ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಂದು ಬೆಳಗಿನ ಜಾವ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ನಿಂತಿದ್ದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಇಡೀ ವಾಹನವನ್ನು ಆವರಿಸಿಕೊಂಡ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ
ಶಿವಮೊಗ್ಗದ ರೈಲ್ವೆ ಸ್ಟೇಷನ್‌ನ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಲಾರಿಯಲ್ಲಿ ಇಂದು ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಬಿದ್ ಎಂಬುವವರಿಗೆ ಸೇರಿದ 'ಎಸ್ ಕೆ ಪಿ' (SKP) ಹೆಸರಿನ ಈ ಲಾರಿಯು, ರೈಲ್ವೆ ಗೂಡ್ಸ್ ಮೂಲಕ ಬರುವ ಗೊಬ್ಬರವನ್ನು ಸಾಗಾಣಿಕೆ ಮಾಡಲು ಅಲ್ಲಿ ಸಜ್ಜಾಗಿ ನಿಂತಿತ್ತು.
24
ಶಾರ್ಟ್ ಸರ್ಕ್ಯೂಟ್‌ನಿಂದಲೇ ಈ ಅಗ್ನಿ ಅವಘಡ
ಮೊದಲು ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಕ್ಲೀನರ್ ತಕ್ಷಣವೇ ಎಚ್ಚೆತ್ತುಕೊಂಡು ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಲೇ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಲಾರಿಯ ಮುಂಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ.
34
ಅಗ್ನಿಶಾಮಕ ದಳದ ಸಮಯಪ್ರಜ್ಞೆ
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಪಕ್ಕದಲ್ಲೇ ಇದ್ದ ಇತರ ವಾಹನಗಳಿಗೆ ಹಾಗೂ ಗೂಡ್ಸ್ ಶೆಡ್‌ನಲ್ಲಿದ್ದ ಸರಕುಗಳಿಗೆ ಬೆಂಕಿ ವ್ಯಾಪಿಸುವುದು ತಪ್ಪಿದಂತಾಗಿದೆ.
ಈ ಘಟನೆ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ