
ನವದೆಹಲಿ: ಖಾಸಗಿ ಕಂಪನಿಯೊಂದರ ಕಡತ ವಿಲೇವಾರಿ ಮಾಡಲು 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಅಧಿಕಾರಿಯನ್ನು ಸಿಬಿಐ (CBI) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ವಿಶೇಷವೆಂದರೆ ಈ ಅಧಿಕಾರಿ ತನ್ನ ಪತ್ನಿಯ ಮೂಲಕ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬಂಧಿತ ಅಧಿಕಾರಿಯನ್ನು 2020ರ ಬ್ಯಾಚ್‌ನ ಇಂಡಿಯನ್ ಸಿವಿಲ್ ಅಕೌಂಟ್ಸ್ ಸರ್ವಿಸ್ (ICAS) ಅಧಿಕಾರಿ ಸಂದೀಪ್ ಎಂದು ಗುರುತಿಸಲಾಗಿದೆ. ಇವರು ವಾರ್ತಾ ಮತ್ತು ಪ್ರಸಾರ ಸಚಿವಾಲಯದಲ್ಲಿ ಆಂತರಿಕ ಹಣಕಾಸು ಸಲಹೆಗಾರ (IFA) ಹಾಗೂ ಡೆಪ್ಯುಟಿ ಕಂಟ್ರೋಲರ್ ಆಫ್ ಅಕೌಂಟ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಸಂದೀಪ್ ಅವರು ಖಾಸಗಿ ಕಂಪನಿಯೊಂದರ ಗುತ್ತಿಗೆ ನವೀಕರಣಕ್ಕೆ (Renewal file) ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಉದ್ಯಮಿಯೊಬ್ಬರಿಂದ 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ನಂತರ ಮಾತುಕತೆ ನಡೆಸಿ 10 ಲಕ್ಷ ರೂಪಾಯಿ ನೀಡಲು ಒಪ್ಪಿಗೆ ಸೂಚಿಸಲಾಗಿತ್ತು. ಹಣ ನೀಡದಿದ್ದರೆ ಕಡತವನ್ನು ವಿಲೇವಾರಿ ಮಾಡದೆ ವಿಳಂಬ ಮಾಡುವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ಲಂಚದ ಹಣಕ್ಕೆ ಬೇಡಿಕೆಯಿಟ್ಟ ಬಗ್ಗೆ ಉದ್ಯಮಿಯು ಸಿಬಿಐಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಮಂಗಳವಾರ ಸಿಬಿಐ ಅಧಿಕಾರಿಗಳು ಸಾಕ್ಷಿ ಸಮೇತ ಬಲೆ ಬೀಸಿದ್ದರು. ಸಂದೀಪ್ ಅವರ ಸೂಚನೆಯಂತೆ ಅವರ ಪತ್ನಿಯು ಲಂಚದ 10 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ತಾನು ನೇರವಾಗಿ ಹಣ ಪಡೆದರೆ ಸಿಕ್ಕಿಬೀಳುವ ಭಯದಿಂದ ಸಂದೀಪ್ ತನ್ನ ಪತ್ನಿಯ ಮೂಲಕ ಹಣ ಪಡೆಯುವ ಪ್ಲಾನ್ ಮಾಡಿದ್ದರು. ಆದರೆ ಸಿಬಿಐ ಹದ್ದಿನ ಕಣ್ಣು ಈ ತಂತ್ರವನ್ನೂ ವಿಫಲಗೊಳಿಸಿದೆ. ಸದ್ಯ ಸಂದೀಪ್ ಅವರನ್ನು ಬಂಧಿಸಲಾಗಿದ್ದು, ಅವರ ಪತ್ನಿಯ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ. ಈ ಘಟನೆಯು ಕೇಂದ್ರ ಸಚಿವಾಲಯದ ಉನ್ನತ ಮಟ್ಟದ ಅಧಿಕಾರಿಗಳಲ್ಲಿ ಭ್ರಷ್ಟಾಚಾರ ಎಷ್ಟರ ಮಟ್ಟಿಗೆ ಬೇರೂರಿದೆ ಎಂಬುದಕ್ಕೆ ಕನ್ನಡಿ ಹಿಡಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ