
ನವದೆಹಲಿ: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಈ ವೇಳೆ ಬೆಂಗಳೂರು ನಗರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದು, ಸಿಎಂ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಬುಧವಾರ ಕೇಂದ್ರ ಸಚಿವರನ್ನು ಭೇಟಿಯಾಗಿ ಸರ್ಕಾರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳ ಕುರಿತು ಸಿಎಂ ಪ್ರಸ್ತಾವನೆ ಸಲ್ಲಿಸಿದ್ದು, ಮೆಟ್ರೋ 3ನೇ ಹಂತ ಯೋಜನೆಯಲ್ಲಿ 44.65 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಮೆಲ್ಸೇತುವೆ ನಿರ್ಮಾಣಕ್ಕೆ ಬಿಎಂಆರ್‌ಸಿಎಲ್ ಮುಂದಾಗಿದ್ದು, 2024 ಸೆ.13ರಂದು ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಿತ್ತು. ಈ ಯೋಜನೆಗೆ ₹9,700 ಕೋಟಿ ಅನ್ನು ಕರ್ನಾಟಕ ಸರ್ಕಾರವೇ ವೆಚ್ಚ ಮಾಡಲಿದೆ. 2026 ಜ.19ರಂದು ಬಿಎಂಆರ್‌ಸಿಎಲ್ ಮಂಡಳಿಯ 118ನೇ ಸಭೆಯಲ್ಲಿ ಸಣ್ಣ ಬದಲಾವಣೆ ಪ್ರಸ್ತಾಪ ಮಾಡಿದ್ದು, ಕೇಂದ್ರ ಸರ್ಕಾರ ಈ ಯೋಜನೆಯನ್ನು ಆರಂಭಿಸಲು ಬಿಎಂಆರ್‌ಸಿಎಲ್‌ಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಮೆಟ್ರೋ 2ನೇ ಹಂತದ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದ್ದು, ಈ ಯೋಜನೆಗೆ ಕೇಂದ್ರ ಸರ್ಕಾರ 2014 ಫೆ.21ರಂದು ₹26,405.14 ಕೋಟಿ ಅಂದಾಜು ವೆಚ್ಚಕ್ಕೆ ಅನುಮತಿ ನೀಡಿತ್ತು. 72.095 ಕಿ.ಮೀ ಉದ್ದ ಹಾಗೂ 61 ನಿಲ್ದಾಣಗಳನ್ನು ಒಳಗೊಂಡಿರುವ ಈ ಯೋಜನೆಯ ಅಂದಾಜು ವೆಚ್ಚ ಈಗ ₹40,425.02 ಕೋಟಿಗೆ ಅಂದರೆ ₹14,019.88 ಕೋಟಿ ಏರಿಕೆ ಮಾಡಲಾಗಿದ್ದು, ಆದಷ್ಟು ಬೇಗ ಈ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು ಎಂದು ಡಿಕೆಶಿ ತಿಳಿಸಿದರು.
ಮೆಟ್ರೋ 3ನೇ ಎ ಹಂತದ ಯೋಜನೆಯ ಭಾಗವಾದ ಸರ್ಜಾಪುರದಿಂದ ಹೆಬ್ಬಾಳದವರೆಗೆ ಒಟ್ಟು 37.804 ಕಿ.ಮೀ (14.28 ಕಿ.ಮೀ ಸುರಂಗ ಹಾಗೂ 23.524 ಕಿ.ಮೀ ಮೇಲ್ಸೇತುವೆ) ಉದ್ದದ ಡಿಪಿಆರ್ ಸಿದ್ಧವಿದ್ದು, ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕೆಲವು ಮಾರ್ಪಾಡು ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದ ₹25,999 ಕೋಟಿ ಅಂದಾಜು ವೆಚ್ಚದ ಪರಿಷ್ಕೃತ ಡಿಪಿಆರ್ ಅನ್ನು 2026 ಏ.29ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದ್ದು, ಆದಷ್ಟು ಬೇಗ ಇದಕ್ಕೆ ಅನುಮತಿ ನೀಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
ಬೆಂಗಳೂರು- ಮೈಸೂರು, ಬೆಂಗಳೂರು- ಕನಕಪುರ, ಬೆಂಗಳೂರು- ತುಮಕೂರು, ಬೆಂಗಳೂರು- ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು- ಕೋಲಾರ ನಡುವೆ ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ (ಆರ್‌ಆರ್‌ಟಿಎಸ್) ಜಾರಿಗೆ ಅನುಮತಿ ನೀಡುವಂತೆ ಕೇಂದ್ರ ಸಚಿವರಿಗೆ ಸಿಎಂ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಅವರ ಪ್ರಸ್ತಾವನೆಗಳಿಗೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರು ಧನಾತ್ಮಕವಾಗಿ ಸ್ಪಂದಿಸಿದ್ದಾರೆ.
Met Hon’ble Union Minister for Housing and Urban Affairs Shri Manohar Lal Khattar and sought speedy approvals for key infrastructure projects that will transform mobility in Bengaluru and drive Karnataka’s next phase of growth.
We discussed the pending proposals under the Urban… pic.twitter.com/ecb7p08DfV— DK Shivakumar (@DKShivakumar) June 10, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ