ಮಂಡ್ಯ ಅಪಘಾತ: ಕೆ.ಎಂ.ದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ!

Published : Dec 24, 2025, 12:06 PM IST

ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸಿಮೆಂಟ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಲಾರಿ ಹಳ್ಳಕ್ಕೆ ಉರುಳಿದ್ದು, ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

PREV
14
ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸಿಮೆಂಟ್ ಲಾರಿ ನಡುವೆ ಡಿಕ್ಕಿ

ಮಂಡ್ಯ (ಡಿ.24): ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಹನುಮಂತನಗರದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸಿಮೆಂಟ್ ಲಾರಿ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಸಿಮೆಂಟ್ ಹೊತ್ತೊಯ್ಯುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ.

24
ಘಟನೆಯ ವಿವರ

ಬುಧವಾರ ಮಂಡ್ಯದಿಂದ ಕೆ.ಎಂ.ದೊಡ್ಡಿ ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತಿತ್ತು. ಇದೇ ವೇಳೆ ಕೆ.ಎಂ.ದೊಡ್ಡಿಯಿಂದ ಮಂಡ್ಯ ಕಡೆಗೆ ಸಿಮೆಂಟ್ ಮೂಟೆಗಳನ್ನು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಲಾರಿಯು ಹನುಮಂತನಗರದ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ತಕ್ಷಣ ಲಾರಿಯು ಪಕ್ಕದಲ್ಲಿದ್ದ ಆಳವಾದ ಹಳ್ಳಕ್ಕೆ ಉರುಳಿ ಬಿದ್ದಿದೆ.

34
ಅದೃಷ್ಟವಶಾತ್ ತಪ್ಪಿದ ಅನಾಹುತ

ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಡಿಕ್ಕಿ ಸಂಭವಿಸುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿ ಕೂಗಾಡಿದ್ದಾರೆ. ಆದರೆ, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಿಯಂತ್ರಣಕ್ಕೆ ಬಂದಿದ್ದು, ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಲಾರಿ ಚಾಲಕ ಹಾಗೂ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

44
ಟ್ರಾಫಿಕ್ ಜಾಂ ಮತ್ತು ಪೊಲೀಸ್ ಭೇಟಿ

ಅಪಘಾತದಿಂದಾಗಿ ಮಂಡ್ಯ-ಕೆಎಂ ದೊಡ್ಡಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಎಂ.ದೊಡ್ಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಳ್ಳಕ್ಕೆ ಬಿದ್ದ ಲಾರಿಯನ್ನು ಕ್ರೇನ್ ಮೂಲಕ ಮೇಲೆತ್ತುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆಯ ಈ ತಿರುವು ಅತ್ಯಂತ ಅಪಾಯಕಾರಿಯಾಗಿದ್ದು, ಚಾಲಕರು ಎಚ್ಚರಿಕೆಯಿಂದ ಸಂಚರಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

Read more Photos on
click me!

Recommended Stories