ನಾಗ್ಪುರದ ಸ್ಫೋಟಕ ಡಿಟೋನೇಟರ್ ತಯಾರಿಕಾ ಘಟಕದಲ್ಲಿ ಪ್ರಬಲ ಸ್ಫೋಟ: 17 ಸಾವು

Published : Mar 01, 2026, 02:05 PM IST

ನಾಗ್ಪುರದ ಕಟೋಲ್ ತಾಲೂಕಿನಲ್ಲಿರುವ ಸ್ಫೋಟಕ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 17 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಈ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

PREV
16
ಸ್ಫೋಟಕ ತಯಾರಿಕಾ ಘಟಕದಲ್ಲಿ ಸ್ಫೋಟಕ್ಕೆ 17 ಬಲಿ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದ ಸ್ಫೋಟಕ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 17 ಜನರು ಸಾವನ್ನಪ್ಪಿದಂತಹ ಘಟನೆ ಇಂದು ನಡೆದಿದ್ದು, ದುರಂತದಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಇಲ್ಲಿನ ಗ್ರಾಮೀಣ ಕಟೋಲ್ ತಾಲೂಕಿನಲ್ಲಿ ಬರುವ ರವಲ್‌ಗಾಂವ್‌ ಪ್ರದೇಶದಲ್ಲಿ ಇರುವ ಎಸ್‌ಬಿಎಲ್ ಕಂಪನಿ ಎಂಬ ಸಂಸ್ಥೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಲ್ಲಿ ಡಿಟೊನೇಟರ್ ಹಾಗೂ ಸ್ಫೋಟಕ ಸಾಮಗ್ರಿಗಳನ್ನು ತಯಾರಿಸಲಾಗುತ್ತಿತ್ತು. ಈ ಸ್ಫೋಟದ ತೀವ್ರತೆ ಎಷ್ಟು ಜೋರಾಗಿತ್ತು ಎಂದರೆ ಸುತ್ತಮುತ್ತಲ ನಿವಾಸಿಗಳಲ್ಲಿ ಇದು ತೀವ್ರ ಆತಂಕವನ್ನು ಹುಟ್ಟು ಹಾಕಿತ್ತು.

26
ಹಲವು ಗಾಯಾಳುಗಳ ಸ್ಥಿತಿ ಗಂಭೀರ

ಗಾಯಾಳುಗಳನ್ನು ನಾಗ್ಪುರದ ಆರೆಂಜ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಕೆಲವರನ್ನು ತುರ್ತು ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ತಂಡಗಳು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ. ಘಟನೆಯ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ತಂಡಗಳನ್ನು ನಿಯೋಜಿಸಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದರಿಂದ ಅಧಿಕಾರಿಗಳು ಪ್ರದೇಶವನ್ನು ಸುತ್ತುವರೆದಿದ್ದಾರೆ.

36
ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಬೆಳಗ್ಗೆ 7 ರಿಂದ 7.15 ರ ನಡುವೆ ಸ್ಫೋಟ

ಈ ಎಸ್‌ಬಿಎಲ್ ಕಂಪನಿಯ ಪ್ರತಿನಿಧಿಗಳ ಪ್ರಕಾರ, ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಬೆಳಗ್ಗೆ 7 ರಿಂದ 7.15 ರ ನಡುವೆ ಸ್ಫೋಟ ಸಂಭವಿಸಿದೆ. ಗಾಯಗೊಂಡ ಹಲವಾರು ಕಾರ್ಮಿಕರನ್ನು ತಕ್ಷಣ ಚಿಕಿತ್ಸೆಗಾಗಿ ನಾಗ್ಪುರದ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಅಧಿಕಾರಿಗಳು ಹಾನಿಯನ್ನು ನಿರ್ಣಯಿಸಿ ಘಟನೆಯ ಕಾರಣವನ್ನು ತನಿಖೆ ಮಾಡಿದ ನಂತರ ಶೀಘ್ರದಲ್ಲೇ ವಿವರವಾದ ಹೇಳಿಕೆಯನ್ನು ನೀಡಲಾಗುವುದು ಎಂದು ಕಂಪನಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗಳಿಗೆ ತಿಳಿಸಿದ್ದಾರೆ.

46
ಸ್ಥಳದಲ್ಲಿ ಎನ್‌ಡಿಆರ್‌ಎಫ್ ನಿಯೋಜನೆ

ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟ ಹೇಗೆ ಸಂಭವಿಸಿತು ಮತ್ತು ಸ್ಥಳದಲ್ಲಿ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ. ರಕ್ಷಣಾ ಮತ್ತು ಚೇತರಿಕೆ ಕಾರ್ಯಾಚರಣೆಗಳಲ್ಲಿ ಸ್ಥಳೀಯ ಅಧಿಕಾರಿಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ (NDRF) ತಂಡಗಳನ್ನು ಸಹ ಸ್ಥಳದಲ್ಲಿ ನಿಯೋಜಿಸಲಾಗಿದೆ.

56
ಸಿಎಂ ದೇವೇಂದ್ರ ಫಡ್ನವೀಸ್ ಸಂತಾಪ

ಈ ದುರಂತಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸಂತಾಪ ಸೂಚಿಸಿದ್ದಾರೆ. ನಾಗ್ಪುರ ಜಿಲ್ಲೆಯ ರೌಲ್ಗಾಂವ್‌ನಲ್ಲಿರುವ ಸ್ಫೋಟಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದ ಘಟನೆ ಅತ್ಯಂತ ದುರದೃಷ್ಟಕರ ಮತ್ತು ದುರಂತ. ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ತಕ್ಷಣ ಘಟನಾ ಸ್ಥಳಕ್ಕೆ ತಲುಪಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸಹ ಸ್ಥಳದಲ್ಲಿವೆ. ಪೆಸೊ(Petroleum and Explosives Safety Organisation) ಮತ್ತು ಡಿಶ್‌ನ ತಂಡಗಳು ಆಗಮಿಸಿವೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದ್ದು, ಇಲ್ಲಿಯವರೆಗೆ 17 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರಿಗೆ ನಾನು ಹೃತ್ಪೂರ್ವಕ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ಕುಟುಂಬಗಳ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ. ಈ ಘಟನೆಯಲ್ಲಿ 18 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ನಾಗ್ಪುರಕ್ಕೆ ಸ್ಥಳಾಂತರಿಸಲಾಗಿದೆ. ಅವರು ಬೇಗನೆ ಚೇತರಿಸಿಕೊಳ್ಳಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

66
ಕೇಂದ್ರ ಸಚಿವ ನಿತಿನ್ ಗಡ್ಕರಿ ಸಂತಾಪ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೂಡ ಎಕ್ಸ್‌ನಲ್ಲಿ ಘಟನೆಗೆ ಶೋಕ ವ್ಯಕ್ತಪಡಿಸಿದ್ದಾರೆ. ನಾಗ್ಪುರ ಜಿಲ್ಲೆಯ ಕಟೋಲ್‌ನ ರೌತ್‌ಲ್‌ಗಾವ್ ಗ್ರಾಮದಲ್ಲಿರುವ ಸ್ಫೋಟಕ ತಯಾರಿಕಾ ಕಂಪನಿಯಾದ ಎಸ್‌ಬಿಎಲ್ ಎನರ್ಜಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 17 ಕಾರ್ಮಿಕರು ಸಾವನ್ನಪ್ಪಿದ ದುರಂತ ಮತ್ತು ದುರದೃಷ್ಟಕರ ಘಟನೆ ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತ ಕಾರ್ಮಿಕರಿಗೆ ನನ್ನ ಹೃತ್ಪೂರ್ವಕ ಶ್ರದ್ಧಾಂಜಲಿ. ಅವರ ಕುಟುಂಬಗಳಿಗೆ ನನ್ನ ಸಂತಾಪಗಳು, ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಅವರು ಟ್ವಿಟ್ ಮಾಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories