13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಸದ್ಯ 11 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ 7 ಗೆಲುವು ಹಾಗೂ 4 ಸೋಲುಗಳೊಂದಿಗೆ 14 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿದೆ.
ಹೀಗಿದ್ದೂ ಮುಂಬೈ ಇಂಡಿಯನ್ಸ್ ತಂಡ ತಮ್ಮ ಪ್ಲೇ ಅಫ್ ಸ್ಥಾನವನ್ನು ಖಚಿತಪಡಿಸಿಕೊಂಡಿಲ್ಲ. ಅದರಲ್ಲೂ ರಾಜಸ್ಥಾನ ರಾಯಲ್ಸ್ ಎದುರು ಮುಂಬೈ ಇಂಡಿಯನ್ಸ್ 8 ವಿಕೆಟ್ ಅಂತರದ ಆಘಾತಕಾರಿ ಸೋಲು ಕಂಡಿದೆ.
ಇದೀಗ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ಬಹುತೇಕ ಹೊರಬಿದ್ದಿದ್ದಾರೆ.
ಕಾಲಿನ ಸ್ನಾಯು ನೋವಿನಿಂದ ಬಳಲುತ್ತಿದ್ದು, ಸಂಪೂರ್ಣ ಫಿಟ್ ಆಗಲು ಸಾಕಷ್ಟು ಕಸರತ್ತು ನಡೆಸುತ್ತಿದ್ದು, ಸದ್ಯದಲ್ಲೇ ತಂಡ ಕೂಡಿಕೊಳ್ಳಲಿದ್ದಾರೆ ಎಂದು ತಂಡದ ಮೂಲಗಳು ಎಎನ್‌ಐ ಸುದ್ದಿಸಂಸ್ಥೆಗೆ ಖಚಿತ ಪಡಿಸಿವೆ.
ಅಕ್ಟೋಬರ್ 18ರಂದು ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ನಡೆದ 2 ಸೂಪರ್ ಓವರ್ ಪಂದ್ಯಾವಳಿ ವೇಳೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು.
ಚೆನ್ನೈ ವಿರುದ್ದ 10 ವಿಕೆಟ್‌ಗಳ ಜಯ ಸಾಧಿಸಿದ್ದ ಮುಂಬೈ ಇಂಡಿಯನ್ಸ್ ಆ ಬಳಿಕ ರಾಜಸ್ಥಾನ ರಾಯಲ್ಸ್ ಎದುರು 8 ವಿಕೆಟ್‌ಗಳ ಆಘಾತಕಾರಿ ಸೋಲು ಕಂಡಿತ್ತು.
ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ರೋಹಿತ್ ಶರ್ಮಾ ಅನುಪಸ್ಥಿತಿ ಹಾಗೂ ಅನುಭವ ಮುಂಬೈ ಇಂಡಿಯನ್ಸ್ ತಂಡವನ್ನು ಕಾಡುವ ಸಾಧ್ಯತೆಯಿದೆ.