ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು ತವರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಪ್ಲೇ ಆಫ್ ಪ್ರವೇಶಿಸುವ ನಿಟ್ಟಿನಲ್ಲಿ ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದೆ.
ಇಡೀ ಐಪಿಎಲ್ ಕ್ರಿಕೆಟ್ ಅಭಿಮಾನಿಗಳ ಚಿತ್ತ ಇಂದು ಆರ್‌ಸಿಬಿ ಹಾಗೂ ಡೆಲ್ಲಿ ನಡುವಿನ ಪಂದ್ಯದ ಮೇಲೆ ನೆಟ್ಟಿದೆ. ಯಾಕೆಂದರೆ ಇಂದು ಗೆಲ್ಲುವ ತಂಡ ಪ್ಲೇ ಆಫ್ ಕನಸು ಜೀವಂತವಾಗಿರಿಸಿಕೊಂಡರೆ, ಸೋತ ತಂಡದ ಪ್ಲೇ ಆಫ್ ಕನಸು ನುಚ್ಚುನೂರಾಗಲಿದೆ.
ಇದೆಲ್ಲದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ಹಾಗೂ ಸ್ಟಾರ್ ಆರಂಭಿಕ ಆಟಗಾರ ವಿರಾಟ್ ಕೊಹ್ಲಿಗೆ ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಮಹತ್ವದ್ದೆನಿಸಿದೆ.
ಹೌದು, ಇಂದು ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದ 250ನೇ ಐಪಿಎಲ್ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಒಂದೇ ತಂಡದ ಪರ 250 ಐಪಿಎಲ್ ಪಂದ್ಯವನ್ನಾಡಿದ ಮೊದಲ ಕ್ರಿಕೆಟಿಗ ಎನ್ನುವ ಹೆಗ್ಗಳಿಕೆಗೆ ವಿರಾಟ್ ಪಾತ್ರರಾಗಲಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಎರಡನೇ ಸ್ಥಾನದಲ್ಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಪರ ಎಂ ಎಸ್ ಧೋನಿ ಇದುವರೆಗೂ 232 ಐಪಿಎಲ್ ಪಂದ್ಯಗಳನ್ನಾಡಿದ್ದಾರೆ.
ಮುಂಬೈ ಇಂಡಿಯನ್ಸ್‌ಗೆ 5 ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಟ್ಟಿರುವ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಮುಂಬೈ ಇಂಡಿಯನ್ಸ್ ಪರ 211 ಪಂದ್ಯಗಳನ್ನಾಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನು ಇದಾದ ಬಳಿಕ ವೆಸ್ಟ್ ಇಂಡೀಸ್ ಮೂಲದ ದಿಗ್ಗಜ ಕ್ರಿಕೆಟಿಗ ಕೀರನ್ ಪೊಲ್ಲಾರ್ಡ್ 4ನೇ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಪೊಲ್ಲಾರ್ಡ್ ಒಟ್ಟು 189 ಐಪಿಎಲ್ ಪಂದ್ಯಗಳನ್ನಾಡಿದ್ದಾರೆ.
ಚೊಚ್ಚಲ ಆವೃತ್ತಿಯ ಐಪಿಎಲ್ ಟೂರ್ನಿಯಿಂದಲೂ ಆರ್‌ಸಿಬಿ ತಂಡವನ್ನು ಪ್ರತಿನಿಧಿಸುತ್ತಾ ಬಂದಿರುವ ವಿರಾಟ್ ಕೊಹ್ಲಿ, ತನ್ನ ನೆಚ್ಚಿನ ಮೈದಾನದಲ್ಲಿ 250ನೇ ಐಪಿಎಲ್ ಪಂದ್ಯವನ್ನಾಡಲು ಸಜ್ಜಾಗಿದ್ದು, ಈ ಪಂದ್ಯದಲ್ಲಿ ದೊಡ್ಡ ಮೊತ್ತ ಸಿಡಿಸಿ ಸ್ಮರಣೀಯವಾಗಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.