ಬೆಂಗಳೂರು: ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರು ಟಿ20 ಸರಣಿ ವೈಟ್‌ವಾಷ್ ಬೆನ್ನಲ್ಲೇ ಇದೀಗ, ಭಾರತ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಜಿಂಬಾಬ್ವೆ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯಿಂದ ಭಾರತದ ಮತ್ತೋರ್ವ ವಿಶ್ವಕಪ್ ವಿಜೇತ ತಂಡದ ಆಟಗಾರ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.
ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಆಡಿದ ಏಳು ಪಂದ್ಯಗಳ ಪೈಕಿ ಆರು ಪಂದ್ಯಗಳಲ್ಲಿ ಸೋತು ಮುಖಭಂಗ ಅನುಭವಿಸಿದೆ. ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಭಾರತ ತಂಡಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು, ಹಾಲಿ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯ ಮುಂಬರುವ ಜಿಂಬಾಬ್ವೆ ಎದುರಿನ ಟಿ20 ಸರಣಿಯಿಂದ ಹೊರಬೀಳುವ ಭೀತಿಗೆ ಸಿಲುಕಿದ್ದಾರೆ.
26
ವರುಣ್ ಚಕ್ರವರ್ತಿಗೆ ಗಾಯದ ಸಮಸ್ಯೆ
ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಇದೇ ಜುಲೈ 23ರಿಂದ ಆರಂಭವಾಗಲಿದೆ. ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಗಾಯಗೊಂಡಿರುವ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಸ್ನಾಯು ಸೆಳೆತದಿಂದ ಇನ್ನೂ ಸರಿಯಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಜಿಂಬಾಬ್ವೆ ಎದುರಿನ ಟಿ20 ಸರಣಿಯಿಂದ ಹೊರಬೀಳುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
36
ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಸೇರಿದ ವರುಣ್ ಚಕ್ರವರ್ತಿ
ವರುಣ್ ಚಕ್ರವರ್ತಿ ಕೆಲ ತಿಂಗಳ ಹಿಂದಷ್ಟೇ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ವರುಣ್ ಚಕ್ರವರ್ತಿ, ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಸಹ ಆಟಗಾರ ಹರ್ಷಿತ್ ರಾಣಾ ಅವರ ಜತೆ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಸ್ಪೋರ್ಟ್ಸ್ ಸ್ಟಾರ್ ವರದಿಯ ಪ್ರಕಾರ, ವರುಣ್ ಚಕ್ರವರ್ತಿ ಜಿಂಬಾಬ್ವೆ ಸರಣಿಯಿಂದ ಹೊರಬಿದ್ದರೇ ರವಿ ಬಿಷ್ಣೋಯ್‌ಗೆ ಮತ್ತೊಮ್ಮೆ ಭಾರತ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಈ ಅವಕಾಶದಲ್ಲಿ ರವಿ ಬಿಷ್ಣೋಯ್ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. ಅಂದಹಾಗೆ ಈ ಬದಲಾವಣೆಯ ಬಗ್ಗೆ ಬಿಸಿಸಿಐ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
56
ಜಿಂಬಾಬ್ವೆ ಎದುರಿನ ಸರಣಿಗೆ ಹಲವು ಸ್ಟಾರ್ ಆಟಗಾರರಿಗೆ ರೆಸ್ಟ್:
ಹೌದು, ಜಿಂಬಾಬ್ವೆ ಎದುರಿನ ಸರಣಿಯಲ್ಲಿ ಭಾರತ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ ಅವರಂತಹ ಆಟಗಾರರಿಗೆ ರೆಸ್ಟ್ ನೀಡಲಾಗಿದೆ. ಇನ್ನು ಈಗಾಗಲೇ ಪ್ರಕಟಿಸಿರುವ ತಂಡದಲ್ಲಿ ರವಿ ಬಿಷ್ಣೋಯ್ ಅವರನ್ನೂ ತಂಡದಿಂದ ಕೈಬಿಡಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.