ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಸರ್ಕಾರದ ನೆರವು ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

Published : Dec 24, 2025, 05:59 AM IST
DK Shivakumar

ಸಾರಾಂಶ

ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧ ಹಂತದ ತ್ಯಾಜ್ಯ ವಿಲೇವಾರಿಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ನವದೆಹಲಿ (ಡಿ.24): ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, ಆರ್‌ಆರ್‌ಟಿಎಸ್‌ ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧ ಹಂತದ ತ್ಯಾಜ್ಯ ವಿಲೇವಾರಿಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಾಜ್ಯ ರಾಜಧಾನಿಗೆ ಅಗತ್ಯವಾಗಿರುವ ಯೋಜನೆಗಳ ಬಗ್ಗೆ ಮನವಿ ಸಲ್ಲಿಸಿದರು.

‘ಬೆಂಗಳೂರು ದೇಶದ ಮಹಾನಗರಗಳಲ್ಲಿ ಒಂದಾಗಿದ್ದು, ಇಲ್ಲಿ ಅನೇಕ ನಗರಾಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಬಾಕಿ ಉಳಿದಿರುವ ಅನುಮತಿ ನೀಡಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ‘ಮೆಟ್ರೋ 2ನೇ ಹಂತದ ಯೋಜನೆ ಪೂರ್ಣಗೊಳಿಸುವ ಪರಿಷ್ಕೃತ ವೆಚ್ಚ ₹26,405 ಕೋಟಿಯಿಂದ ₹40,425 ಕೋಟಿವರೆಗೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರ 2025ರ ಜೂನ್‌ 5ರಂದು ಅನುಮೋದನೆ ನೀಡಿದೆ. ಈ ಪ್ರಸ್ತಾವನೆಯನ್ನು ಕೇಂದ್ರ ಸಚಿವಾಲಯಕ್ಕೆ ಜೂ.9ರಂದು ಕಳುಹಿಸಲಾಗಿದ್ದು, ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಬೇಕು’ ಎಂದು ಹೇಳಿದ್ದಾರೆ.

ಒಪ್ಪಿಗೆಗೆ ಪ್ರಸ್ತಾವನೆ

‘ಮೆಟ್ರೋ 3ಎ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ ಉದ್ದದ ಮಾರ್ಗದಲ್ಲಿ 28 ನಿಲ್ದಾಣಗಳನ್ನು ಒಳಗೊಂಡಿದೆ. ಇದರಲ್ಲಿ 22.14 ಕಿ.ಮೀ ಮೇಲ್ಸೇತುವೆ ಹಾಗೂ 14.45 ಕಿ.ಮೀ ಸುರಂಗ ಪಥದಲ್ಲಿ ಸಾಗಲಿದ್ದು, ಈ ಯೋಜನೆಗೆ ಒಟ್ಟು ₹28,405 ಕೋಟಿ ಅಂದಾಜು ಮಾಡಲಾಗಿದೆ. ಈ ಯೋಜನೆಗೆ 2025 ಜ.10ರಂದು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದ್ದು, ಜ.15ರಂದು ಕೇಂದ್ರ ಸಚಿವಾಲಯದ ಒಪ್ಪಿಗೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸಚಿವಾಲಯದ ಒಪ್ಪಿಗೆ ಬಾಕಿ ಇದ್ದು, ಆದಷ್ಟು ಬೇಗ ಒಪ್ಪಿಗೆ ನೀಡಬೇಕು’ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜರ್ಮನಿಯಲ್ಲೂ ‘ಮತಚೋರಿ’ ಆರೋಪ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?