
ನವದೆಹಲಿ (ಮಾ.02): ಕರ್ನಾಟಕದ ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರದ ಅಧೀನದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ), ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ. ಹೋಟೆಲ್‌ಗಳಲ್ಲಿ ತಯಾರಿಸಲಾಗುವ ಆಹಾರದ ಸುರಕ್ಷತೆ ಹಾಗೂ ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು, ಇಡ್ಲಿ ಬೇಯಿಸುವಾಗ ಬಳಸಲಾಗುವ ಪ್ಲಾಸ್ಟಿಕ್ ಹಾಳೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೇ ಎಫ್‌ಎಸ್‌ಎಸ್‌ಎಐ, ರಾಜ್ಯ ಆಹಾರ ಸುರಕ್ಷತಾ ಇಲಾಖೆಗೆ ಈ ಮೇಲಿನಂತೆ ಸೂಚಿಸಿದೆ. ಅಂತೆಯೇ, ‘ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಹಾಳೆ ಬಳಕೆ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು.
ಹಾಗೆ ಮಾಡುವುದು ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸಬೇಕು ಎಂದು ರಾಜ್ಯ ಆಹಾರ ಸುರಕ್ಷತಾ ಇಲಾಖೆಗೆ ಸೂಚಿಸಲಾಗಿದೆ’ ಎಂದು ಎಫ್‌ಎಸ್‌ಎಸ್‌ಎಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಈ ಬಗ್ಗೆ ಮಾತನಾಡಿರುವ ಪ್ರಾಧಿಕಾರದ ಸಿಇಒ ಜಿ. ಕಮಲ ವರ್ಧಮ ರಾವ್, ‘ಪ್ಲಾಸ್ಟಿಕ್‌ನಿಂದ ಬಿಸ್ಫೆನಾಲ್, ಥಾಲೇಟ್‌ನಂತಹ ಹಾನಿಕಾರಕ ರಾಸಾಯನಿಕಗಳು ಆಹಾರವನ್ನು ಸೇರುತ್ತದೆ. ಅಧಿಕ ತಾಪಮಾನದಡಿ ಕಡಿಮೆ ಗುಣಮಟ್ಟದ ಅಥವಾ ಆಹಾರಕ್ಕೆ ಬಳಸಬಾರದಂತಹ ಪ್ಲಾಸ್ಟಿಕ್ ಉಪಯೋಗದಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ’ ಎಂದು ತಿಳಿಸಿದ್ದಾರೆ. ಇಡ್ಲಿ ಬೇಯಿಸಲು ಸೂಕ್ತ ವಿಧಾನವನ್ನು ಸೂಚಿಸಲಾಗಿದ್ದು, ಅದಕ್ಕೆ ಅನುಮೋದಿಸಲಾದ ವಸ್ತುಗಳನ್ನೇ ಬಳಸುವುದು ಕಡ್ಡಾಯವಾಗಿದೆ.
ಪ್ಲಾಸ್ಟಿಕ್ ಬಳಕೆಗೆ ನಿಷೇಧ: ರಾಜ್ಯದ ಹಲವೆಡೆ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿದ್ದು, ಇದರಿಂದ ಆರೋಗ್ಯಕ್ಕೆ ಮಾರಕವಾಗುವ ಕ್ಯಾನ್ಸರ್‌ಕಾರಕ ಅಂಶ ಇಡ್ಲಿ ಜತೆ ಸೇರುತ್ತಿದೆ. ಹೀಗಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ನಿಷೇಧಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ರಾಜ್ಯದ 251 ಆಹಾರ ಕೇಂದ್ರಗಳಲ್ಲಿ ಆಹಾರಗಳ ಗುಣಮಟ್ಟ ಪರೀಕ್ಷೆ ನಡೆಸಿದ್ದು, ಈ ಪೈಕಿ 51 ಆಹಾರದ ಮಾದರಿಗಳು ಅಸುರಕ್ಷಿತ ಎಂದು ದೃಢಪಟ್ಟಿದೆ.
ಸಿದ್ದರಾಮಯ್ಯರಿಂದ ಸಿಕ್ಕಸಿಕ್ಕವರಿಗೆಲ್ಲಾ ಸಂಪುಟ ದರ್ಜೆ ಸ್ಥಾನ: ಎಚ್.ವಿಶ್ವನಾಥ್
ಈ ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಶೀಟ್ ಬಳಸಿ ಇಡ್ಲಿ ಬೇಯಿಸುತ್ತಿರುವುದು ಕಂಡು ಬಂದಿದ್ದು, ಇನ್ನು ಮುಂದೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಶೀಟ್ ಬಳಕೆ ಮಾಡುವಂತಿಲ್ಲ. ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಗೋಬಿ ಮಂಚೂರಿ, ಕಬಾಬ್, ಕಾಟನ್ ಕ್ಯಾಂಡಿಗಳ ತಯಾರಿಕೆಯಲ್ಲಿ ಬಳಸುವ ಫುಡ್ ಕಲರ್ ಕ್ಯಾನ್ಸರ್‌ಕಾರಕ ಎಂಬ ಕಾರಣಕ್ಕೆ ರಾಜ್ಯದಲ್ಲಿ ನಿಷೇಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ