ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಬುಧವಾರ) ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪಕ್ಕೆ ಭೂಮಿ ಪೂಜೆನೆರವೇರಿಸಿದರು.
ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಅನುಭವ ಮಂಟಪದ ಭೂಮಿ ಪೂಜೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಸೌಲಭ್ಯ. ಇದು ನನ್ನ ಪೂರ್ವ ಜನ್ಮದ ಪುಣ್ಯದಿಂದ ಪಾಪ್ತವಾಗಿದೆ ಎಂದು ಖುಷಿ ಹಂಚಿಕೊಂಡರು.
2 ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಈ ಅನುಭವ ಮಂಟಪ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಲಾಗುವುದು ಎಂದು ತಿಳಿಸಿದರು.
ಅನುಭವ ಮಂಟಪಕ್ಕೆ ಈಗಾಗಲೇ 100 ಕೋಟಿ ರೂ.ಮಂಜೂರು ಮಾಡಲಾಗಿದೆ. ಒಂದು ವಾರದಲ್ಲಿ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇನ್ನೂ ನಾಲ್ಕೈದು ದಿನಗಳಲ್ಲಿ ಇನ್ನೂ ನೂರು ಕೋಟಿ ರೂಪಾಯಿ ಬಿಡುಗಡೆ ಮಾಡುತ್ತೇನೆ ಎಂದರು.
ಅಲ್ಲದೇ ಎಷ್ಟು ಖರ್ಚಾದರೂ ಸರಿ, ಇಲ್ಲಿ ಏನೇನು ಕೆಲಸ ಆಗಬೇಕೋ ಅದನ್ನೆಲ್ಲ ಮಾಡಲಾಗುವುದು ಎಂದು ಭರವಸೆ ನೀಡಿದರು.
ಬಸವಕಲ್ಯಾಣದಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಿದ್ರು.
ಸಿಎಂ ಯಡಿಯೂರಪ್ಪ ಅವರ ಜೊತೆ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಕೆ.ಸುಧಾಕರ, ಪ್ರಭು ಚೌಹಾಣ್, ಎಂಪಿ ಭಗವಂತ ಖೂಬಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಪೂಜ್ಯ ಬಸವಲಿಂಗ ಪಟ್ಟದ್ದೆವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.