ಕರಾವಳಿ ಜಿಲ್ಲೆಗಳ ರೈಲು ನಿಲ್ದಾಣಗಳ ಮೇಲ್ದರ್ಜೆಗಾಗಿ ಕೇಂದ್ರ ರೈಲ್ವೆ ಸಚಿವರು 100 ಕೋಟಿ ರು. ಅನುದಾನವನ್ನು ಅನುಮೋದಿಸಿದ್ದಾರೆ. ಉಡುಪಿ ರೈಲು ನಿಲ್ದಾಣದಲ್ಲಿ ನೂತನ ಸೌಲಭ್ಯಗಳನ್ನು ಉದ್ಘಾಟಿಸಲಾಗಿದ್ದು, ಅಮೃತ ಭಾರತ ಯೋಜನೆಯಡಿ ಇನ್ನಷ್ಟು ಅಭಿವೃದ್ಧಿ ಹಾಗೂ ವಂದೇ ಭಾರತ್ ರೈಲು ವಿಸ್ತರಣೆಯ ಯೋಜನೆಗಳಿವೆ.
ಕರಾವಳಿ ಜಿಲ್ಲೆಗಳ ಎಲ್ಲಾ ರೈಲು ನಿಲ್ದಾಣಗಳ ಮೇಲ್ದರ್ಜೆಗಾಗಿ 100 ಕೋಟಿ ರು.ಗಳ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅನುಮೋದನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ಈ ಎಲ್ಲಾ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
25
ಪ್ರಯಾಣಿಕರ ಬೇಡಿಕೆಯ ಸೌಲಭ್ಯ
ಬುಧವಾರ ಇಲ್ಲಿನ ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿ. ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿದೆ. ಸುಮಾರು 2.40 ಕೋಟಿ ರು. ವೆಚ್ಚದಲ್ಲಿ ಪ್ರಯಾಣಿಕರ ಬೇಡಿಕೆಯ ಸೌಲಭ್ಯಗಳನ್ನು ಜಿಲ್ಲಾಡಳಿತದ ಸಹಯೋಗದಲ್ಲಿ ಒದಗಿಸಲಾಗಿದೆ ಎಂದು ಹೇಳಿದರು.
35
ಏನೆಲ್ಲಾ ಸೌಲಭ್ಯ?
ಅಮೃತ ಭಾರತ ಯೋಜನೆಯಡಿ ಪ್ಲಾಟ್ ಫಾರ್ಮ್ 2 ಅನ್ನು 2.6 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಹಿರಿಯ ನಾಗರಿಕರ ಅನುಕೂಲಕ್ಕಾಗಿ 3 ಲಿಫ್ಟ್ ಗಳನ್ನು ಅಳವಡಿಸಲಾಗುವುದು. ಬಾರಕೂರು ಮತ್ತು ಮುಲ್ಕಿ ರೈಲ್ವೆ ನಿಲ್ದಾಣಗಳ ಪ್ಲಾಟ್ ಫಾರ್ಮ್‌ಗಳನ್ನು 4.28 ಕೋಟಿ ರು. ವೆಚ್ಚದಲ್ಲಿಅಭಿವೃದ್ಧಿ ಪಡಿಸಲಾಗುವುದು, ಉಡುಪಿ ರೈಲು ನಿಲ್ದಾಣಕ್ಕೆ ಶ್ರೀಕೃಷ್ಣ ರೈಲು ನಿಲ್ದಾಣ ಎಂದು ಹೆಸರಿಸಲು ಪ್ರಯತ್ನ ನಡೆಸಲಾಗುವುದು ಎಂದರು.
ಮಂಗಳೂರಿನಿಂದ ಕಾರವಾರದವರೆಗೆ ದ್ವಿಪಥ ರೈಲ್ವೆ ಹಳಿಗಳು ಈಗಿನ ಅವಶ್ಯಕತೆಯಾಗಿದ್ದು, ಇದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು. ಇದರ ಜೊತೆಗೆ ಮಡಗಾಂವ್ - ಮಂಗಳೂರು ವಂದೇ ಭಾರತ್ ರೈಲನ್ನು ಮುಂಬೈವರೆಗೆ ಮತ್ತು ಬೆಂಗಳೂರು-ಮಂಗಳೂರು ರೈಲನ್ನು ಕಾರವಾರದವರೆಗೆ ವಿಸ್ತರಣೆಗೂ ಕೊಂಕಣ ರೈಲ್ವೆಯೊಂದಿಗೆ ಸಮಾಲೋಚಿಸಿ ಅಡಚಣೆಗಳನ್ನು ನಿವಾರಿಸಲಾಗುತ್ತದೆ ಎಂದರು.
ಶಾಸಕರಾದ ಯಶ್‌ಪಾಲ್ ಎ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕೊಂಕಣ ರೈಲ್ವೆ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಕಾರವಾರ ವಲಯ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ಮತ್ತಿತರರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ