ಮನ್ನಾರ್ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಅಕ್ಟೋಬರ್ 9ರಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ಕರಾವಳಿಯ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು (ಅ.07): ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದರೂ, ಮನ್ನಾರ್ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪಟ್ಟಿ ಹಾಗೂ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಚಟುವಟಿಕೆಗಳು ಮುಂದುವರಿಯಲಿವೆ. ಪ್ರಮುಖವಾಗಿ ಅಕ್ಟೋಬರ್ 9ರಂದು ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಆಯ್ದ 5 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.
25
ಅಕ್ಟೋಬರ್ 9ಕ್ಕೆ ಭಾರಿ ಮಳೆ ಎಚ್ಚರಿಕೆ:
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಅಕ್ಟೋಬರ್ 09 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ತುಮಕೂರು, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 7 ರಿಂದ 10 ರವರೆಗೆ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು-ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದೆ.
35
ಮುಂದಿನ 7 ದಿನಗಳ ಹವಾಮಾನ ಹೇಗಿರಲಿದೆ?
ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ.
ಉತ್ತರ ಒಳನಾಡು: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಂಪೂರ್ಣವಾಗಿ ಒಣಹವೆ ಇರುವ ಸಾಧ್ಯತೆಯಿದೆ.
ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ಟೋಬರ್ 7 ಮತ್ತು 8 ರಂದು ಸಾಧಾರಣ ಮಳೆಯಾಗಲಿದ್ದು, ಅಕ್ಟೋಬರ್ 9 ರಂದು ತೀವ್ರತೆ ಹೆಚ್ಚಾಗಲಿದೆ. ಈ 5 ಜಿಲ್ಲೆಗಳಿಗೆ ಅ.9ರಂದು ಭಾರೀ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
55
ಬೆಂಗಳೂರು ನಗರಕ್ಕೆ ಬಳೆ ಅಲರ್ಟ್
ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಭಾರೀ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರದ ಮುಖ್ಯಸ್ಥರಾದ ಡಾ. ಎನ್. ಪುವಿಯರಸನ್ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೊಡಗಿನ ನಾಪೋಕ್ಲುವಿನಲ್ಲಿ 4 ಸೆಂ.ಮೀ, ಚಾಮರಾಜನಗರದ ಬೇಗೂರಿನಲ್ಲಿ 3 ಸೆಂ.ಮೀ, ಶ್ರೀಮಂಗಲದಲ್ಲಿ 3 ಸೆಂ.ಮೀ ಹಾಗೂ ಕಳಸ, ಹುಡಿಕೇರಿ, ಸಂಪಾಜೆಯಲ್ಲಿ ತಲಾ 2 ಸೆಂ.ಮೀ ಮಳೆ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ