ಸರ್ಕಾರಿ ಡಿಗ್ರಿ, ಬಿಇ ಕಾಲೇಜಲ್ಲಿ ಡಿಜಿಟಲ್‌ ಕಲಿಕೆ: ಸಿಎಂ ಯಡಿಯೂರಪ್ಪ

First Published | Jan 13, 2021, 10:29 AM IST

ಬೆಂಗಳೂರು(ಜ.13):  ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ‘ಡಿಜಿಟಲ್‌ ಕಲಿಕೆ’ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 158ನೇ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಕನಸನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಉನ್ನತ ಶಿಕ್ಷಣದಲ್ಲಿ ದೂರದೃಷ್ಟಿಯ ಬದಲಾವಣೆಗಳನ್ನು ತರುತ್ತಿದೆ. ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳು, 87 ಪಾಲಿಟೆಕ್ನಿಕ್‌ಗಳು ಹಾಗೂ 14 ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ 35 ಕೋಟಿ ರು. ವೆಚ್ಚದಲ್ಲಿ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‌ಎಂಎಸ್‌) ಆಧಾರಿತ ಡಿಜಿಟಲ್‌ ಕಲಿಕೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಈ ಯೋಜನೆಯಡಿ ಕಾಲೇಜು ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಾಧ್ಯಾಪಕರು ಬಹುಭಾಷೆಗಳಲ್ಲಿ 14 ಸಂಯೋಜಿತ ವಿಶ್ವವಿದ್ಯಾಲಯಗಳ ಪಠ್ಯವಸ್ತುವಿಗೆ ಪೂರಕವಾಗಿ ಸ್ವ-ಕಲಿಕೆ ಮತ್ತು ತರಬೇತಿಗೆ ಪೂರಕವಾದ ಇ-ಕಂಟೆಂಟ್‌ ಅನ್ನು ಪಿಪಿಟಿ, ವಿಡಿಯೋಗಳು, ಇ-ಸ್ಟಡಿ ಉಪಕ್ರಮ, ಪ್ರಶ್ನೋತ್ತರ, ಕ್ವಿಜ್‌ ಮತ್ತಿತರ ರೂಪದಲ್ಲಿ ಅಭಿವೃದ್ಧಿಪಡಿಸುತ್ತಿದ್ದಾರೆ ಎಂದು ವಿವರಿಸಿದರು.
Tap to resize

ರಾಜ್ಯದ ಎಲ್ಲಾ ಸರ್ಕಾರಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 430 ಕೋಟಿ ರು. ಅನುದಾನ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಸುಮಾರು 155 ಕೋಟಿ ರು. ವೆಚ್ಚದಲ್ಲಿ 1.55 ಲಕ್ಷ ಪದವಿ ಹಾಗೂ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದರು.
ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥ್‌ ನಾರಾಯಣ ಮಾತನಾಡಿ, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಮತ್ತಷ್ಟು ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದರೊಂದಿಗೆ ವಿವಿಧ ಕ್ಷೇತ್ರಗಳಲ್ಲಿ 10 ದಶ ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಮಾಡಲಾಗುವುದು ಎಂದು ಹೇಳಿದರು.
ಕೌಶಲ್ಯಾಭಿವೃದ್ಧಿ, ಕೃಷಿ, ತೋಟಗಾರಿಕೆ, ಪ್ರವಾಸೋದ್ಯಮ ಸೇರಿದಂತೆ ಯಾವೆಲ್ಲಾ ಕ್ಷೇತ್ರದಲ್ಲಿ ಎಷ್ಟುಪ್ರಮಾಣದ ಉದ್ಯೋಗ ಸೃಷ್ಟಿಸಬಹುದು ಎಂಬ ಬಗ್ಗೆ ಆಯಾ ಕ್ಷೇತ್ರದ ತಜ್ಞರು ಇಂದಿನ ಚರ್ಚಾಗೋಷ್ಠಿಯಲ್ಲಿ ಸಲಹೆ, ಅಭಿಪ್ರಾಯ ನೀಡಿದ್ದಾರೆ. ಅವರ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಅವರೊಂದಿಗೆ ಮತ್ತೊಂದು ಸುತ್ತಿನ ವಿಸ್ತೃತ ಚರ್ಚೆ ನಡೆಸಲಾಗುವುದು. ಮುಂದಿನ 5 ವರ್ಷದಲ್ಲಿ 10 ದಶಲಕ್ಷ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಉನ್ನತ ಶಿಕ್ಷಣ ವಿಭಾಗಗಳಾದ ಸ್ನಾತಕೋತ್ತರ, ಪದವಿ, ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌, ವೈದ್ಯಕೀಯ, ಜಿಟಿಟಿಸಿ, ಐಟಿಐ ಶಿಕ್ಷಣ ಸಂಸ್ಥೆಗಳಿಂದ 2024-25ರ ಹೊತ್ತಿಗೆ 24 ಲಕ್ಷ ವಿದ್ಯಾರ್ಥಿಗಳು ಹೊರಬರಲಿದ್ದಾರೆ. ಬಿಯಾಂಡ್‌ ಬೆಂಗಳೂರು, ನೂತನ ಐಟಿ ನೀತಿ, ಕರ್ನಾಟಕ ಆವಿಷ್ಕಾರ ಪ್ರಾಧಿಕಾರ, ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌, ಎಎಸ್‌ಡಿಎಂ ನೀತಿ, ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯಿಂದಾಗಿ ಮುಂದಿನ ವರ್ಷಗಳಲ್ಲಿ ಉದ್ಯೋಗ ಸೃಷ್ಟಿದೊಡ್ಡ ಪ್ರಮಾಣದಲ್ಲಿ ಆಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹನ್ನೆರಡು ಮಂದಿ ಯುವ ಸಾಧಕರಿಗೆ ಸನ್ಮಾನ ಮಾಡಿ ಗೌರವಿಸಿದರು. ಯುವಜನ ಮತ್ತು ಸಬಲೀಕರಣ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್‌ನಾಯಕ್‌, ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಡಾ.ಬಿ.ತಿಮ್ಮೇಗೌಡ ಮತ್ತಿತರರು ಉಪಸ್ಥಿತರಿದ್ದರು.

Latest Videos

click me!