
ಬೆಂಗಳೂರು (ಜು.30): ದೇಶಾದ್ಯಂತ ಆ.13ರಿಂದ 15ರವರೆಗೆ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ರಾಜ್ಯದಲ್ಲಿನ ಎಲ್ಲಾ ಮನೆಗಳ ಮೇಲೂ ಮೂರು ದಿನಗಳ ಕಾಲ ರಾಷ್ಟ್ರಧ್ವಜ ಹಾರಿಸುವಂತೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಕರೆ ನೀಡಿದ್ದಾರೆ. ವಿಧಾನಸೌಧದಲ್ಲಿ ಹರ್‌ಘರ್ ತಿರಂಗಾ ಅಭಿಯಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಆಗಸ್ಟ್ 13ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು.
ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳುವ ಮೂಲಕ ದೇಶಕ್ಕೆ ಮಾದರಿಯಾಗಬೇಕು ಎಂದು ಸರ್ಕಾರಿ ನೌಕರರಿಗೆ ಸೂಚನೆ ನೀಡಿದರು. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ಈ ಅವಧಿಯಲ್ಲಿ ಹಗಲು-ರಾತ್ರಿ ಎನ್ನದೆ ಮೂರು ದಿನಗಳ ಕಾಲ ಇಡೀ ರಾಷ್ಟ್ರದಲ್ಲಿ ಹರ್ ಘರ್ ತಿರಂಗಾ ಅಭಿಯಾನ ನಡೆಸಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ಅದರಂತೆ ಈ ಅಭಿಯಾನಕ್ಕೆ ಕರ್ನಾಟಕದಲ್ಲೂ ಪೂರ್ಣ ಪ್ರಮಾಣದ ಸ್ಪಂದನೆ ದೊರೆಯಬೇಕೆಂಬುದು ರಾಜ್ಯ ಸರ್ಕಾರದ ಸದಾಶಯ. ಇದಕ್ಕೆ ಎಲ್ಲಾ ಅಧಿಕಾರಿಗಳು, ನೌಕರರು ಸ್ಪಂದಿಸಬೇಕು ಎಂದು ಹೇಳಿದರು.
ರಾತ್ರಿ ವೇಳೆಯೂ ರಾಷ್ಟ್ರಧ್ವಜ ಹಾರಿಸಲು ಸರ್ಕಾರ ಅವಕಾಶ
ಸಾರ್ವಜನಿಕರಿಗೂ ಮನವಿ: ದೇಶದ ಎಲ್ಲಾ ಪ್ರಜೆಗಳಲ್ಲೂ ರಾಷ್ಟ್ರ ಪ್ರೇಮ ಇಮ್ಮಡಿಗೊಳಿಸುವ ಅಭಿಯಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಹೀಗಾಗಿ ರಾಜ್ಯದ ಸಾರ್ವಜನಿಕರು ಕೈಮಗ್ಗ, ವಿದ್ಯುತ್ ಮಗ್ಗದಿಂದ ಹತ್ತಿ, ಪಾಲಿಯೆಸ್ಟರ್, ಉಣ್ಣೆ ರೇಷ್ಮೆ ಅಥವಾ ಖಾದಿಯಲ್ಲಿ ತಯಾರಿಸಿರುವ ರಾಷ್ಟ್ರ ಧ್ವಜವನ್ನು ಆ.13 ರಿಂದ 15ರವರೆಗೆ 3 ದಿನಗಳ ಕಾಲ ರಾಜ್ಯದಲ್ಲಿರುವ ಕೋಟಿಗೂ ಹೆಚ್ಚು ಮನೆಗಳ ಮೇಲೆ ಹಾರಿಸಬೇಕು ಎಂದು ಸಾರ್ವಜನಿಕರಲ್ಲಿ ವಿಶೇಷ ಮನವಿ ಮಾಡಿದರು.
1 ಕೋಟಿ ರಾಷ್ಟ್ರಧ್ವಜ ಹಾರಾಟ ಗುರಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ 1 ಕೋಟಿ ರಾಷ್ಟ್ರಧ್ವಜ ಹಾರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿ: ಬೆಂಗೇರಿ ಖಾದಿ ಕೇಂದ್ರಕ್ಕೆ ರಾಹುಲ್ ಗಾಂಧಿ ಶೀಘ್ರ ಭೇಟಿ, ಡಿಕೆಶಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಂಸ್ಕೃತಿ ಸಚಿವ ಕಿಶನ್ ರೆಡ್ಡಿ ಅವರು ‘ಆಜಾದಿ ಕಾ ಅಮೃತ ಮಹೋತ್ಸವ’ ಅಂಗವಾಗಿ ಆಯೋಜಿಸಿರುವ ‘ಹರ್ ಘರ್ ತಿರಂಗಾ’ ಕುರಿತ ಭಾನುವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಆ.13ರಿಂದ 15ರ ವರೆಗೆ 1 ಕೋಟಿ ರಾಷ್ಟ್ರಧ್ವಜ ಹಾರಿಸಲು ಕ್ರಮ ವಹಿಸಲಾಗಿದೆ. ಈ ಪೈಕಿ ಶೇ.60ರಷ್ಟುಗ್ರಾಮೀಣ ಪ್ರದೇಶದ ಸರ್ಕಾರಿ, ಖಾಸಗಿ ಕಚೇರಿಗಳು, ಶಾಲೆ, ಕಾಲೇಜುಗಳು, ಅತಿ ಹೆಚ್ಚು ಜನಸಂಖ್ಯೆ ಇರುವ ಹಳ್ಳಿಗಳಲ್ಲಿ ಹಾರಿಸಲಾಗುವುದು. ಉಳಿದ ಶೇ.40ರಷ್ಟು ರಾಷ್ಟ್ರದ್ವಜಗಳನ್ನು ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ನಗರ ಪ್ರದೇಶಗಳಲ್ಲಿ ಹಾರಿಸಲು ಕ್ರಮ ವಹಿಸಲಾಗಿದೆ ಎಂದರು.