ಬೆಂಗಳೂರು (ಮಾ.15): ಬಿಜೆಪಿಯ ಮೊದಲ ಪಟ್ಟಿಯಲ್ಲಿ ಆರು ಮಂದಿ ಹಾಲಿ ಸಂಸದರಿಗೆ ಟಿಕೆಟ್ ಸಿಕ್ಕಿಲ್ಲ. ಎರಡನೇ ಪಟ್ಟಿ ಬಾಕಿ ಇದೆ. ಇನ್ನೂ ಯಾರ್‍ಯಾರಿಗೆ ಟಿಕೆಟ್ ಕೈತಪ್ಪಲಿದೆ ಕಾದು ನೋಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಗುರುವಾರ ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯಲ್ಲಿ 10 ಮಂದಿ ಹಾಲಿ ಸಂಸದರಿಗೆ ಟಿಕೆಟ್ ಸಿಗೋದಿಲ್ಲ ಅಂತ ನಾನು ಮೊದಲೇ ಹೇಳಿದ್ದೆ. ಈಗ ಅವರು 20 ಕ್ಷೇತ್ರಗಳಿಗೆ ಬಿಡುಗಡೆ ಮಾಡಿರುವ ರಾಜ್ಯದ ಮೊದಲ ಪಟ್ಟಿಯಲ್ಲಿ ಆರು ಸಂಸದರಿಗೆ ಟಿಕೆಟ್ ಸಿಕ್ಕಿಲ್ಲ.
ಎರಡನೇ ಪಟ್ಟಿಯಲ್ಲಿ ಯಾರ್‍ಯಾರು ಟಿಕೆಟ್ ವಂಚಿತರಾಗುತ್ತಾರೆ ಕಾದು ನೋಡಿ ಎಂದರು. ಬಿಜೆಪಿಯಲ್ಲಿ ಟಿಕೆಟ್ ಸಿಗದವರು ಕಾಂಗ್ರೆಸ್‌ಗೆ ಬಂದರೆ ಸೇರಿಸಿಕೊಳ್ಳುವಿರಾ ಎಂಬ ಪ್ರಶ್ನೆಗೆ, ಯಾರು ಪಕ್ಷಕ್ಕೆ ಬರುತ್ತಾರೆ ಎನ್ನುವುದನ್ನು ಈಗಲೇ ಚರ್ಚೆ ಮಾಡುವುದಿಲ್ಲ. ಪಕ್ಷಕ್ಕೆ ಬರುವವರನ್ನು ಸ್ವಾಗತಿಸುತ್ತೇವೆ ಎಂದರು.
ಕಾಂಗ್ರೆಸ್ ಚುನಾವಣಾ ಸಭೆ ಮುಂದಕ್ಕೆ: ಲೋಕಸಭಾ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ಮಾ.15ರಂದು ನಿಗದಿಯಾಗಿದ್ದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಕಾರಣಾಂತರಗಳಿಂದ ಮುಂದೂಡಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸದ್ಯಕ್ಕೆ ದೆಹಲಿಗೆ ತೆರಳುತ್ತಿಲ್ಲ. ಚುನಾವಣಾ ಸಮಿತಿ ಸಭೆಗೆ ಹೈಕಮಾಂಡ್ ಹೊಸ ದಿನಾಂಕ ನಿಗದಿಪಡಿಸಿ ಬುಲಾವ್ ನೀಡಿದ ಬಳಿಕ ಇಬ್ಬರೂ ನಾಯಕರು ದೆಹಲಿಗೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.