ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತಮನ್ನಾ ಆಯ್ಕೆ ವಿವಾದ: ಕರವೇ ನಾರಾಯಣ ಗೌಡ ಕೆಂಡಾಮಂಡಲ

Published : May 23, 2025, 10:01 AM ISTUpdated : May 23, 2025, 10:03 AM IST

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಆಯ್ಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. 6.2 ಕೋಟಿ ರೂಪಾಯಿ ವೆಚ್ಚದ ಈ ನೇಮಕಾತಿಯನ್ನು ಅವಿವೇಕದ, ಅಸಂಬದ್ಧ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಟೀಕಿಸಿದ್ದಾರೆ. ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ಎಂದು ಅಸಮಾಧಾನ ವ್ಯಕ್ತವಾಗಿದೆ.

PREV
16
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತಮನ್ನಾ ಆಯ್ಕೆ ವಿವಾದ: ಕರವೇ  ನಾರಾಯಣ ಗೌಡ  ಕೆಂಡಾಮಂಡಲ

ಮೈಸೂರು  ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಆಯ್ಕೆಗೆ ವ್ಯಾಪಕ ಪರ ವಿರೋಧ ಚರ್ಚೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಯುವ ಕರ್ನಾಟಕ ವೇದಿಕೆ  ಪ್ರತಿಭಟನೆ ಹಾದಿ ಹಿಡಿದಿದೆ. ರೂಪೇಶ್ ರಾಜಣ್ಣ ನೇತೃತ್ವದ ಯುವ ಕರ್ನಾಟಕ ಸಂಘಟನೆಯಿಂದ ಇಂದು ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಅಧ್ಯಕ್ಷರ ಭೇಟಿಗೆ ನಿರ್ಧರಿಸಿದೆ. ಭೇಟಿಗೂ ಮುನ್ನ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಅಲ್ಲಿ ಉಗ್ರ ಪ್ರತಿಭಟನೆ ನಡೆಸಲಿದ್ದು, ನೂರಾರು ಕನ್ನಡ  ಪರ ಹೋರಾಟಗಾರರಿಂದ ಘೇರಾವ್. ಇನ್ನು ತಮನ್ನಾ ರಾಯಭಾರಿ ಆದ್ರೆ ಬಾಯ್ಕಾಟ್ ಅಸ್ತ್ರಕ್ಕೆ ಗ್ರಾಹಕರು ಮುಂದಾಗಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್ ಕೊಳ್ಳಲ್ಲ ಅಂತ ಗ್ರಾಹಕರು ಬಾಯ್ಕಾಟ್ ಸ್ಯಾಂಡಲ್ ಸೋಪ್ ಅಭಿಯಾನ ಶುರು ಮಾಡಿದ್ದಾರೆ. ತಮನ್ನಾ ರಾಯಭಾರಿ ಆಯ್ಕೆ ವಿಚಾರ  ಪರ - ವಿರೋಧಕ್ಕೆ ಕಾರಣವಾಗಿದೆ.

26

ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನ ಎಂದು ಸಾಮಾಜಿಕ ಜಾಲತಾಣದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

36

 ಮೈಸೂರು ಸೋಪ್ಸ್ ಸಂಸ್ಥೆ  ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿ. 1916ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದರು. ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತೆ?  ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಇನ್ನಷ್ಟು ಆಕ್ಷೇಪಾರ್ಹವಾಗಿದೆ. ಈ ನಿರ್ಧಾರದ ವಿರುದ್ಧ ನಮ್ಮ ತೀವ್ರ ವಿರೋಧವನ್ನು ಈ ಮೂಲಕ ದಾಖಲಿಸುತ್ತೇವೆ ಎಂದು ನಾರಾಯಣ ಗೌಡ ಹೇಳಿದ್ದಾರೆ.

46

ಸರ್ಕಾರವು 6.20 ಕೋಟಿ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ, ಉದಾಹರಣೆಗೆ ಶಿಕ್ಷಣ, ಆರೋಗ್ಯ, ಅಥವಾ ಉದ್ಯೋಗ ಸೃಷ್ಟಿಗೆ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯ. ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಕರ್ನಾಟಕದ ಸಾಂಸ್ಕೃತಿಕ ಗುರುತನ್ನು ಪ್ರತಿನಿಧಿಸುವ ಕಂಪನಿಯು ಸ್ಥಳೀಯ ಪ್ರತಿಭೆಗಳಿಗೆ ಮೊದಲ ಆದ್ಯತೆ ನೀಡಬೇಕಿತ್ತು ಎಂದು ಆಗ್ರಹಿಸಿದ್ದಾರೆ.

56

ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಪ್ರಾಥಮಿಕ ಗ್ರಾಹಕರು ಕರ್ನಾಟಕದ ಕನ್ನಡಿಗರಾಗಿದ್ದಾರೆ. ಕನ್ನಡಿಗರಿಗೆ ತಮ್ಮ ಸಂಸ್ಕೃತಿ ಮತ್ತು ಭಾಷೆಯೊಂದಿಗೆ ಸಾವಯವ ಸಂಬಂಧವಿರುವ ಕನ್ನಡ ನಟಿಯರೊಂದಿಗೆ ಬ್ರಾಂಡ್ ಅನ್ನು ಬೆಳೆಸುವುದು ಸಹಜವಾಗಿ ಪರಿಣಾಮಕಾರಿಯಾಗಿರುತ್ತದೆ.ಆದರೆ ತಮನ್ನಾ ಭಾಟಿಯಾ ಅವರಂತಹ ಬಾಲಿವುಡ್ ನಟಿಯನ್ನು ಆಯ್ಕೆ ಮಾಡುವ ಮೂಲಕ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮತ್ತು ಸ್ಥಳೀಯ ಮಾರುಕಟ್ಟೆಯ ಸಂವೇದನೆಗೆ ಗೌರವ ನೀಡದಿರುವುದು ಆಕ್ಷೇಪಾರ್ಹವಾಗಿದೆ. ತಮನ್ನಾ ಭಾಟಿಯಾ ಅವರು ಕರ್ನಾಟಕದ ಸಂಸ್ಕೃತಿ, ಭಾಷೆ, ಅಥವಾ ಮೈಸೂರು ಸೋಪ್ಸ್‌ನ ಇತಿಹಾಸದೊಂದಿಗೆ ಯಾವುದೇ ನೇರ ಸಂಬಂಧ ಹೊಂದಿಲ್ಲ. ಇಂತಹ ಸ್ಥಿತಿಯಲ್ಲಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡುವುದು ಸಂಪೂರ್ಣವಾಗಿ ಅಪ್ರಸ್ತುತವಾಗಿದೆ. ಹಿಂದಿ ಚಿತ್ರರಂಗದ ನಟಿಯರನ್ನು ಆಯ್ಕೆ ಮಾಡುವ ಮೂಲಕ ಕರ್ನಾಟಕದ ಸ್ಥಳೀಯ ಸಂಸ್ಕೃತಿಯ ಮೇಲೆ ಹಿಂದಿ ಸಂಸ್ಕೃತಿಯನ್ನು ಹೇರಲು ಪ್ರಯತ್ನಿಸುವುದು ಕರ್ನಾಟಕ ರಕ್ಷಣಾ ವೇದಿಕೆಗೆ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.
 

66

ಮೈಸೂರು ಸೋಪ್ಸ್‌ನಂತಹ ಕರ್ನಾಟಕದ ಐತಿಹಾಸಿಕ ಬ್ರಾಂಡ್ ಕನ್ನಡಿಗರ ಗುರುತನ್ನು ಪ್ರತಿನಿಧಿಸುವ ವ್ಯಕ್ತಿಯನ್ನೇ ಆಯ್ಕೆ ಮಾಡಬೇಕು. ಸರ್ಕಾರ ಕೂಡಲೇ ತಮನ್ನಾ ಭಾಟಿಯಾ ಅವರ ಬ್ರಾಂಡ್ ಅಂಬಾಸಿಡರ್ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು. ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಕನ್ನಡ ನಟಿಯರನ್ನು ಆಯ್ಕೆ ಮಾಡಬೇಕು.  ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ವೆಚ್ಚದ ಬಗ್ಗೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು ಮತ್ತು ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ ಬಳಸಬೇಕು. ಭವಿಷ್ಯದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಭಾಷೆಗೆ ಗೌರವ ನೀಡುವಂತಹ ನಿರ್ಧಾರಗಳನ್ನು ಮಾತ್ರ ತೆಗೆದುಕೊಳ್ಳುವಂತೆ ಖಾತರಿ ನೀಡಬೇಕು ಎಂದು ನಾರಾಯಣ ಗೌಡ ಹೇಳಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories