ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಹೊರಡಿಸಿದೆ. ಜನಸಂಖ್ಯೆ ಆಧಾರದ ಮೇಲೆ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ಮೀಸಲಾತಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಹಿನ್ನಲೆಯಲ್ಲಿ, ವಾರ್ಡ್ ವಾರು ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
ಕಳೆದ ಡಿಸೆಂಬರ್ 19ರಂದು ರಾಜ್ಯ ಸರ್ಕಾರ, ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿ, ಅದರಂತೆ ಮೀಸಲಾತಿ ಪಟ್ಟಿ ಸಿದ್ಧಪಡಿಸುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿತ್ತು. ಸರ್ಕಾರದ ಸೂಚನೆಯಂತೆ ಈಗಾಗಲೇ ಪ್ರತಿ ವಾರ್ಡ್‌ನ ಜನಸಂಖ್ಯೆ ಆಧಾರದಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಮಹಿಳಾ ಮೀಸಲಾತಿಯನ್ನು ಒಳಗೊಂಡ ಕರಡು ಪಟ್ಟಿ ಸಿದ್ಧಪಡಿಸಲಾಗಿದೆ.
28
ಸುಪ್ರೀಂ ಕೋರ್ಟ್ ವಿಚಾರಣೆ ಹಿನ್ನೆಲೆ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಜ.12ರ ಸೋಮವಾರ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆ, ವಾರ್ಡ್‌ಗಳಿಗೆ ನಿಗದಿಪಡಿಸಿರುವ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ಸಲ್ಲಿಸುವ ಅಗತ್ಯವಿರುವುದರಿಂದ, ರಾಜ್ಯ ಸರ್ಕಾರವು ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ. ನಗರಾಭಿವೃದ್ಧಿ ಇಲಾಖೆ ವಾರ್ಡ್ ವಾರು ಕರಡು ಮೀಸಲಾತಿ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.
ಮಹಿಳಾ ಮೀಸಲಾತಿ
ಪ್ರಕಟಿಸಿರುವ ಕರಡು ಪಟ್ಟಿಯಲ್ಲಿ ಒಟ್ಟು ವಾರ್ಡ್‌ಗಳ ಶೇ.50 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಸಾಮಾನ್ಯ ವರ್ಗಗಳಲ್ಲಿಯೂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರ ಪ್ರಕಟಿಸಿರುವ ಈ ಕರಡು ಮೀಸಲಾತಿ ಪಟ್ಟಿ ಮುಂದಿನ ದಿನಗಳಲ್ಲಿ ಸಾರ್ವಜನಿಕ ಆಕ್ಷೇಪಣೆ ಮತ್ತು ಸಲಹೆಗಳ ಬಳಿಕ ಅಂತಿಮಗೊಳ್ಳುವ ಸಾಧ್ಯತೆ ಇದೆ. ನಗರ ಪಾಲಿಕೆ ಚುನಾವಣೆ ಪ್ರಕ್ರಿಯೆಗೆ ಈ ಮೀಸಲಾತಿ ಪ್ರಮುಖ ಹಂತವಾಗಿದ್ದು, ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.