
ಕೋಟಾ: ಕೋಟಾ-ಉದಯಪುರ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಎಂಯುವಿ ಕಾರ್ ಒಂದು ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿಯಾದ ಪರಿಣಾಮ ಕಾರ್‌ನಲ್ಲಿದ್ದ 9 ಮಂದಿ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಗಿನಜಾವ 1 ಗಂಟೆಗೆ ಸಂಭವಿಸಿದೆ. 8 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯವರಾದ ಇವರೆಲ್ಲಾ ತೀರ್ಥಯಾತ್ರೆಯ ಭಾಗವಾಗಿ ಶಾಮ್‌ಜಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್‌ನ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಅತ್ತ ಈ ಬಗ್ಗೆ ಮಾತನಾಡಿದ ಟ್ರಕ್ ಚಾಲಕ, ‘ವಾಹನದ ದೋಷ ಪರಿಶೀಲಿಸಲು ಅದನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವೇಳೆ ವೇಗವಾಗಿ ಬಂದ ಕಾರ್ ಡಿಕ್ಕಿ ಹೊಡೆಯಿತು. ನಾನು 20 ಅಡಿ ದೂರಕ್ಕೆ ಎಸೆಯಲ್ಪಟ್ಟೆ ಹಾಗೂ 10 ನಿಮಿಷದ ಬಳಿಕ ಪ್ರಜ್ಞೆ ಬಂದಾಗ ಪೊಲೀಸ್ ಹಾಗೂ ಆ್ಯಂಬುಲೆನ್ಸ್‌ಗೆ ಕರೆ ಮಾಡಿದೆ’ ಎಂದಿದ್ದಾರೆ.
ದುರ್ಘಟನೆಯಲ್ಲಿ ಮೃತರ ಪರಿವಾರದವರಿಗೆ ಪ್ರಧಾನಿ ಮೋದಿ 2 ಲಕ್ಷ ರು. ಹಾಗೂ ಗಾಯಗೊಂಡವರಿಗೆ 50 ಸಾವಿರ ರು. ಪರಿಹಾರ ಘೋಷಿಸಿದ್ದಾರೆ.
ತಿರುಚಿರಾಪಳ್ಳಿ: ಕರ್ಣವೇಧ ಸಂಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಮಕ್ಕಲ್‌ನಿಂದ ತಂಜಾವೂರ್ ಜಿಲ್ಲೆಯ ತಿರುಕಟ್ಟುಪಳ್ಳಿಗೆ ಮರಳುತ್ತಿದ್ದ ಕಾರ್ ಕೊತುರ್ಪಟ್ಟಿ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಮರಕ್ಕೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ 8 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸಂಭವಿಸಿದ್ದು, 5 ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ