ರಾಹುಲ್ ತ್ರಿಪಾಠಿ ಹಾಗೂ ವೆಂಕಟೇಶ್ ಅಯ್ಯರ್ ಸ್ಪೋಟಕ ಅರ್ಧಶತಕಗಳ ನೆರವಿನಿಂದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಕೆಕೆಆರ್ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ 156 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕೆಕೆಆರ್ ಕೇವಲ 15.1 ಓವರ್‌ಗಳಲ್ಲಿ ಗುರಿ ತಲುಪಿತು. ಇದಷ್ಟೇ ಅಲ್ಲದೇ ಅಂಕಪಟ್ಟಿಯಲ್ಲಿ ಕೆಕೆಆರ್ 4ನೇ ಸ್ಥಾನಕ್ಕೇರಿದೆ
ಸದ್ಯ ಪ್ಲೇ ಆಫ್ ಕನಸ್ಸನ್ನು ಜೀವಂತವಾಗಿರಿಸಿಕೊಂಡಿರುವ ಕೆಕೆಆರ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ ತಪ್ಪಿಗಾಗಿ ಇಯಾನ್ ಮಾರ್ಗನ್‌ಗೆ 24 ಲಕ್ಷ ರುಪಾಯಿ ದಂಡದ ಶಿಕ್ಷೆ ಎದುರಾಗಿದೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಮೊದಲ ಬಾರಿಗೆ ನಿಧಾನಗತಿ ಬೌಲಿಂಗ್ ಮಾಡಿದ ತಪ್ಪಿಗೆ ನಾಯಕ ಸಂಜು ಸ್ಯಾಮ್ಸನ್‌ಗೆ 12 ಲಕ್ಷ ರುಪಾಯಿ ದಂಡ ವಿಧಿಸಲಾಗಿತ್ತು.
14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ ನೈಟ್ ರೈಡರ್ಸ್ ತಂಡವು ಎರಡನೇ ಬಾರಿಗೆ ನಿಧಾನಗತಿಯ ಬೌಲಿಂಗ್ ನಡೆಸಿತ್ತು. ಹೀಗಾಗಿ ನಿಗದಿತ ಸಮಯದಲ್ಲಿ ಕೆಕೆಆರ್ ಬೌಲಿಂಗ್ ಇನಿಂಗ್ಸ್ ಮುಕ್ತಾಯವಾಗಿರಲಿಲ್ಲ. ಆವೃತ್ತಿಯಲ್ಲಿ 2ನೇ ಬಾರಿಗೆ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಕೆಕೆಆರ್ ತಂಡದ ನಾಯಕ ಮಾರ್ಗನ್‌ಗೆ 24 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ.
ಇನ್ನು ಕೆಕೆಆರ್ ತಂಡದ ಆಡುವ ಹನ್ನೊಂದರ ಬಳಗದಲ್ಲಿದ್ದ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಸಂಭಾವನೆಯ 25% ಈ ಪೈಕಿ ಯಾವ ಕಡಿಮೆಯೇ ಅದನ್ನು ಆಟಗಾರರು ದಂಡದ ರೂಪದಲ್ಲಿ ಭರಿಸಬೇಕಿದೆ.
ಸದ್ಯ ಕೋಲ್ಕತ ನೈಟ್ ರೈಡರ್ಸ್ ತಂಡವು 9 ಪಂದ್ಯಗಳನ್ನಾಡಿ 4 ಗೆಲುವು ಹಾಗೂ 5 ಸೋಲುಗಳೊಂದಿಗೆ 8 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರಿದ್ದು, ಪ್ಲೇ-ಆಫ್‌ಗೇರುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಯುಎಇ ಚರಣದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಎದುರು ಗೆದ್ದು ಬೀಗಿದ್ದ ಕೆಕೆಆರ್, ಇದೀಗ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೂ ಸೋಲಿನ ಶಾಕ್ ನೀಡಿದ್ದು, ಬಲಿಷ್ಠ ತಂಡವಾಗಿ ಹೊರಹೊಮ್ಮಿದೆ.