ನಬಾರ್ಡ್ ಯೋಜನೆಯಡಿ 25 ಕೋಟಿ ಅನುದಾನದಲ್ಲಿ ನಡೆಯಲಿರುವ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಶೈಕ್ಷಣಿಕ ರಂಗ ಸದೃಢವಾಗಬೇಕು. ಮಕ್ಕಳು ವಿದ್ಯಾವಂತರಾಗಬೇಕು. ಈ ನಿಟ್ಟಿನಲ್ಲಿ ಶಾಲೆಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂಗವಾಗಿ ನವಲಗುಂದ ಕ್ಷೇತ್ರದ 201 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಏಕಕಾಲಕ್ಕೆ ಚಾಲನೆ ನೀಡಲಾಗಿದೆ. ಇದು ಉತ್ತಮ ಬೆಳವಣಿಗೆ ಎಂದರು.
ನಮ್ಮ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗುತ್ತಿವೆ ಎಂದ ಅವರು, ಈ ಯೋಜನೆಯಡಿ ಎಲ್ಲ ಕೊಠಡಿಗಳನ್ನು ಸುಸಜ್ಜಿತ ಹಾಗೂ ಸುರಕ್ಷಿತವಾಗಿ ನಿರ್ಮಾಣ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರ ಬಂದಾಗಿನಿಂದಾಗಿ ಸಾಕಷ್ಟುಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮಲಪ್ರಭಾ ನದಿಯಿಂದ ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರು ಪೂರೈಕೆಯ ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
ಈ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚಿಸಿ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಇನ್ನು ಪ್ರತಿವರ್ಷ ನವಲಗುಂದ ತಾಲೂಕು ತುಪರಿಹಳ್ಳ- ಬೆಣ್ಣಿಹಳ್ಳದ ಪ್ರವಾಹದಿಂದ ತತ್ತರಿಸುತ್ತಿದೆ. ಇದಕ್ಕೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪರಮಶಿವಯ್ಯ ಸಮಿತಿಯನ್ನು ರಚಿಸಲಾಗಿತ್ತು. ಅದರ ವರದಿ ಆಧರಿಸಿ ಯೋಜನೆ ಸಿದ್ಧಪಡಿಸಲಾಗುತ್ತಿದೆ. ಇದಕ್ಕಾಗಿ ಸದ್ಯ ಸಮೀಕ್ಷೆಯೂ ನಡೆಯುತ್ತಿದೆ. ಈ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಬಡ ರೈತ ಕುಟುಂಬದ ಮಕ್ಕಳಿಗೆ ಶಿಕ್ಷಣ ಸಿಗಬೇಕು. ಮಕ್ಕಳು ಈ ದೇಶದ ಭವಿಷ್ಯ. ಅವರಿಗೆ ಸರಿಯಾದ ರೀತಿ ಶೈಕ್ಷಣಿಕ ಸೌಲಭ್ಯ ಕಲ್ಪಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಸದ್ಯ 201 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಆರು ತಿಂಗಳಲ್ಲಿ 201 ಕೊಠಡಿಗಳ ನಿರ್ಮಾಣ ಪೂರ್ಣಗೊಳಿಸಬೇಕೆಂಬ ಪಣ ತೊಟ್ಟಿದ್ದೇವೆ ಎಂದರು.
ಇಂಗಳಹಳ್ಳಿ ಶಾಲೆಯಲ್ಲೇ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು ವಿಶೇಷ. ಏಕೆಂದರೆ ಈ ಶಾಲೆ 125 ವರ್ಷಗಳ ಇತಿಹಾಸ ಹೊಂದಿದೆ. ಮುರುಘಾಮಠದ ಮೃತ್ಯುಂಜಯ ಶ್ರೀಗಳು ಕಲಿತಿರುವ ಶಾಲೆಯಿದು. ಈ ಹಿಂದೆ ಶಾಲೆಗೆ ಬಂದಾಗ ಗ್ರಾಮಸ್ಥರು ಶಾಲಾ ಕಟ್ಟಡ ನಿರ್ಮಿಸುವಂತೆ ಮನವಿ ಮಾಡಿದ್ದರು. ಅದರಂತೆ ಇದೀಗ ಶಾಲಾ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದರು.