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಅಲಭ್ಯರಾಗಿದ್ದಾರೆ. ಇದು ಪಂಜಾಬ್ ಕಿಂಗ್ಸ್ ತಂಡದ ಪಾಲಿಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದೆ.
 

ಜಾನಿ ಬೇರ್‌ಸ್ಟೋವ್, ಕಳೆದ ಸೆಪ್ಟೆಂಬರ್‌ನಲ್ಲಿ ಗಾಲ್ಫ್ ಆಡುವಾಗ ಗಾಯ ಮಾಡಿಕೊಂಡಿದ್ದರು. ಇದಾದ ಬಳಿಕ ಟಿ20 ವಿಶ್ವಕಪ್‌ ಟೂರ್ನಿಯಿಂದಲೂ ಹೊರಬಿದ್ದಿದ್ದರು. ಇದೀಗ ಬೇರ್‌ಸ್ಟೋವ್ ಬದಲಿಗೆ ಆಸ್ಟ್ರೇಲಿಯಾ ಮೂಲದ ಸ್ಪೋಟಕ ಬ್ಯಾಟರ್ ಮ್ಯಾಥ್ಯೂ ಶಾರ್ಟ್‌ ಅವರು ಪಂಜಾಬ್ ತಂಡ ಕೂಡಿಕೊಂಡಿದ್ದಾರೆ.
 

4. ಪ್ರಸಿದ್ದ್ ಕೃಷ್ಣ:

ಕರ್ನಾಟಕ ಮೂಲದ ನೀಳಕಾಯದ ವೇಗಿ ಪ್ರಸಿದ್ಧ್ ಕೃಷ್ಣ, ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆ ಮಾಡಿಕೊಂಡಿದ್ದು, 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
 

27 ವರ್ಷದ ಪ್ರಸಿದ್ದ್ ಕೃಷ್ಣ, ಆಗಸ್ಟ್‌ 2022ರ ಬಳಿಕ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಇದೀಗ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಪ್ರದೀಪ್ ಕೃಷ್ಣ ಬದಲಿಗೆ ವೇಗಿ ಸಂದೀಪ್ ಕೃಷ್ಣ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿದೆ.
 

5. ಕೈಲ್ ಜೇಮಿಸನ್‌:

ನ್ಯೂಜಿಲೆಂಡ್‌ನ ನೀಳಕಾಯದ ವೇಗಿ ಕೈಲ್ ಜೇಮಿಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 1 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಆದರೆ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಜೇಮಿಸನ್, ಇದೀಗ 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
 

ಕೈಲ್ ಜೇಮಿಸನ್‌, ಐಪಿಎಲ್‌ಗೆ ಅಲಭ್ಯರಾಗಿರುವ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ದಕ್ಷಿಣ ಆಫ್ರಿಕಾ ಮೂಲದ ವೇಗಿ ಸಿಸಾಂಡ ಮಗಲಾ ಅವರನ್ನು ತನ್ನತ್ತ ಸೆಳೆದುಕೊಂಡಿದೆ.

6. ಜೇ ರಿಚರ್ಡ್‌ಸನ್:

ಆಸ್ಟ್ರೇಲಿಯಾ ಮೂಲದ ವೇಗದ ಬೌಲರ್‌ ಜೇ ರಿಚರ್ಡ್‌ಸನ್‌, ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಇದೀಗ 2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
 

ಜೇ ರಿಚರ್ಡ್‌ಸನ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 1.5 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಗಾಯದ ಸಮಸ್ಯೆಯಿಂದಾಗಿ ಬುಮ್ರಾ ಬಳಿಕ ಐಪಿಎಲ್‌ನಿಂದ ಹೊರಬಿದ್ದ ಎರಡನೇ ಮುಂಬೈ ಇಂಡಿಯನ್ಸ್ ವೇಗಿ ಇವರಾಗಿದ್ದಾರೆ.

7. ವಿಲ್ ಜ್ಯಾಕ್ಸ್‌

ಇಂಗ್ಲೆಂಡ್ ಸ್ಪೋಟಕ ಬ್ಯಾಟರ್ ವಿಲ್ ಜ್ಯಾಕ್ಸ್ ಅವರನ್ನು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯು ಮಿನಿ ಹರಾಜಿನಲ್ಲಿ 3.2 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಆದರೆ ಸ್ನಾಯು ಸೆಳೆತಕ್ಕೆ ಒಳಗಾಗಿರುವ ಜ್ಯಾಕ್ಸ್, ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಬಾಂಗ್ಲಾದೇಶ ಎದುರಿನ ಸರಣಿಯ ವೇಳೆ ವಿಲ್ ಜ್ಯಾಕ್ಸ್ ಗಾಯಗೊಂಡು, ಇದೀಗ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ವಿಲ್ ಜ್ಯಾಕ್ಸ್ ಬದಲಿಗೆ ಆರ್‌ಸಿಬಿಯು ನ್ಯೂಜಿಲೆಂಡ್ ಆಲ್ರೌಂಡರ್ ಮಿಚೆಲ್ ಬ್ರೇಸ್‌ವೆಲ್ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿದೆ.

8. ಶ್ರೇಯಸ್ ಅಯ್ಯರ್: ಡೌಟ್

ಕೋಲ್ಕತಾ ನೈಟ್ ರೈಡರ್ಸ್‌ ತಂಡದ ನಾಯಕ ಶ್ರೇಯಸ್ ಅಯ್ಯರ್, ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಐಪಿಎಲ್‌ನ ಮೊದಲಾರ್ಧದ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಹೀಗಾಗಿ ಕೆಕೆಆರ್ ಫ್ರಾಂಚೈಸಿಯು ನಿತೀಶ್ ರಾಣಾಗೆ ನಾಯಕ ಪಟ್ಟ ಕಟ್ಟಿದೆ.
 

9. ರಜತ್ ಪಾಟೀದಾರ್

ಆರ್‌ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟೀದಾರ್, ಪಾದದ ಗಾಯದಿಂದ ಬಳಲುತ್ತಿದ್ದು, ಐಪಿಎಲ್‌ನ ಮೊದಲಾರ್ಧದ ಪಂದ್ಯಗಳಿಗೆ ಅಲಭ್ಯರಾಗಿದ್ದು, ದ್ವಿತಿಯಾರ್ಧದ ವೇಳೆಗೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
 

10. ಜೋಶ್ ಹೇಜಲ್‌ವುಡ್‌:

ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಜಲ್‌ವುಡ್ ಕೂಡಾ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಇದೀಗ ಐಪಿಎಲ್‌ನ ಆರಂಭಿಕ ಪಂದ್ಯಗಳಿಗೆ ಆಸೀಸ್ ವೇಗಿ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ.

Latest Videos

click me!