ಕರ್ನಾಟಕ ಹವಾಮಾನದಲ್ಲಿ ದಿಢೀರ್ ಬದಲಾವಣೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್, ಈ ಭಾಗದ ಜನರಿಗೆ ಹೈ-ಅಲರ್ಟ್!

Published : May 22, 2026, 01:40 PM IST

ಭಾರತೀಯ ಹವಾಮಾನ ಇಲಾಖೆಯು ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು, ಸಿಡಿಲು ಹಾಗೂ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

PREV
15

ಬೆಂಗಳೂರು (ಮೇ 22): ರಾಜ್ಯದಲ್ಲಿ ಮುಂಗಾರು ಪೂರ್ವ ಮಾರುತಗಳು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರವು ಮೇ 22 ರಿಂದ ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮಾಲ್ಡೀವ್ಸ್ ಮತ್ತು ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಮುನ್ನಡೆಯಲು ಪೂರಕ ವಾತಾವರಣವಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು, ಸಿಡಿಲು ಹಾಗೂ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರದ ಮುಖ್ಯಸ್ಥರಾದ ಡಾ. ಎನ್. ಪುವಿಯರಸನ್ ತಿಳಿಸಿದ್ದಾರೆ.

25

ಜಿಲ್ಲಾವಾರು ಮಳೆ ಮುನ್ಸೂಚನೆ ಮತ್ತು ಎಚ್ಚರಿಕೆ (ಮೇ 22, 2026)

ಉತ್ತರ ಒಳನಾಡು: ಬೆಳಗಾವಿ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದೆ. ವಿಜಯಪುರ, ರಾಯಚೂರು, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

35

ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ತೀವ್ರ ಗಾಳಿ (50-60 Kmph) ಬೀಸುವ ಮುನ್ಸೂಚನೆ ನೀಡಲಾಗಿದೆ. ತುಮಕೂರು, ಬಳ್ಳಾರಿ, ವಿಜಯನಗರ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮಂಡ್ಯ, ರಾಮನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕರಾವಳಿ ಕರ್ನಾಟಕ: ಉತ್ತರಾ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೇ 22 ರಿಂದ ಮೇ 26 ರವರೆಗೆ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

45

ಮುಂದಿನ ದಿನಗಳ ಹವಾಮಾನದ ಹಾದಿ (ಮೇ 23 - ಮೇ 28)

ಮೇ 23 ರಂದು ಬಾಗಲಕೋಟೆ, ಕೊಪ್ಪಳ, ವಿಜಯಪುರ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಮೇ 24 ರಂದು ತುಮಕೂರು, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ. ಮೇ 25 ಮತ್ತು 26 ರಂದು ಮಳೆಯ ತೀವ್ರತೆ ಕೊಂಚ ಕಡಿಮೆಯಾಗಲಿದ್ದರೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ಮೇ 27 ಮತ್ತು 28 ರಂದು ಕರಾವಳಿಯ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದೆ.

ರಾಜ್ಯದ ಗರಿಷ್ಠ ತಾಪಮಾನದಲ್ಲಿ ಮುಂದಿನ 5 ದಿನಗಳವರೆಗೆ ಯಾವುದೇ ಪ್ರಮುಖ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

55

ಸಿಲಿಕಾನ್ ಸಿಟಿ ಬೆಂಗಳೂರಿನ ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಸಂಪೂರ್ಣವಾಗಿ ಮೋಡ ಮುಚ್ಚಿಕೊಳ್ಳಲಿದೆ. ನಗರದ ಕೆಲವು ಭಾಗಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 33°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ.

ಮುಂದಿನ 48 ಗಂಟೆಗಳ ಅವಧಿಯಲ್ಲೂ ಸಾಧಾರಣ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ತಾಪಮಾನವು 34°C (ಗರಿಷ್ಠ) ಹಾಗೂ 21°C (ಕನಿಷ್ಠ) ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories