ಸಾಮಾಜಿಕ ನ್ಯಾಯಕ್ಕಾಗಿ ಕಲ್ಪಿಸಲಾಗಿರುವ ಮೀಸಲಾತಿಯು ಮೂಲಭೂತ ಹಕ್ಕು ಅಲ್ಲ, ಸಉಪ್ರೀಂ| ಮೀಸಲಾತಿಗೆ ಕೇಂದ್ರ ಸರ್ಕಾರ, ಬಿಜೆಪಿ ಬದ್ಧ: ನಡ್ಡಾ
ನವದೆಹಲಿ(ಜೂ.13): ಸಾಮಾಜಿಕ ನ್ಯಾಯಕ್ಕಾಗಿ ಕಲ್ಪಿಸಲಾಗಿರುವ ಮೀಸಲಾತಿಯು ಮೂಲಭೂತ ಹಕ್ಕು ಅಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ ಬೆನ್ನಲ್ಲೇ, ಬಿಜೆಪಿ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೀಸಲಾತಿ ಜಾರಿಗೆ ಬದ್ಧವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ.
ಈ ಬಗ್ಗೆ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿದ ನಡ್ಡಾ ಅವರು, ಈ ಸಮಾಜದಲ್ಲಿ ಕೆಲವರು ಮೀಸಲಾತಿ ಕುರಿತಾಗಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಮೀಸಲಾತಿಗೆ ಪರವಾಗಿವೆ. ಸಾಮಾಜಿಕ ನ್ಯಾಯ ಕಲ್ಪಿಸುವ ನಮ್ಮ ಬದ್ಧತೆಯನ್ನು ಮುರಿಯಲಾಗದು. ಸಾಮಾಜಿಕ ಸೌಹಾರ್ಧತೆ ಮತ್ತು ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಸಲ ಹೇಳಿದ್ದಾರೆ ಎಂದು ಹೇಳಿದರು.
ಆದಾಗ್ಯೂ, ಎನ್‌ಡಿಎ ಕೂಟದ ಕೇಂದ್ರ ಹಾಲಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು, ಸರ್ಕಾರಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟಜಾತಿ, ಪಂಗಡ, ಇತರೆ ಹಿಂದುಳಿದ ವರ್ಗ, ಸಾಮಾನ್ಯ ವರ್ಗದ ಬಡವರಿಗೆ ಇರುವ ಮೀಸಲಾತಿ ವಿರುದ್ಧ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಇರುವಂತೆ ಮೀಸಲಾತಿಗೆ ಸಂಬಂಧಿಸಿದ ವಿಚಾರಗಳನ್ನು ಸಂವಿಧಾನದ 9ನೇ ಅನುಚ್ಛೇದಕ್ಕೆ ಸೇರಿಸಲು ಎಲ್ಲ ಪಕ್ಷಗಳು ಒಗ್ಗೂಡಬೇಕು ಎಂದು ಕರೆ ನೀಡಿದ್ದಾರೆ. ಅಲ್ಲದೆ, ಮೀಸಲಾತಿ ಮೂಲಭೂತ ಹಕ್ಕು ಅಲ್ಲದೆ ಇರಬಹುದು. ಆದರೆ, ಇದು ಸಾಂವಿಧಾನಿಕ ಹಕ್ಕು ಎಂದು ಪ್ರತಿಪಾದಿಸಿದ್ದಾರೆ