ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಸ್ಟ್ರೇಲಿಯಾ ತಂಡವು ಎರಡನೇ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿದೆ. 2010ರಲ್ಲಿ ಕಪ್ ಗೆಲ್ಲಲು ವಿಫಲವಾಗಿದ್ದ ಆಸ್ಟ್ರೇಲಿಯಾ ತಂಡವು ಇದೀಗ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.
ಸೆಮೀಸ್‌ನಲ್ಲಿ ಪಾಕಿಸ್ತಾನ ವಿರುದ್ದ ರೋಚಕ ಜಯ ಸಾಧಿಸಿರುವ ಆಸ್ಟ್ರೇಲಿಯಾ ತಂಡವು ಆತ್ಮವಿಶ್ವಾಸದಿಂದ ಬೀಗುತ್ತಿದೆ. ಆಸೀಸ್ ತಂಡದ ಫೈನಲ್‌ವರೆಗಿನ ಹಾದಿ ಹೇಗಿತ್ತು ಎನ್ನುವುದನ್ನು ನೋಡುವುದಾದರೇ..
ಮೊದಲ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ದ 5 ವಿಕೆಟ್‌ಗಳ ಜಯ
ಅಬುಧಾಬಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 9 ವಿಕೆಟ್ ಕಳೆದುಕೊಂಡು 118 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಆಸ್ಟ್ರೇಲಿಯಾ ತಂಡವು 5 ವಿಕೆಟ್ ಕಳೆದುಕೊಂಡು 2 ಎಸೆತಗಳು ಬಾಕಿ ಇರುವಂತೆಯೇ ರೋಚಕ ಜಯ ಸಾಧಿಸಿತ್ತು.
ಎರಡನೇ ಪಂದ್ಯ: ಲಂಕಾ ವಿರುದ್ದ 7 ವಿಕೆಟ್‌ಗಳ ಜಯ
ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 6 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತ್ತು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 3 ಓವರ್ ಭಾಕಿ ಇರುವಂತೆಯೇ ಕೇವಲ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತ್ತು.
ಮೂರನೇ ಪಂದ್ಯ: ಇಂಗ್ಲೆಂಡ್ ಎದುರು 8 ವಿಕೆಟ್‌ಗಳ ಸೋಲು
ದುಬೈನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಮಾರಕ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡವು 125 ರನ್‌ಗಳಿಗೆ ಸರ್ವಪತನ ಕಂಡಿತ್ತು. ಈ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ಕೇವಲ 11.4 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಭರ್ಜರಿಯಾಗಿ ಗೆಲುವಿನ ಕೇಕೆ ಹಾಕಿತ್ತು.
ನಾಲ್ಕನೇ ಪಂದ್ಯ: ಬಾಂಗ್ಲಾದೇಶ ವಿರುದ್ದ 8 ವಿಕೆಟ್‌ಗಳ ಜಯ
ದುಬೈನಲ್ಲಿ ನಡೆದ ಪಂದ್ಯದಲ್ಲಿ ಆಡಂ ಜಂಪಾ ಮಾರಕ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ ತಂಡವು 73 ರನ್‌ಗಳಿಗೆ ಸರ್ವಪತನ ಕಂಡಿತ್ತು. ಈ ಸುಲಭ ಗುರಿ ಬೆನ್ನತ್ತಿದ ಆಸೀಸ್ ತಂಡವು ಕೇವಲ 6.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತ್ತು.
ಐದನೇ ಪಂದ್ಯ: ವಿಂಡೀಸ್ ಎದುರು 8 ವಿಕೆಟ್‌ಗಳ ಜಯ
ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ವೆಸ್ಟ್ ಇಂಡೀಸ್ ತಂಡವು 7 ವಿಕೆಟ್ ಕಳೆದುಕೊಂಡು 157 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತ್ತು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ, 16.2 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರುವ ಮೂಲಕ ಸೆಮೀಸ್‌ಗೆ ಲಗ್ಗೆಯಿಟ್ಟಿತು.
ಸೆಮೀಸ್‌ನಲ್ಲಿ ಪಾಕ್ ವಿರುದ್ದ 5 ವಿಕೆಟ್‌ಗಳ ರೋಚಕ ಜಯ
ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ 4 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ, ಮ್ಯಾಥ್ಯೂ ವೇಡ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಒಂದು ಓವರ್ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿ ಫೈನಲ್‌ಗೆ ಲಗ್ಗೆಯಿಟ್ಟಿದೆ.
ಇದೀಗ ನವೆಂಬರ್ 14ರಂದು ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ನ್ಯೂಜಿಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.