ಭಾರತ ಹಾಗೂ ಆಫ್ಘಾನಿಸ್ತಾನ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಜನವರಿ 11ರಂದು ಆರಂಭವಾಗಲಿದ್ದು, ಈ ಪಂದ್ಯಕ್ಕೆ ಮೊಹಾಲಿಯಲ್ಲಿರುವ ಪಂಜಾಬ್ ಕ್ರಿಕೆಟ್ ಸಂಸ್ಥೆಯ ಐಎಸ್ ಬಿಂದ್ರಾ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ.
2024ರ ಜೂನ್ ತಿಂಗಳಿನಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಈ ಸರಣಿ ಸಾಕಷ್ಟು ಮಹತ್ವದ್ದಾಗಿದ್ದರಿಂದ ಅನುಭವಿ ಕ್ರಿಕೆಟಿಗರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿತ್ತು.
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2022ರ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರು ಸೋಲಿನ ಬಳಿಕ ಭಾರತ ಟಿ20 ತಂಡದಿಂದ ಹೊರಗುಳಿದಿದ್ದರು. ಆದರೆ ಇದೀಗ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಕೆಲವೇ ತಿಂಗಳು ಬಾಕಿ ಇದ್ದಾಗಲೇ ಅನುಭವಿ ಬ್ಯಾಟರ್‌ಗಳಿಗೆ ಆಯ್ಕೆ ಸಮಿತಿ ಮಣೆ ಹಾಕಿದೆ.
35 ವರ್ಷದ ಕೊಹ್ಲಿ, 36ರ ರೋಹಿತ್ 2022ರ ಟಿ20 ವಿಶ್ವಕಪ್ ಬಳಿಕ ಯಾವುದೇ ಅಂತಾರಾಷ್ಟ್ರೀಯ ಟಿ20 ಪಂದ್ಯವಾಡಿಲ್ಲ. ಆದರೆ ಮುಂಬರುವ ಟಿ20 ವಿಶ್ವಕಪ್‌ನಲ್ಲಿ ತಂಡಕ್ಕೆ ನೇರವಾಗಿ ಆಯ್ಕೆ ಮಾಡುವ ಬದಲು ಆಫ್ಘನ್ ಸರಣಿಯಲ್ಲಿ ಆಡಿಸಲಾಗುತ್ತಿದೆ.
ಇದೀಗ ವೈಯುಕ್ತಿಕ ಕಾರಣದಿಂದಾಗಿ ವಿರಾಟ್ ಕೊಹ್ಲಿ, ಆಫ್ಘಾನಿಸ್ತಾನ ಎದುರಿನ ಮೊದಲ ಟಿ20 ಪಂದ್ಯಕ್ಕೆ ಅಲಭ್ಯರಾಗಿರುವುದಾಗಿ ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ.
ಈ ಮೊದಲು ಆಫ್ಘಾನಿಸ್ತಾನ ಎದುರಿನ ಸರಣಿಯಲ್ಲಿ ರೋಹಿತ್ ಶರ್ಮಾ ಜತೆ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಆದರೆ ಮೊದಲ ಪಂದ್ಯಕ್ಕೆ ಕೊಹ್ಲಿ ಅಲಭ್ಯತೆ ಹಿನ್ನೆಲೆಯಲ್ಲಿ ಜೈಸ್ವಾಲ್ ಹಾಗೂ ಗಿಲ್ ನಡುವೆ ಆರಂಭಿಕ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿತ್ತು.
ಈ ವಿಚಾರದ ಕುರಿತಂತೆ ಗೊಂದಲಕ್ಕೆ ತೆರೆ ಎಳೆದಿರುವ ಹೆಡ್ ಕೋಚ್ ರಾಹುಲ್ ದ್ರಾವಿಡ್, ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಜತೆ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ಖಚಿತಪಡಿಸಿದ್ದಾರೆ.
ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಟೀಂ ಇಂಡಿಯಾ ಆಡಲಿರುವ ಕಟ್ಟಕಡೆಯ ಅಂತಾರಾಷ್ಟ್ರೀಯ ಟಿ20 ಸರಣಿ ಇದಾಗಿದೆ. ಆಫ್ಘಾನ್ ಎದುರಿನ ಸರಣಿ ಮುಗಿದ ಬಳಿಕ ಟೀಂ ಇಂಡಿಯಾ, ತವರಿನಲ್ಲಿ ಇಂಗ್ಲೆಂಡ್ ಎದುರು 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.
ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿ ಮುಗಿಯುತ್ತಿದ್ದಂತೆಯೇ ಟೀಂ ಇಂಡಿಯಾ ಆಟಗಾರರು 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಐಪಿಎಲ್ ಟೂರ್ನಿಯು ಮಾರ್ಚ್ ಕೊನೆಯ ವಾರದಿಂದ ಮೇ ವರೆಗೂ ನಡೆಯುವ ಸಾಧ್ಯತೆಯಿದೆ.
ಐಪಿಎಲ್ ಮುಗಿಯುತ್ತಿದ್ದಂತೆಯೇ ಜೂನ್ ತಿಂಗಳ ಮೊದಲ ವಾರದಿಂದ ಅಮೆರಿಕ ಹಾಗೂ ವೆಸ್ಟ್‌ಇಂಡೀಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನಾಡಲು ಭಾರತ ತಂಡವು ವಿಮಾನ ಏರಲಿದೆ.