
ಛತ್ತೀಸ್‌ಗಢ: ಇಲ್ಲಿನ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಭಾರೀ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಕನಿಷ್ಠ 14 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಶನಿವಾರ ರಾಜ್ಯದ ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈ ಬೆಳವಣಿಗೆ ನಡೆದಿದೆ. ಇದು ಇತ್ತೀಚಿನ ದಿನಗಳಲ್ಲಿ ಬಸ್ತಾರ್ ಪ್ರದೇಶದಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಗಳಲ್ಲಿ ಒಂದಾಗಿದೆ.
ಸುಕ್ಮಾ ಜಿಲ್ಲೆಯ ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಪಲೋಡಿ ಮತ್ತು ಪೋಟಕ್ಪಲ್ಲಿ ಪ್ರದೇಶಗಳಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಶುಕ್ರವಾರ ತಡರಾತ್ರಿ ಆರಂಭವಾದ ನಕ್ಸಲ್ ಕಾರ್ಯಾಚರಣೆ ಶನಿವಾರ ಮುಂಜಾನೆವರೆಗೂ ಮುಂದುವರೆಯಿತು. ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ.
ಈ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಎಕೆ-47, ಐಎನ್‌ಎಸ್‌ಎಎಸ್ ರೈಫಲ್‌ಗಳು ಸೇರಿದಂತೆ ಹಲವು ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಸ್ಥಳದಲ್ಲಿ ಇನ್ನೂ ಶೋಧ ಕಾರ್ಯ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಗಗನ್‌ಪಲ್ಲಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದು, ಸ್ಥಳದಿಂದ ಹಂಗಾ ಮಡ್ಕಮ್ ಸೇರಿ ಇಬ್ಬರು ಮಾವೋವಾದಿಗಳ ಮೃತದೇಹಗಳು, ಒಂದು ಎಸ್‌ಎಲ್‌ಆರ್ ಹಾಗೂ ಒಂದು 12-ಬೋರ್ ರೈಫಲ್ ಅನ್ನು ಪತ್ತೆ ಮಾಡಲಾಗಿದೆ. ನಕ್ಸಲರ ಚಲನವಲನದ ಕುರಿತು ಸಿಕ್ಕಿದ್ದ ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರವಾಗಿ ಜಿಲ್ಲಾ ಮೀಸಲು ಪಡೆ ತಂಡವು ಈ ಕಾರ್ಯಾಚರಣೆ ಕೈಗೊಂಡಿತ್ತು.
ಪೊಲೀಸರ ಮಾಹಿತಿ ಪ್ರಕಾರ, ಬಿಜಾಪುರ ಜಿಲ್ಲೆಯ ದಕ್ಷಿಣ ಭಾಗದ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಆರಂಭವಾಯ್ತು, ಸದ್ಯ ಗುಂಡಿನ ಚಕಮಕಿ ಇನ್ನೂ ಮುಂದುವರಿದಿದ್ದು, ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.
ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಅವರು ಕಾರ್ಯಾಚರಣೆಯನ್ನು ಬಹಳ ಹತ್ತಿರದಿಂದಲೇ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ನಂತರ ಹೆಚ್ಚಿನ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಬಸ್ತಾರ್ ಪ್ರದೇಶದಲ್ಲಿ ನಕ್ಸಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವ ಉದ್ದೇಶದಿಂದ ಭದ್ರತಾ ಪಡೆಗಳು ಮುಂದುವರೆದ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ