ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಹೇಳಲಾಗಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ನಾಲ್ವರು ಗಾಯಗೊಂಡಿದ್ದಾರೆ. ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್‌ಗಳು ಅಪಘಾತಗೊಳಗಾಗುತ್ತಿದ್ದಂತೆ ವಾಹನಗಳಲ್ಲಿದ್ದ ಜನರನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
24
ಕಾರ್‌ಗಳ ನಡುವೆ ಮುಖಾಮುಖಿ ಡಿಕ್ಕಿ
ಕೊಪ್ಪದತ್ತ ಪ್ರಯಾಣಿಸುತ್ತಿದ್ದ ಕಾರು ಹಾಗೂ ಶಿರಸಿಯತ್ತ ತೆರಳುತ್ತಿದ್ದ ಮಾರುತಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ. ಈ ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ನುಜ್ಜುಗುಜ್ಜಾಗಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
34
ಗಾಯಾಳುಗಳು ಶಿವಮೊಗ್ಗ ಆಸ್ಪತ್ರೆಗೆ ರವಾನೆ
ಪ್ರಾಥಮಿಕ ಚಿಕಿತ್ಸೆ ಬಳಿಕ ಗಾಯಾಳುಗಳನ್ನ ಶಿವಮೊಗ್ಗದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತಕ್ಕೀಡಾದ ಮಾರುತಿ ಅಲ್ಟೋ ಕಾರು ಹೊಸನಗರ ತಾಲೂಕಿನ ಹಿಂಡ್ಲೆಮನೆ ಗ್ರಾಮ ದವರಿಗೆ ಸೇರಿದ್ದು, ಐ20 ಕಾರು ಶಿರಸಿ ಮೂಲದವರದ್ದು ಎಂದು ತಿಳಿದು ಬಂದಿದೆ.
ವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೊಳಗಾದ ವಾಹನಗಳನ್ನು ಶಿಫ್ಟ್ ಮಾಡಲಾಗುತ್ತಿದೆ. ಜನಸಂದಣಿಯುಳ್ಳ ಸ್ಥಳದಲ್ಲಿ ಅಪಘಾತ ಸಂಭವಿಸಿದ್ದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು.